ರಾಜ್ಯಕ್ಕೆ ಆಗಮಿಸುವ ಪ್ರಯಾಣಿಕರಿಗೆ ಕೋವಿಡ್ ವರದಿ ಕಡ್ಡಾಯ

ಬೆಳಗಾವಿ, ಮಾ.26: ಕೋವಿಡ್-೧೯ ಮತ್ತೆ ವ್ಯಾಪಕವಾಗಿ ಹರಡುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ನೆರೆಯ ಮಹಾರಾಷ್ಟ್ರದಿಂದ ಆಗಮಿಸುವ ಎಲ್ಲ ಪ್ರಯಾಣಿಕರು ಕೋವಿಡ್ ನೆಗೆಟಿವ್ ವರದಿ ಹೊಂದಿರುವುದು ಕಡ್ಡಾಯಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿಂದು ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಅವರು, ರಾಜ್ಯದಾದ್ಯಂತ ಕೋವಿಡ್ ಹರಡುವಿಕೆ ತಡೆಗಟ್ಟಲು ಅಂತರ್ ರಾಜ್ಯ ಗಡಿಗಳಲ್ಲಿ ಹೆಚ್ಚಿನ ನಿಗಾ ವಹಿಸಲಾಗಿದೆ. ನೆರೆಯ ರಾಜ್ಯದಿಂದ ಜಿಲ್ಲೆಗೆ ಆಗಮಿಸುವ ಪ್ರಯಾಣಿಕರು ಕಡ್ಡಾಯವಾಗಿ ತಪಾಸಣಾ ವರದಿಯನ್ನು ನೀಡಬೇಕು ಎಂದವರು ಹೇಳಿದರು.

ಕೋವಿಡ್-೧೯ ಪರೀಕ್ಷಾ ವರದಿ ಪರಿಶೀಲನೆಯ ಜವಾಬ್ದಾರಿಯನ್ನು ಸಾರಿಗೆ ಸಂಸ್ಥೆಯ ನಿರ್ವಾಹಕರು ಮತ್ತು ಚಾಲಕರಿಗೆ ನೀಡಲಾಗುವುದು.
ರಾಜಕೀಯ ಪಕ್ಷಗಳು ಸೇರಿದಂತೆ ಯಾರೇ ಆಗಲಿ ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದರೆ ಕಾನುನು ಕ್ರಮ ಜರುಗಿಸಲಾಗುವುದು ಎಂದರು.

ಸಾರ್ವಜನಿಕ ಸ್ಥಳಗಳಲ್ಲಿ ಹಬ್ಬ/ಉತ್ಸವಗಳ ನಿರ್ಬಂಧ:

ಎಲ್ಲ ರೀತಿಯ ಹಬ್ಬ ಮತ್ತಿತರ ಧಾರ್ಮಿಕ ಆಚರಣೆಗಳನ್ನು ಮನೆಯಲ್ಲಿ ಆಚರಿಸಬೇಕು.
ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ನಿಗದಿತ ಜನರಿಗಿಂತ ಹೆಚ್ಚು ಜನರು ಸೇರಿದರೆ ಆಯೋಜಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪ್ರತಿದಿನ 25 ಸಾವಿರ ಲಸಿಕೆ ನೀಡಲು ಕ್ರಮ:

ಲಸಿಕಾಕರಣ ಚುರುಕುಗೊಳಿಸಲು ನಿರ್ಧರಿಸಲಾಗಿದ್ದು, ಇನ್ನು ಮುಂದೆ ಜಿಲ್ಲೆಯ 600 ಉಪ ಕೇಂದ್ರಗಳಲ್ಲೂ ಲಸಿಕೆ ನೀಡಲಾಗುವುದು. ಪ್ರತಿದಿನ 25 ಸಾವಿರ ಜನರಿಗೆ ಲಸಿಕೆ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ.
ಹೆಚ್ಚು ಹೆಚ್ಚು ಜನರಿಗೆ ಲಸಿಕೆ ನೀಡುವುದಕ್ಕಾಗಿ ಮುಂಬರುವ ದಿನಗಳಲ್ಲಿ ಜನರ ಬಳಿಗೆ ಹೋಗಿಯೇ ಲಸಿಕೆ ನೀಡಲು ಚಿಂತನೆ ನಡೆಸಲಾಗುತ್ತಿದೆ. ಜಿಲ್ಲೆಯಲ್ಲಿ ಲಸಿಕೆ ಕೊರತೆ ಇಲ್ಲ.
ಒಂದು ವೇಳೆ ಲಸಿಕೆಗೆ ಬೇಡಿಕೆ ಸಲ್ಲಿಸಿದರೆ ತಕ್ಷಣವೇ ಲಸಿಕೆ ಪೂರೈಕೆಗೆ ಸರ್ಕಾರ ಸಿದ್ಧವಿದೆ ಎಂದು ತಿಳಿಸಿದರು.

ಕೋವಿಡ್ ಮಾರ್ಗಸೂಚಿ ಪಾಲಿಸುವಂತೆ ಸಾರ್ವಜನಿಕರಲ್ಲಿ ನಿರಂತರವಾಗಿ ಮನವಿ ಮಾಡಿಕೊಳ್ಳಲಾಗುತ್ತಿದೆ. ಆದಾಗ್ಯೂ ಕೆಲವೆಡೆ ಮಾರ್ಗಸೂಚಿ ಉಲ್ಲಂಘನೆ ಕಂಡುಬರುತ್ತಿರುವುದರಿಂದ ದಂಡ ವಿಧಿಸುವ ಪ್ರಕ್ರಿಯೆಯನ್ನು ಚುರುಕುಗೊಳಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.