ರಾಜ್ಯದಲ್ಲಿ 5 ದಿನ ಭಾರೀ ಮಳೆ

ಬೆಂಗಳೂರು, ಮೇ.೨೫- ತಮಿಳುನಾಡು ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ಎದ್ದಿರುವ ಪರಿಣಾಮ ಮುಂದಿನ ೫ ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಉತ್ತರ ಒಳನಾಡಿನ ಕರಾವಳಿ ಭಾಗದಲ್ಲಿ ಸಾಧಾರಣ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಹೀಗಾಗಿ ಕೆಲ ಜಿಲ್ಲೆಗಳಿಗೆ ಹವಮಾನ ಇಲಾಖೆ ಯೆಲ್ಲೂ ಅಲರ್ಟ್ ಘೋಷಣೆ ಮಾಡಿದ್ದು, ಮುಂಜಾಗೃತ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಬೀದರ್, ಹಾವೇರಿ ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ ದಾವಣಗೆರೆ,ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಮುಂದಿನ ೫ ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ವರದಿ ತಿಳಿಸಿದೆ.
ರಾಜ್ಯದ ಕೆಲ ಜಿಲ್ಲೆಗಳಲ್ಲಿ ಬಿರುಗಾಳಿ ಸಮೇತ ಗುಡುಗು ಮಿಂಚಿನ ಮಳೆಯಾಗುವ ಸಾಧ್ಯತೆ ಇದೆ. ಗಂಟೆಗೆ ೪೦ ರಿಂದ ೫೦ ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಹೇಳಿದೆ.
ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ ೨೪ ಗಂಟೆಯೊಳಗೆ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದ್ದು, ಸಂಜೆ ಅಥವಾ ರಾತ್ರಿ ವೇಳೆಗೆ ಬಿರುಗಾಳಿ ಸಮೇತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.