ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಭಾರೀ ಮಳೆ

ಬೆಂಗಳೂರು,ಜೂ.೩-ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ತೀವ್ರಗೊಂಡಿರುವುದರಿಂದ ರಾಜ್ಯದಲ್ಲಿ ಇಂದಿನಿಂದ ೨ ದಿನಗಳಿಂದ ಭಾರೀ ಮಳೆಯಾಗಲಿದ್ದು ಇನ್ನೂ ೪ ದಿನಗಳ ಕಾಲ ಮಳೆ ಮುಂದುವರೆಯಲಿದೆ.
ರಾಜ್ಯದಲ್ಲಿ ಇಂದು ಮತ್ತು ನಾಳೆ ಗುಡುಗು ಸಿಡಿಲು ಸಹಿತ ಮಳೆಯಾಗುವುದರಿಂದ ಒಟ್ಟು ೧೭ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದ್ದು ಜೂ ೬ರವರೆಗೆ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನೈಋತ್ಯ ಮುಂಗಾರು ಇಂದು ಕೇರಳವನ್ನು ಪ್ರವೇಶಿಸಲಿರುವುದರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದೆ.ಇದಲ್ಲದೇ ರಾಜ್ಯಕ್ಕೆ ಜೂ. ೬ ಇಲ್ಲವೇ ೭ ರಂದು ಮುಂಗಾರು ಆಗಮನವಾಗುವ ನಿರೀಕ್ಷೆಯಿದೆ. ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಳೆಯಾಗುತ್ತಿದೆ.
ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆ ಹಾಗೂ ಇನ್ನು ಕೆಲವೆಡೆ ತುಂತುರು ಮಳೆಯಾಗುವ ಸಾಧ್ಯತೆಗಳಿವೆ. ಈಗಾಗಲೇ ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಎಲ್ಲೆಲ್ಲಿ ಯೆಲ್ಲೋ ಅಲರ್ಟ್:
ಉತ್ತರ ಕನ್ನಡ , ದಕ್ಷಿಣ ಕನ್ನಡ , ಉಡುಪಿ, ಬೀದರ್, ಗದಗ , ಬೆಂಗಳೂರು ನಗರ, ಕಲಬುರ್ಗಿ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಶಿವಮೊಗ್ಗ, ಚಿತ್ರದುರ್ಗ, ಕೊಡಗು, ಕೋಲಾರ, ತುಮಕೂರು, ಹಾಸನ, ಕೊಪ್ಪಳ, ದಾವಣಗೆರೆ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಹಳದಿ ಅಲರ್ಟ್ ಘೋಷಿಸಲಾಗಿದೆ.
ಈ ವರ್ಷ ಮುಂಗಾರು ಮಳೆ ಕೊಂಚ ತಡವಾಗಿದ್ದು ಈಗಾಗಲೇ, ಆಂಧ್ರಪ್ರದೇಶದ ಕರಾವಳಿ ಪ್ರದೇಶ, ಅರುಣಾಚಲ ಪ್ರದೇಶದಲ್ಲಿ ಮಳೆಯಾಗುತ್ತಿದ್ದು, ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲೂ ಇಂದು ಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಳೆಯ ಅಬ್ಬರ:
ರಾಜ್ಯದ ಧಾರವಾಡ, ಬೆಳಗಾವಿ,ಗದಗ,ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಹೆಚ್ಚು ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ. ಶಿವಮೊಗ್ಗ, ಹಾಸನ, ಕೊಡಗು, ಕೋಲಾರ, ಚಾಮರಾಜನಗರ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರ್ಗಿ, ಬೀದರ್, ಚಿಕ್ಕಮಗಳೂರಿನಲ್ಲಿ ಇಂದಿನಿಂದ ಮಳೆಯ ಅಬ್ಬರ ಹೆಚ್ಚಾಗಲಿದೆ ಎಂದು ಕರ್ನಾಟಕ ಪ್ರಾದೇಶಿಕ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಣೆ ಆಗಿರುವುದರಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ.ಇಂದು ಕರ್ನಾಟಕ ಮಾತ್ರವಲ್ಲದೆ ಕೇರಳ, ಗುಜರಾತ್, ಮಹಾರಾಷ್ಟ್ರ, ಅರುಣಾಚಲ ಪ್ರದೇಶದಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಸೆಪ್ಟೆಂಬರ್‌ವರೆಗೆ ಮಳೆ:
ಜೂನ್ ೬ ಅಥವಾ ೭ರಂದು ಕರ್ನಾಟಕದಲ್ಲಿ ಮುಂಗಾರು ಮಳೆಯಾಗಲಿದೆ ಎನ್ನಲಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಕೆಎಸ್‌ಎನ್‌ಡಿಎಂಸಿ ವಿಜ್ಞಾನಿ ಎಸ್.ಎಸ್.ಎಂ. ಗವಾಸ್ಕರ್, ಒಂದು ಬಾರಿ ಮುಂಗಾರು ಆರಂಭವಾದ ನಂತರ ಅದರ ಪರಿಣಾಮ ಯಾವ ರೀತಿ ಇರಬಹುದು ಎಂದು ನಾವು ಅಂದಾಜಿಸಬಹುದು ಎಂದಿದ್ದಾರೆ.
ಜೂನ್‌ನಿಂದ ಸೆಪ್ಟೆಂಬರ್‌ವರೆಗೆ ಮಳೆಯ ಆರ್ಭಟವಿರಲಿದೆ ಎಂದು ತಜ್ಞರು ತಿಳಿಸಿದ್ದಾರೆ. ಈ ವರ್ಷ ಸಾಧಾರಣದಿಂದ ಧಾರಾಕಾರ ಮಳೆಯಾಗಲಿದೆ. ಜೂನ್ ೬ ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಶುರುವಾಗಲಿದೆ.