ರಾಜ್ಯದಲ್ಲಿ ಇನ್ನೆರಡು ದಿನ ಮಳೆ

(ಸಂಜೆವಾಣಿ ಪ್ರತಿನಿಧಿಯಿಂದ)
ಬೆಂಗಳೂರು,ಸೆ.೫:ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಕೈಕೊಟ್ಟಿದ್ದ ವರುಣ ಇದೀಗ ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಭಾಗಗಳಲ್ಲಿ ಮಳೆ ಬಿರುಸುಗೊಂಡಿದ್ದು, ರೈತರ ಮೊಗದಲ್ಲಿ ಮಂದಹಾಸ ಬೀರಿದೆ. ಇಂದು ಮತ್ತು ನಾಳೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡಿನ ೬ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದ್ದು, ಈ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಹುಬ್ಬಳ್ಳಿ-ಧಾರವಾಡದ ಉತ್ತರಭಾಗ, ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಗಳನ್ನು ಹಗುರ ಮಳೆ ಬೀಳುತ್ತಿದೆ. ಕೊಪ್ಪಳದಲ್ಲಿ ಕಳೆದೆರೆಡು ದಿನಗಳಿಂದ ಮಳೆಯಾಗುತ್ತಿರುವ ಕಾರಣ ಹಳ್ಳಗಳಿಗೆ ಭಾರಿ ಪ್ರಮಾಣದ ನೀರು ಹರಿದು ಬರುತ್ತಿದೆ.
ಮಳೆಯಿಂದಾಗಿ ಕೆಲವೆಡೆ ಅವಾಂತರ ಸೃಷ್ಟಿಯಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಯಾದಗಿರಿ ಜಿಲ್ಲೆಯಲ್ಲೂ ಧಾರಾಕಾರ ಮಳೆಯಿಂದಾಗಿ ಜಿಲ್ಲೆಯ ಶಹಾಪುರದ ಕೊಳ್ಳೂರು ಹಾಗೂ ಅರಕಗ್ರಾಮದ ನಡುವೆ ಪ್ರಗತಿಯಲ್ಲಿದ್ದ ಸೇತುವೆ ನಡುವಿನ ತಾತ್ಕಾಲಿಕ ರಸ್ತೆ ಮಳೆಯ ರಭಸಕ್ಕೆ ಕೊಚ್ಚಿ ಹೋಗಿದೆ. ಇದರಿಂದಾಗಿ ಶಾಲೆಗಳಿಗೆ ತೆರಳುವ ವಿದ್ಯಾರ್ಥಿಗಳು ಮತ್ತು ನಾಗರಿಕರು ತೊಂದರೆ ಅನುಭವಿಸುವಂತಾಗಿದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮಳೆ ಬೀಳುವ ನಿರೀಕ್ಷೆ ಇದೆ. ಬೆಂಗಳೂರು ನಗರದಲ್ಲಿ ನಿನ್ನೆ ಮತ್ತು ಇಂದೂ ಕೂಡ ಮೋಡ ಕವಿದ ವಾತಾವರಣ ಮುಂದುವರೆದಿದ್ದು, ಮಳೆ ಬೀಳುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡು., ಉತ್ತರ ಒಳನಾಡು ಹಾಗೂ ಮಧ್ಯ ಕರ್ನಾಟಕ ಭಾಗಗಳಲ್ಲಿ ಮಳೆಯಾಗಲಿದೆ ಎಂದು ತಿಳಿಸಿರುವ ಹವಾಮಾನ ಇಲಾಖೆ, ಮಂಗಳೂರು, ಉಡುಪಿ, ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಪ್ರದೇಶಗಳಲ್ಲಿ ಬಿರುಸಿನ ಮಳೆ ಬೀಳಲಿದೆ.
ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಯ ದಕ್ಷಿಣ ಭಾಗ, ಧಾರವಾಡ-ಹಾವೇರಿ, ಗದಗ, ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಚಾಮರಾಜನಗರ, ಮಂಡ್ಯ ಜಿಲ್ಲೆಯ ಕೆಲ ಭಾಗಗಳು, ಚಿತ್ರದುರ್ಗ, ಬಳ್ಳಾರಿ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಹಗುರ ಮಳೆ ಬೀಳುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.