
ಬೆಂಗಳೂರು, ಮಾ. ೨೭- ರಾಜ್ಯದ ಹಲವು ಕಡೆ ಎರಡು ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ ಎರಡು ದಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಮಂಡ್ಯ, ಹಾಸನ ಮತ್ತು ಮೈಸೂರು ಭಾಗದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಇಂದು ಕೊಡಗು, ಬೀದರ್, ಕಲಬುರಗಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ೨ ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಅಲ್ಲದೇ, ಇನ್ನೆರಡು ದಿನಗಳಲ್ಲಿ ಸಂಜೆ ಅಥವಾ ರಾತ್ರಿ ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ.
ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ ಬಹುತೇಕ ಭಾಗಗಳಲ್ಲಿ ಹವಾಮಾನ ಬದಲಾಗುತ್ತಿದೆ. ಬೇಸಿಗೆ ಆರಂಭವಾಗಿದ್ರೂ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಸೆಕೆ ಪ್ರಮಾಣ ಏರಿಕೆಯಾಗಿದೆ.
ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲವೆಡೆ ಉಷ್ಣಾಂಶವು ಸಾಮಾನ್ಯಕ್ಕಿಂತ ೨ ರಿಂದ ೩ ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ಅಥವಾ ರಾತ್ರಿ ಗುಡುಗು ಸಹಿತ ಹಗುರ ಮಳೆಯಾಗಲಿದೆ. ಕಲುಬುರಗಿಯಲ್ಲಿ ಭಾನುವಾರ ಗರಿಷ್ಠ ಉಷ್ಣಾಂಶ ೩೮.೮ ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು ಎಂದು ಐಎಂಡಿ ತಿಳಿಸಿದೆ.