ಜನರ ಸಮಸ್ಯೆಗಳಿಗೆ ಪರಿಹಾರ
(ಸಂಜೆವಾಣಿ ಪ್ರತಿನಿಧಿಯಿಂದ)
ನಗರಾಭಿವೃದ್ಧಿ ಮತ್ತು ನಗರ ಯೋಜನೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎಸ್. ಭೈರತಿ ಸುರೇಶ್ ಅವರು ಜಿಲ್ಲೆಯ ಸಾರ್ವಜನಿಕರಿಂದ ಕುಂದುಕೊರತೆಗಳು ಮತ್ತು ಅಹವಾಲನ್ನು ಸ್ವೀಕರಿಸುವ ಮೂಲಕ ಜಿಲ್ಲಾ ಜನತಾ ದರ್ಶನಕ್ಕೆ ಚಾಲನೆ ನೀಡಿದರು.
ಜಿಲ್ಲೆಯ ಶಾಸಕಾದ ಕೂತ್ತೂರು ಜಿ. ಮಂಜುನಾಥ್, ಎಸ್.ಎನ್. ನಾರಾಯಣಸ್ವಾಮಿ, ಎಂ.ಎಲ್. ಅನಿಲ್ ಕುಮಾರ್, ಜಿ.ಕೆ. ವೆಂಕಟಶಿವಾ ರೆಡ್ಡಿ, ಗೋವಿಂದರಾಜ್, ಕೋಲಾರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.
ಬೆಂಗಳೂರು, ಸೆ. ೨೫- ರಾಜ್ಯದ ಜನತೆ ತಮ್ಮ ಸಮಸ್ಯೆಗಳ ಪರಿಹಾರಕ್ಕೆ ಬೆಂಗಳೂರಿಗೆ ಅಲೆದಾಡುವುದನ್ನು ತಪ್ಪಿಸಲು ಜನತಾದರ್ಶನ ಕಾರ್ಯಕ್ರಮಕ್ಕೆ ಎಲ್ಲಾ ಜಿಲ್ಲೆಗಳಲ್ಲೂ ಇಂದು ಚಾಲನೆ ನೀಡಲಾಗಿದೆ.ಸ್ಥಳೀಯ ಸಮಸ್ಯೆಗಳನ್ನು ಇಟ್ಟುಕೊಂಡು ಜನತೆ ಬೆಂಗಳೂರಿಗೆ ಬಂದು ಮುಖ್ಯಮಂತ್ರಿಗಳ ಕಚೇರಿಗೆ ಎಡತಾಕುವುದನ್ನು ತಪ್ಪಿಸಿ ಅವರ ಸಮಸ್ಯೆಗಳನ್ನು ಜಿಲ್ಲಾ, ತಾಲ್ಲೂಕು ಮಟ್ಟದಲ್ಲೇ ಪರಿಹರಿಸುವ ಈ ಜನತಾದರ್ಶನ ಕಾರ್ಯಕ್ರಮ ಇಂದು ಆರಂಭಗೊಂಡಿದ್ದು, ಇನ್ನು ಮುಂದೆ ಪ್ರತಿ ೧೫ ದಿನಕ್ಕೊಮ್ಮೆ ಜಿಲ್ಲಾಧಿಕಾರಿಗಳಿಂದ ತಾಲ್ಲೂಕು ಮಟ್ಟದಲ್ಲಿ ಜನತಾದರ್ಶನ ಕಾರ್ಯಕ್ರಮ ನಡೆಯಲಿದೆ.ಇದರ ಜತೆಗೆ ಪ್ರತಿ ತಿಂಗಳು ಜಿಲ್ಲಾ ಉಸ್ತುವಾರಿ ಸಚಿವರು ಜನತಾದರ್ಶನ ನಡೆಸಿ ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ನೀಡುವರು.
ಎಲ್ಲಾ ಜಿಲ್ಲೆಗಳಲ್ಲೂ ಆರಂಭ
ಇಂದು ಜನತಾದರ್ಶನ ಆರಂಭ ಎಲ್ಲಾ ಜಿಲ್ಲೆಗಳಲ್ಲೂ ಏಕಕಾಲಕ್ಕೆ ಆರಂಭವಾಗಿದ್ದು, ಜಿಲ್ಲಾಧಿಕಾರಿಗಳು, ಜಿ.ಪಂ. ಸಿಇಓಗಳ ಜತೆ ಆಯಾ ಜಿಲ್ಲಾ ಉಸ್ತುವಾರಿ ಸಚಿವರುಗಳು ಇಂದು ಜನತಾದರ್ಶನ ಕಾರ್ಯಕ್ರಮವನ್ನು ನಡೆಸಿ, ಜನರ ಸಮಸ್ಯೆಗಳನ್ನು ಆಲಿಸಿದರು.ಈ ಜನತಾದರ್ಶನ ಕಾರ್ಯಕ್ರಮದಲ್ಲಿ ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಒದಗಿಸುವ ಕೆಲಸವನ್ನು ಮಾಡಲಾಗಿದೆ.ಜನತಾದರ್ಶನ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಎಲ್ಲಾ ಇಲಾಖೆಗಳ ಅಧಿಕಾರಿಗಳು ಹಾಜರಿದ್ದು, ಜನರ ಸಮಸ್ಯೆಗಳಿಗೆ ಸ್ಪಂದಿಸಿದರು.
ಜಿಲ್ಲಾ ಉಸ್ತುವಾರಿ ಸಚಿವರುಗಳ ಸಮ್ಮುಖದಲ್ಲೇ ಜನತಾದರ್ಶನ ಕಾರ್ಯಕ್ರಮದಲ್ಲಿ ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಕೆಲಸವನ್ನು ಮಾಡಲಾಗಿದೆ.
ಮುಖ್ಯಮಂತ್ರಿಗಳಿಂದ ರಾಜ್ಯಮಟ್ಟದ ಜನತಾದರ್ಶನ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನಲ್ಲಿ ಸೆ. ೩೦ ರಂದು ರಾಜ್ಯಮಟ್ಟದ ಜನತಾದರ್ಶನ ಕಾರ್ಯಕ್ರಮವನ್ನು ನಡೆಸುವರು.
ಸಿಎಂ ಸೂಚನೆ ಮೇರೆಗೆ ಜನತಾದರ್ಶನ
ಕೆಲ ದಿನಗಳ ಹಿಂದೆ ನಡೆದಿದ್ದ ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಜಿ.ಪಂ. ಸಿಇಓಗಳ ಸಭೆಯಲ್ಲಿ ಮುಖ್ಯಮಂತ್ರಿಗಳು ಜನತೆ ಸಣ್ಣಪುಟ್ಟ ಸಮಸ್ಯೆಗಳಿಗೂ ಬೆಂಗಳೂರಿಗೆ ಅಲೆದಾಡುತ್ತಿದ್ದಾರೆ. ಇದನ್ನು ತಪ್ಪಿಸಲು ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಜನತಾದರ್ಶನ ನಡೆವಂತೆ ಸೂಚನೆ ನೀಡಿದ್ದರು.ಅದರಂತೆ ಇಂದಿನಿಂದ ಜನತಾ ದರ್ಶನ ಕಾರ್ಯಕ್ರಮ ಆರಂಭವಾಗಿದೆ.ಈ ಜನತಾ ದರ್ಶನ ಕಾರ್ಯಕ್ರಮದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ಕೆಲಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಡಿದ್ದು, ಜಾತಿ ಪ್ರಮಾಣ ಪತ್ರ, ಖಾತೆ ಬದಲಾವಣೆ, ಟ್ರಾನ್ಸ್‌ಫಾರ್ಮರ್ ರಿಪೇರಿ ಸೇರಿದಂತೆ ಸಣ್ಣಪುಟ್ಟ ಕೆಲಸಗಳಿಗೂ ಜನ ಮುಖ್ಯಮಂತ್ರಿಗಳನ್ನು ಭೇಟಿ ಮಾಡಲು ಬರುತ್ತಿದ್ದಾರೆ. ಇದನ್ನು ತಪ್ಪಿಸಲು ಈ ಜನತಾ ದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದರು. ಅದರಂತೆ ಜನತಾದರ್ಶನ ಕಾರ್ಯಕ್ರಮ ಆರಂಭವಾಗಿದೆ.
ಎಲ್ಲಾ ಸಚಿವರು ಭಾಗಿ
ಈ ಜನತಾದರ್ಶನ ಕಾರ್ಯಕ್ರಮದಲ್ಲಿ ಎಲ್ಲಾ ಜಿಲ್ಲಾ ಉಸ್ತುವಾರಿ ಸಚಿವರುಗಳು ಭಾಗಿಯಾಗಿ ಜನರ ಅಹವಾಲುಗಳಿಗೆ ಸ್ಪಂದಿಸಿದ್ದಾರೆ.