ರಾಗಾ ಯಾತ್ರೆಗೆ ಅಡ್ಡಿ ಕೈ ಪ್ರತಿಭಟನೆ

ಬಿಜೆಪಿ ವಿರುದ್ಧ ಕಿಡಿ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ ಯಾತ್ರೆಯು ಅಸ್ಸಾಂನಲ್ಲಿ ಸಾಗುತ್ತಿದ್ದ ವೇಳೆ ಅಲ್ಲಿನ ಬಿಜೆಪಿ ಕಾರ್ಯಕರ್ತರು ಬಸ್ ಅಡ್ಡಗಟ್ಟಿ ಹಲ್ಲೆ ನಡೆಸಿರುವುದನ್ನು ಖಂಡಿಸಿ ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ನೇತೃತ್ವದಲ್ಲಿ ನಗರದ ಫ್ರೀಡಂ ಪಾರ್ಕ್‌ನಲ್ಲಿ ಇಂದು ಪ್ರತಿಭಟನೆ ನಡೆಸಲಾಯಿತು. ಸಚಿವರಾದ ಕೃಷ್ಣಬೈರೇಗೌಡ, ಕೆ.ಜೆ. ಜಾರ್ಜ್, ಎಂಎಲ್‌ಸಿ ಬಿ.ಕೆ. ಹರಿಪ್ರಸಾದ್, ಮುಖಂಡರಾದ ಹೆಚ್.ಎಂ. ರೇವಣ್ಣ, ಸಲೀಂ ಅಹ್ಮದ್, ಯು.ಬಿ. ವೆಂಕಟೇಶ್, ಮತ್ತಿತರರು ಭಾಗವಹಿಸಿದ್ದರು.

ಬೆಂಗಳೂರು, ಜ.೨೩- ಕಾಂಗ್ರೆಸ್ ನಾಯಕರಾಹುಲ್ ಗಾಂಧಿ ನೇತೃತ್ವದ ನಡೆಯುತ್ತಿರುವ ಭಾರತ್ ಜೋಡೋ ನ್ಯಾಯ ಯಾತ್ರೆಗೆ ಅಡ್ಡಿಪಡಿಸುತ್ತಿರುವ ಗೂಂಡಾಗಳು ಹಾಗೂ ಅಸ್ಸಾಂನ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕರು ಬೃಹತ್ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.ನಗರದಲ್ಲಿಂದು ಫ್ರೀಡಂ ಪಾರ್ಕಿನ ಮೈದಾನದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಜಮಾಯಿಸಿದ ಸಚಿವರು,ಕಾಂಗ್ರೆಸ್ ನಾಯಕರು, ಪದಾಧಿಕಾರಿಗಳು, ಅಸ್ಸಾಂನಲ್ಲಿ ಸಾಗುತ್ತಿದ್ದ ಯಾತ್ರೆಗೆ ಬಿಜೆಪಿ ಕಾರ್ಯಕರ್ತರು ರಾಹುಲ್ ಗಾಂಧಿ ಸಾಗುತ್ತಿದ್ದ ಬಸ್ಸನ್ನು ಅಡ್ಡಗಟ್ಟಿ ಅವರ ಮೇಲೆ ದಾಳಿ ನಡೆಸಲು ಯತ್ನಿಸಿರುವುದು ಖಂಡನೀಯ ಎಂದರು.ಸಮಾಜದ ಎಲ್ಲರಿಗೂ ಸಮಾನತೆ, ಸೌಲಭ್ಯ, ನ್ಯಾಯ ದೊರೆತಾಗ ಮಾತ್ರ ರಾಮರಾಜ್ಯ ಆಗುತ್ತದೆ, ಆದರೆ, ರಾಹುಲ್ ಗಾಂಧೀ ಅವರ ನ್ಯಾಯ ಯಾತ್ರೆಯ ಮೇಲೆ ದಾಳಿ ನಡೆಯುತ್ತಿರುವಾಗ ನ್ಯಾಯ ಸಿಗಲು ಹೇಗೆ ಸಾಧ್ಯ, ರಾಮರಾಜ್ಯ ಆಗಲು ಹೇಗೆ ಸಾಧ್ಯ. ಅಲ್ಲದೆ, ರಾಜಕೀಯ ಸ್ವಾರ್ಥಕ್ಕಾಗಿ ಇಂದು ದೇಶವನ್ನು ಧರ್ಮ, ಜಾತಿ ಹೆಸರಲ್ಲಿ ಒಡೆಯಲಾಗುತ್ತಿದೆ. ಇದು ದೇಶದ ಸಮಗ್ರತೆ, ಸಾರ್ವಭೌಮತ್ವಕ್ಕೆ ಮಾರಕವಾಗಲಿದೆ. ಈ ಬಗ್ಗೆ ಕೇಂದ್ರ ಸರ್ಕಾರ ಕೂಡಲೇ ಎಚ್ಚೆತ್ತುಕೊಳ್ಳಬೇಕು ಎಂದು ಪ್ರತಿಭಟನಾಕಾರರು ಹೇಳಿದರು.ರಾಹುಲ್ ಜೀ ಅವರ ನ್ಯಾಯ ಯಾತ್ರೆಯಲ್ಲಿ ಬಿಜೆಪಿಯ ಕಾರ್ಯಕರ್ತರು ಉದ್ದೇಶಪೂರ್ವಕವಾಗಿ ಘೋಷಣೆ ಕೂಗಿ, ದಾಳಿ ಮಾಡುತ್ತಿರುವುದು ಅಕ್ಷಮ್ಯ ಮತ್ತು ಹೇಯ ಕೃತ್ಯ. ಇದು ಪ್ರಜಾಪ್ರಭುತ್ವ ನೀತಿಗೆ ವಿರುದ್ಧವಾಗಿದೆ. ಬಿಜೆಪಿ ಬಾಯಲ್ಲಿ ಶಾಂತಿ ಮಂತ್ರ ಪಠಿಸುತ್ತದೆ. ಬಗಲಲ್ಲಿ ದೊಣ್ಣೆ ಹಿಡಿದು ಹಲ್ಲೆಗೆ ಹೋಗುತ್ತದೆ.೨೫ ಬಿಜೆಪಿ ಕಾರ್ಯಕರ್ತರು ಬಡಿಗೆ ಹಿಡಿದು ತಮ್ಮ ನ್ಯಾಯ ಯಾತ್ರೆಯ ಬಸ್ ಹಿಂದೆ ಬಂದಿದ್ದರು ಎಂದು ನಾಗಾಂವ್ ನಲ್ಲಿ ಸ್ವತಃ ರಾಹುಲ್ ಗಾಂಧಿ ಅವರೇ ಹೇಳಿದ್ದಾರೆ. ಜೊತೆಗೆ ಅಸ್ಸಾಂನ ಬಿಜೆಪಿ ಸರ್ಕಾರ ನ್ಯಾಯ ಯಾತ್ರೆಯಲ್ಲಿ ಭಾಗಿಯಾಗದಂತೆ ಆ ರಾಜ್ಯದ ಜನತೆಗೆ ಬೆದರಿಕೆ ಹಾಕುತ್ತಿದೆ. ನಾವು ಪ್ರಜಾಪ್ರಭುತ್ವ ರಾಷ್ಟ್ರದಲ್ಲಿದ್ದೇವೋ ಅಥವಾ ಸರ್ವಾಧಿಕಾರಿ ರಾಷ್ಟ್ರದಲ್ಲಿದ್ದೇವೆಯೋ ಎಂದು ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಕಾಂಗ್ರೆಸ್ ನಾಯಕರು ಕಿಡಿಕಾರಿದರು.ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ರಾಹುಲ್ ಗಾಂಧೀ ಅವರ ಭಾರತ್ ಜೋಡೋ ಯಾತ್ರೆಗೆ ಮತ್ತು ನ್ಯಾಯಯಾತ್ರೆಗೆ ದೇಶಾದ್ಯಂತ ದೊರಕುತ್ತಿರುವ ಜನ ಬೆಂಬಲದಿಂದ ಬಿಜೆಪಿ ವಿಚಲಿತವಾಗಿದೆ. ಹೀಗಾಗಿಯೇ ಈ ರೀತಿ ದಾಳಿ ಮಾಡುತ್ತಿದೆ ಎಂದು ತರಾಟೆಗೆ ತೆಗೆದುಕೊಂಡರು.ದೇಶದ ಎಲ್ಲಾ ಪ್ರದೇಶ ಕಾಂಗ್ರೆಸ್ ಸಮಿತಿಯ ಮುಖ್ಯಸ್ಥರು, ರಾಜ್ಯ ಉಸ್ತುವಾರಿಗಳು, ಪಕ್ಷದ ಕಾರ್ಯದರ್ಶಿಗಳು, ಮುಂಚೂಣಿ ಸಂಘಟನೆಗಳ ಮುಖ್ಯಸ್ಥರು, ಇಲಾಖೆಗಳು ಮತ್ತು ಕೋಶಗಳ ಮುಖ್ಯಸ್ಥರಿಗೆ ಪ್ರತಿಭಟನೆ ನಡೆಸಲು ಸೂಚಿಸಲಾಗಿದೆ. ಅದರಂತೆ ದೇಶದ ಎಲ್ಲೆಡೆ ಪ್ರತಿಭಟನೆ ನಡೆಸಲಾಗುತ್ತಿದೆ.ಅಲ್ಲದೆ, ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ್ ಯಾತ್ರೆಯು ಜನವರಿ ೧೪ ರಂದು ಮಣಿಪುರದಲ್ಲಿ ಪ್ರಾರಂಭವಾಯಿತು, ಯಶಸ್ವಿಯಾಗಿ ಪ್ರಯಾಣಿಸಿದೆ. ಮಣಿಪುರ, ನಾಗಾಲ್ಯಾಂಡ್, ಅರುಣಾಚಲ ಪ್ರದೇಶದ ಮೂಲಕ ಮತ್ತು ಈಗ ಅಸ್ಸಾಂ ಪ್ರವೇಶಿಸಿದೆ.ನಮಗೆ ತಿಳಿದಿರುವಂತೆ, ಬಿಜೆಪಿಯು ವಿಶೇಷವಾಗಿ ಅಸ್ಸಾಂನ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಈ ಶಾಂತಿಯುತ ಯಾತ್ರೆಯನ್ನು ಅಡ್ಡಿಪಡಿಸಲು ಹತಾಶವಾಗಿ ಪ್ರಯತ್ನಿಸುತ್ತಿದ್ದಾರೆ ಎಂದು ಅವರು ಹೇಳಿದರು.ಕಳೆದ ಎರಡು ದಿನಗಳಿಂದ, ಭಾರತ್ ಜೋಡೋ ನ್ಯಾಯ್ ಯಾತ್ರೆಯ ಬೆಂಗಾವಲು ಪಡೆಗಳ ಮೇಲೆ ಯೋಜಿತ ದಾಳಿಗಳನ್ನು ನಾವು ನೋಡಿದ್ದೇವೆ ಮತ್ತು ಈ ತೊಂದರೆ ಕೊಡುವವರು ನಮ್ಮ ಯಾತ್ರೆಯ ಪೋಸ್ಟರ್ಗಳನ್ನು ಹರಿದು ಹಾಕುವ ನಿದರ್ಶನಗಳನ್ನು ನೋಡಿದ್ದೇವೆ ಎಂದು ಡಿಕೆಶಿ ಹೇಳಿದರು.ಪ್ರತಿಭಟನೆಯಲ್ಲಿ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣ ಭೈರೇಗೌಡ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಪರಿಷತ್ ಸದಸ್ಯರಾದ ಬಿ.ಕೆ.ಹರಿ ಪ್ರಸಾದ್, ಯುಬಿ.ವೆಂಕಟೇಶ್, ಮಾಜಿ ಸಚಿವ ಎಚ್.ಎಂ.ರೇವಣ್ಣ ಸೇರಿದಂತೆ ಬೆಂಗಳೂರು ಕೇಂದ್ರ, ಉತ್ತರ, ದಕ್ಷಿಣ, ಪೂರ್ವ ಮತ್ತು ಪಶ್ವಿಮ ಜಿಲ್ಲಾ ಕಾಂಗ್ರೆಸ್ ಸಮಿತಿಗಳ ಅಧ್ಯಕ್ಷರು, ಮಾಜಿ ಬಿಬಿಎಂಪಿ ಸದಸ್ಯರುಗಳು, ಮುಂಚೂಣಿ ಘಟಕ ವಿಭಾಗಗಳ ಮುಖ್ಯಸ್ಥರುಗಳು ಹಾಗೂ ಪಕ್ಷದ ಹಿರಿಯ ಮುಖಂಡರುಗಳು ಭಾಗವಹಿಸಿದ್ದರು.