ರಾಜ್ಯಕ್ಕೆ ಶಾ ಭೇಟಿ ಬಿಜೆಪಿಯಲ್ಲಿ ಸಂಚಲನ

ಬೆಂಗಳೂರು,ಆ. ೨- ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತನ ಹತ್ಯೆ ನಂತರ ಪಕ್ಷದ ಕಾರ್ಯಕರ್ತರು ಸರ್ಕಾರದ ವಿರುದ್ಧವೇ ತಿರುಗಿ ಬಿದ್ದಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ದೆಹಲಿ ನಾಯಕರು, ಕಾರ್ಯಕರ್ತರನ್ನು ಸಮಾಧಾನಗೊಳಿಸಲು ಕೇಂದ್ರ ಸಚಿವ ಅಮಿತ್ ಶಾ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ.ಕೇಂದ್ರ ಗೃಹ ಸಚಿವ ಅಮಿತ್ ಶಾರ ಭೇಟಿ ರಾಜ್ಯ ಬಿಜೆಪಿಯಲ್ಲಿ ಸಂಚಲನ ಮೂಡಿಸಿದ್ದು, ಇವರ ಭೇಟಿ ಸಂದರ್ಭದಲ್ಲಿ ಪಕ್ಷ ಹಾಗೂ ಸರ್ಕಾರಕ್ಕೆ ಸಂಬಂಧಿಸಿದಂತೆ ಕೆಲ ಮಹತ್ವದ ತೀರ್ಮಾನಗಳು ಆಗಲಿವೆ ಎಂದು ಹೇಳಲಾಗುತ್ತಿದೆ.
ಬಿಜೆಪಿ ಕಾರ್ಯಕರ್ತ ಪ್ರವೀಣ್ ಬೆಳ್ಳಾರೆ ಹತ್ಯೆ ನಂತರ ಆಕ್ರೋಶಗೊಂಡ ಬಿಜೆಪಿ ಕಾರ್ಯಕರ್ತರು, ಪದಾಧಿಕಾರಿಗಳು ಪಕ್ಷಕ್ಕೆ ಸಾಮೂಹಿಕ ರಾಜೀನಾಮೆಯನ್ನು ಸಲ್ಲಿಸಿದ್ದರು. ಈ ಬೆಳವಣಿಗೆ ಪಕ್ಷದ ವರ್ಚಸ್ಸಿಗೆ ಧಕ್ಕೆ ತಂದಿತ್ತು. ಈ ಎಲ್ಲ ಬೆಳವಣಿಗೆಗಳ ಸಂಪೂರ್ಣ ಮಾಹಿತಿ ಪಡೆದುಕೊಂಡ ಪಕ್ಷದ ವರಿಷ್ಠರು ಡ್ಯಾಮೇಜ್ ಕಂಟ್ರೋಲ್‌ಗೆ ಮುಂದಾಗಿದ್ದು, ಇದೇ ಆಗಸ್ಟ್ ೪ ರಂದು ಅಮಿತ್ ಶಾರವರು ರಾಜ್ಯಕ್ಕೆ ಆಗಮಿಸುತ್ತಿದ್ದು, ಪ್ರವೀಣ್ ಬೆಳ್ಳಾರೆ ನಿವಾಸಕ್ಕೆ ಭೇಟಿ ನೀಡಿ ಅವರ ಕುಟುಂಬಕ್ಕೆ ಸಾಂತ್ವನ ಹೇಳಲಿದ್ದಾರೆ ಎಂದು ಬಿಜೆಪಿ ಮೂಲಗಳು ಹೇಳಿವೆ.
ಕೇಂದ್ರ ಗೃಹ ಸಚಿವ ಅಮಿತ್‌ಶಾ ರವರೇ ಈಗ ಅಖಾಡಕ್ಕಿಳಿದಿದ್ದು, ಪಕ್ಷದ ಕಾರ್ಯಕರ್ತರನ್ನು ಸಮಾಧಾನಗೊಳಿಸುವ ಕಾರ್ಯಕ್ಕೆ ಮುಂದಾಗಿದ್ದು, ರಾಜ್ಯ ಭೇಟಿ ಸಂದರ್ಭದಲ್ಲಿ ಪಕ್ಷದ ಹಲವು ಮುಖಂಡರ ಜತೆಯೂ ಸಭೆ ನಡೆಸುವರು ಎನ್ನಲಾಗಿದೆ.
ಸಾಮಾನ್ಯವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾರವರ ಭೇಟಿ ಬಗ್ಗೆ ಮೊದಲೇ ಮಾಹಿತಿಗಳು ಲಭ್ಯವಾಗುತ್ತಿತ್ತು. ಈ ಬಾರಿ ಅವರ ರಾಜ್ಯ ಭೇಟಿ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಕೆಲ ಪ್ರಮುಖ ನಾಯಕರಿಗಷ್ಟೇ ಮಾಹಿತಿ ಬಂದಿದೆ ಎನ್ನಲಾಗಿದೆ.
ಸಿಎಂ ಹೇಳಿಕೆ
ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾರವರು ಭೇಟಿ ನೀಡುತ್ತಿರುವುದನ್ನು ಖಚಿತಪಡಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರು ಆ. ೪ ರಂದು ಅಮಿತ್ ಶಾರವರು ಬೆಂಗಳೂರಿಗೆ ಬರುತ್ತಿದ್ದು, ಕೈಗಾರಿಕಾ ಒಕ್ಕೂಟದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು ಎಂದು ಸುದ್ದಿಗಾರರಿಗೆ ಮಾಹಿತಿ ನೀಡಿದರು.