ರಾಜಹಂಸಗಡ ಕೋಟೆ ಅಭಿವೃದ್ದಿಗೆ ಹೆಚ್ಚುವರಿ 5 ಕೋಟಿ ಅನುದಾನ ಸಿ.ಎಂ.


ಬೆಳಗಾವಿ, ಮಾ.2: ದೇಶ ಕಂಡ ಅಪ್ರತಿಮ ನಾಯಕ ಹಾಗೂ ಹಿಂದೂ ಧರ್ಮದ ರಕ್ಷಣೆಗೆ ಕೆಚ್ಚೆದೆಯ ಹೋರಾಟ ಮಾಡಿರುವ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿರುವುದು ಸಂತಸ ತಂದಿದೆ. ರಾಜಹಂಸಗಡ ಕೋಟೆಯ ಸಮಗ್ರ ಅಭಿವೃದ್ಧಿಗೆ ಹೆಚ್ಚುವರಿಯಾಗಿ 5 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೆ.ಆರ್.ಐ.ಡಿ.ಎಲ್, ಪ್ರವಾಸೋದ್ಯಮ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಗುರುವಾರ (ಮಾ.2) ರಾಜಹಂಸಗಡ ಕೋಟೆ ಆವರಣದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಯನ್ನು ಅನಾವರಣಗೊಳಿಸಿ ಅವರು ಮಾತನಾಡಿದರು.
ಈ ಅನುದಾನವನ್ನು ರಾಜಹಂಸಗಡ ಕೋಟೆ ಅಭಿವೃದ್ಧಿಗೆ ಪೂರಕವಾಗಿ ಸಮುದಾಯ ಭವನ, ವಿಶ್ರಾಂತಿ ಗೃಹ ನಿರ್ಮಾಣ ಜೊತೆಗೆ ಇತರ ಮೂಲಭೂತ ಸೌಕರ್ಯ ಕಲ್ಪಿಸಿ, ಪ್ರವಾಸಿ ತಾಣವನ್ನಾಗಿ ಮಾರ್ಪಾಡು ಮಾಡಲಾಗುವುದು ಎಂದು ತಿಳಿಸಿದರು.
ಕೋಟೆ ಅಭಿವೃದ್ದಿಗೆ ಅನುದಾನ ಬಿಡುಗಡೆ:
ರಾಜಹಂಸಗಡ ಕೋಟೆಯ ಅಭಿವೃದ್ಧಿಗೆ 2008 ರಲ್ಲಿ ಸಿಎಂ ಯಡಿಯೂರಪ್ಪ ಅವರು 14 ಕೋಟಿ ರೂಪಾಯಿ ಮಂಜೂರು ಮಾಡಿದರು. ಜನಾರ್ದನ ರೆಡ್ಡಿ ಅವರು ಅಂದಿನ ಪ್ರವಾಸೋದ್ಯಮ ಇಲಾಖೆಯ ಸಚಿವರಾಗಿದ್ದರು. ಶಾಸಕ ಸಂಜಯ ಪಾಟೀಲ ಅವರ ಪ್ರಯತ್ನದ ಫಲವಾಗಿ ಕೋಟೆಯ ಆವರಣದಲ್ಲಿ ಮೂಲಸೌಕರ್ಯ ಒದಗಿಸಲು ಅನುದಾನ ಬಿಡುಗಡೆ ಮಾಡಲಾಗಿತ್ತು.
ಈಗಾಗಲೇ ಕೋಟೆ ಅಭಿವೃದ್ದಿಗೆ ನಿಗದಿಯಾಗಿರುವ ಅನುದಾನದ ಜೊತೆಗೆ ಹೆಚ್ಚುವರಿಯಾಗಿ 5 ಕೋಟಿ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.
ರಾಜಹಂಸ ಕೋಟೆ ಅದ್ಭುತವಾಗಿದೆ. ಶಿವಾಜಿ ಮಹಾರಾಜರ ಕಾಲದ ಗತವೈಭವ, ಸಂಸ್ಕೃತಿ ಸಾರುವ ಕೋಟೆಯಾಗಿದೆ. ಶಿವಾಜಿ ಮಹಾರಾಜರ ವ್ಯಕ್ತಿತ್ವದ ತಕ್ಕ ಹಾಗೆ ಮೂರ್ತಿ ಪ್ರತಿಷ್ಠಾಪನೆಯಾಗಿದೆ. ಮುಂದಿನ ದಿನಗಳಲ್ಲಿ ಕೋಟೆ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗುವದು ಎಂದು ತಿಳಿಸಿದರು.
ಇದಕ್ಕೂ ಮುಂಚೆ ನಗಾರಿ ಬಾರಿಸುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿಗೆ ಪುಷ್ಪಾರ್ಚನೆ ಮಾಡಿದರು.
ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ, ಸಂಸದೆ ಮಂಗಳಾ ಅಂಗಡಿ, ಗೋಕಾಕ ಶಾಸಕರಾದ ರಮೇಶ ಜಾರಕಿಹೊಳಿ, ಬೆಳಗಾವಿ ಉತ್ತರ ವಿಧಾನಸಭಾ ಮತಕ್ಷೇತ್ರದ ಶಾಸಕರಾದ ಅನೀಲ ಬೆನಕೆ, ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ, ಪ್ರಾದೇಶಿಕ ಆಯುಕ್ತರಾದ ಎಂ.ಜಿ ಹಿರೇಮಠ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪ ನಿರ್ದೇಶಕರಾದ ವಿದ್ಯಾವತಿ ಭಜಂತ್ರಿ ಅವರು ಉಪಸ್ಥಿತರಿದ್ದರು.
ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಸ್ವಾಗತಿಸಿದರು. ವಿನಾಯಕ ಮೊರೆ ಹಾಗೂ ತಂಡದವರಿಂದ ನಾಡಗೀತೆ ಪ್ರಸ್ತುತ ಪಡಿಸಲಾಯಿತು. ಬಸವರಾಜ ಕುಪ್ಪಸಗೌಡರ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ರಾಜಹಂಸಗಡದ ಗ್ರಾಮಸ್ಥರು ಸೇರಿದಂತೆ ನೂರಾರು ಜನರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು