ರಾಜಿ ಸೂತ್ರಕ್ಕೆ ಒಪ್ಪಿಗೆ:ಮೊದಲ ಅವಧಿ ಸಿಎಂ ನನಗೆ ಬೇಕು ಡಿಕೆಶಿ ಪಟ್ಟು

ನವದೆಹಲಿ, ಮೇ.17- ಮುಖ್ಯಮಂತ್ರಿ ಗಾದಿಗಾಗಿ ಪಟ್ಟುಹಿಡಿದಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅಧಿಕಾರ ಹಂಚಿಕೆ ಸೂತ್ರಕ್ಕೆ ಒಪ್ಪಿಗೆ ಸೂಚಿಸಿದ್ದಾರೆ. ಆದರೆ ಐದು ವರ್ಷಗಳ ಅವಧಿಯಲ್ಲಿ ಮೊದಲ ಎರಡೂವರೆ ವರ್ಷಗಳ ಕಾಲ ತಾವೇ ಮೊದಲು ಮುಖ್ಯಮಂತ್ರಿ ಹುದ್ದೆ ಅಲಂಕರಿಸುವುದಾಗಿ ಹೇಳಿದ್ದಾರೆ. ಇದು ಪಕ್ಚದ ವರಿಷ್ಠರನ್ನು ಮತ್ತಷ್ಟು ಪೇಚಿಗೆ ಸಿಲುಕುವಂತೆ ಮಾಡಿದೆ.
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಐತಿಹಾಸಿಕ ಗೆಲುವು ಸಾಧಿಸಿದೆ. ಆದರೆ ನೂತನ ಮುಖ್ಯಮಂತ್ರಿ ಆಯ್ಕೆ ವಿಚಾರದಲ್ಲಿ ಡಿಕೆಶಿ ಮತ್ತು ಸಿದ್ದರಾಮಯ್ಯ ಅವರು ತಮ್ಮ ಬಿಗಿಪಟ್ಟು ಮುಂದುವರೆಸಿದ್ದರಿಂದ ಕಾಂಗ್ರೆಸ್ ಹೈಕಮಾಂಡ್ ತೀವ್ರ ಇಕ್ಕಟ್ಟಿಗೆ ಸಿಲುಕಿದೆ. ಆದರೆ ಡಿಕೆಶಿಯವರು ಅಧಿಕಾರ ಹಂಚಿಕೆ ಸೂತ್ರಕ್ಕೆ ಒಪ್ಪಿಗೆ ಸೂಚಿಸಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಮುಖ್ಯಮಂತ್ರಿ ಹುದ್ದೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಈಗ ಅಧಿಕಾರ ಹಂಚಿಕೆ ಸೂತ್ರಕ್ಕೆ ಡಿಕೆಶಿ ಸಹಮತ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಒಂದೆರಡು ದಿನಗಳಲ್ಲಿ ಮುಖ್ಯಮಂತ್ರಿ ಯಾರಸಗಬೇಕೆಂಬ ವಿಷಯವನ್ನು ಪ್ರಕಟಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇಂದು ಬೆಳಿಗ್ಗೆಯಿಂದ ದೆಹಲಿಯಲ್ಲಿ ಖರ್ಗೆಯವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕೇಂದ್ರೀಯ ವೀಕ್ಷಕರು, ಡಿಕೆಶಿ, ಸಿದ್ದರಾಮಯ್ಯ ಹಾಗೂ ನೂತನವಾಗಿ ಆಯ್ಕೆಯಾದ ಶಾಸಕರ ಜತೆ ಸರಣಿ ಸಭೆಗಳನ್ನು ನಡೆಸಿದ ಬಳಿಕ ಈ ತೀರ್ಮಾನಕ್ಕೆ ಬರಲಾಗಿದೆ ಎಂದು ಮೂಲಗಳು ತಿಳಿಸಿವೆ.
ಸಿಎಂ ಹುದ್ದೆಯ ಆಕಾಂಕ್ಷಿಯಾಗಿರುವ ಇಬ್ಬರೂ ನಾಯಕರು ತಲಾ ಎರಡೂವರೆ ವರ್ಷ ಮುಖ್ಯಮಂತ್ರಿಯಾಗಲಿದ್ದಾರೆ. ಎರಡೂ ವರ್ಷ ಪೂರ್ಣಗೊಂಡ ಬಳಿಕ ಮತ್ತೊಬ್ಬರು ಮುಖ್ಯಮಂತ್ರಿ ಹುದ್ದೆ ಅಲಂಕರಿಸಲಿದ್ದಾರೆ. ಈ ಬಗ್ಗೆ ಸಭೆಯಲ್ಲಿ ಒಮ್ಮತಕ್ಕೆ ಬರಲಾಗಿದೆ ಎಂದು ಹೇಳಲಾಗಿದೆ.
ಆದರೆ, ಡಿಕೆಶಿಯವರು ಅಧಿಕಾರ ಹಂಚಿಕೆ ಸೂತ್ರಕ್ಕೆ ಒಪ್ಪಿಗೆ ಸೂಚಿಸಿದ್ದರಾದರೂ ಮೊದಲ ಎರಡೂವರೆ ವರ್ಷದ ಅವಧಿಗೆ ತಾವೇ ಮುಖ್ಯಮಂತ್ರಿ ಯಾಗುವುದಾಗಿ ಬೇಡಿಕೆ ಮುಂದಿಟ್ಟಿದ್ದಾರೆ.
ಮುಖ್ಯಮಂತ್ರಿ ಆಯ್ಕೆ ಕುರಿತಂತೆ ಸಮಾಲೋಚನಾ ಸಭೆಗಳು ಮುಂದುವರೆದಿರುವ ಹಿನ್ನೆಲೆಯಲ್ಲಿ ಮುಂದಿನ ಎರಡು ದಿನಗಳ ಕಾಲ ತರಾತುರಿಯಲ್ಲಿ ಮುಖ್ಯಮಂತ್ರಿ ಯಾರಾಗಬೇಕೆಂಬ ಹೆಸರನ್ನು ಪ್ರಕಟಿಸದಿರಲು ಹೈಕಮಾಂಡ್ ಮುಂದಾಗಿದೆ.
ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ರಾಜಧಾನಿ ದೆಹಲಿಯಲ್ಲೇ ಬೀಡು ಬಿಟ್ಟಿದ್ದು, ಮುಖ್ಯಮಂತ್ರಿ ಆಯ್ಕೆ ಕುರಿತಂತೆ ಯಾವುದೇ ಹೇಳಿಕೆಗಳನ್ನು ನೀಡಬಾರದು ಎಂದು ಉಭಯ ನಾಯಕರಿಗೆ ಹೈಕಮಾಂಡ್ ತಾಕೀತು ಮಾಡಿದೆ.
ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಬಿಜೆಪಿ 66 ಹಾಗೂ ಜೆಡಿಎಸ್ 19 ಕ್ಷೇತ್ರಗಳಲ್ಲಿ ಜಯಗಳಿಸಿತ್ತು.