ರಾಜೀನಾಮೆ ಸಿ.ಎಂ ನಿರಾಕರಣೆ

ನವದೆಹಲಿ,ಜು.೧೭- ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಹೈಕಮಾಂಡ್ ಸೂಚಿಸಿಲ್ಲ. ರಾಜೀನಾಮೆ ನೀಡುವೆ ಎಂಬ ವರದಿಗಳು ಶುದ್ಧ ಸುಳ್ಳು, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪರವರು ಸ್ಪಷ್ಟಪಡಿಸಿದ್ದಾರೆ.
ದೆಹಲಿಯ ಕರ್ನಾಟಕ ಭವನದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ವರಿಷ್ಠರು ಸೂಚನೆ ನೀಡಿದ್ದಾರೆ ಎಂಬ ವರದಿಗಳನ್ನು ತಳ್ಳಿ ಹಾಕಿದ ಅವರು, ವರದಿಗಳಲ್ಲಿ ಸತ್ಯಾಂಶ ಇಲ್ಲ, ರಾಜೀನಾಮೆ ನೀಡುವಂತೆ ಹೈಕಮಾಂಡ್ ಸೂಚಿಸಿಲ್ಲ ಎಂದರು.
ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ ಅವರು ಮತ್ತೆ ಆಗಸ್ಟ್ ಮೊದಲ ವಾರದಲ್ಲಿ ದೆಹಲಿಗೆ ಬಂದು ವರಿಷ್ಠರನ್ನು ಭೇಟಿ ಮಾಡುತ್ತೇನೆ ಎಂದರು.
ಕೆಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂಬ ವರದಿಗಳು ಬಿತ್ತರವಾಗುತ್ತಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ದಿಸೀಸ್ ನಾಟ್ ಟ್ರೂಥ್ ಎಂದು ಹೇಳಿದರು.
ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವಿರಾ ಎಂಬ ಪ್ರಶ್ನೆಗೆ ‘ನಾಟ್ ಅಟ್ ಆಲ್’ ಎಂದು ಮೂರು ಬಾರಿ ಗಟ್ಟಿ ಧ್ವನಿಯಲ್ಲಿ ಹೇಳಿದರು.
ಜೆ.ಪಿ. ನಡ್ಡಾ -ರಾಜನಾಥ್ ಸಿಂಗ್ ಭೇಟಿ
ನಾಯಕತ್ವ ಗೊಂದಲಗಳಿಗೆ ತೆರೆ ಎಳೆಯಲು ನಿನ್ನೆ ದೆಹಲಿಗೆ ಆಗಮಿಸಿ ರಾತ್ರಿ ಪ್ರಧಾನಿ ನರೇಂದ್ರಮೋದಿ ಅವರನ್ನು ಭೇಟಿ ಮಾಡಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಇಂದು ಬೆಳಿಗ್ಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹಾಗೂ ರಕ್ಷಣಾ ಸಚಿವ ರಾಜನಾಥ್‌ಸಿಂಗ್ ಅವರನ್ನು ಭೇಟಿ ಮಾಡಿದ್ದರು.
ದೆಹಲಿಯ ಮೋತಿಲಾಲ್ ನೆಹರು ರಸ್ತೆಯಲ್ಲಿರುವ ಜೆ.ಪಿ. ನಡ್ಡಾ ಅವರ ನಿವಾಸಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಮ್ಮ ಪುತ್ರ ವಿಜಯೇಂದ್ರ ಅವರ ಜತೆ ತೆರಳಿ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿದರು.
ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಎದ್ದಿರುವ ಗೊಂದಲಗಳಿಗೆ ತೆರೆ ಎಳೆದು ಅನಗತ್ಯವಾಗಿ ಈ ಬಗ್ಗೆ ಮಾತನಾಡುತ್ತಿರುವವರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿ ಎಂದು ಯಡಿಯೂರಪ್ಪ ಅವರು ಜೆ.ಪಿ. ನಡ್ಡಾ ಅವರಲ್ಲಿ ಮನವಿ ಮಾಡಿದರು ಎನ್ನಲಾಗಿದೆ. ಇದಾದ ನಂತರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.

ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ಸಿಂಗ್ ಅವರನ್ನು ಭೇಟಿ ಮಾಡಿದ ನಂತರ ಬೆಂಗಳೂರಿಗೆ ಹೊರಟ್ಟಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕೇಂದ್ರ ಸಚಿವ ಅಮಿತ್ ಶಾರವರು ಕರೆಸಿಕೊಂಡು ಚರ್ಚೆ ನಡೆಸಿರುವುದು ನಾನಾ ವ್ಯಾಖ್ಯಾನಗಳಿಗೆ ಕಾರಣವಾಗಿದೆ.
ಬೆಳಿಗ್ಗೆ ಅಮಿತ್ ಶಾರವರ ಭೇಟಿ ಸಾಧ್ಯವಾಗದ ಹಿನ್ನೆಲೆಯಲ್ಲಿ ಬೆಂಗಳೂರಿಗೆ ವಾಪಸ್ ಹೊರಡಲು ವಿಮಾನ ನಿಲ್ದಾಣದತ್ತ ದಾರಿಯಲ್ಲಿದ್ದ ಯಡಿಯೂರಪ್ಪರವರಿಗೆ ಅಮಿತ್ ಶಾರವರು ಕರೆ ಮಾಡಿ ತಮ್ಮ ಭೇಟಿಗೆ ಬರುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಯಡಿಯೂರಪ್ಪ ಅವರು ಅಮಿತ್ ಶಾರವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಚರ್ಚೆ ನಡೆಸಿದರು.
ಅಮಿತ್ ಶಾ ಮತ್ತು ಯಡಿಯೂರಪ್ಪನವರ ಭೇಟಿಯ ವಿವರಗಳು ಸದ್ಯಕ್ಕೆ ಲಭ್ಯವಾಗಿಲ್ಲ.