ರಾಜ್ಯದಲ್ಲಿ 7 ಮಂದಿಗೆ ಒಮಿಕ್ರಾನ್ ಪತ್ತೆ

ಬೆಂಗಳೂರು, ಡಿ.2- ರಾಜ್ಯದಲ್ಲಿ ಒಮಿಕ್ರಾನ್ ಪತ್ತೆಯಾಗಿದ್ದ ಸೋಂಕಿತರ ಪೈಕಿ ಮತ್ತೆ ಐವರಿಗೆ ಸೋಂಕು ದೃಢಪಟ್ಟಿದ್ದು, ಇದರಿಂದ ಒಟ್ಟು ಸೋಂಕಿತರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಕೆ. ಸುಧಾಕರ್ ಬೆಂಗಳೂರಿನಲ್ಲಿಂದು ತಿಳಿಸಿದ್ದಾರೆ.

46 ವರ್ಷದ ವೈದ್ಯರಿಗೆ ಮೊದಲು ಒಮಿಕ್ರಾನ್ ದೃಢಪಟ್ಟಿದ್ದು, ಅವರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕದಲ್ಲಿದ್ದ ಐವರಿಗೆ ಮತ್ತೆ ಸೋಂಕು ಕಾಣಿಸಿಕೊಂಡಿದೆ. ಇವರನ್ನು ಬೆಂಗಳೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯಕ್ಕೆ ಇವರಲ್ಲಿ ಯಾವುದೇ ಗಂಭೀರ ಸ್ವರೂಪದ ಲಕ್ಷಣಗಳು ಕಾಣಿಸಿಕೊಂಡಿಲ್ಲ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಎರಡು ಡೋಸ್ ಲಸಿಕೆ ಪಡೆದ ಮಂದಿಗೆ ಒಮಿಕ್ರಾನ್ ಪತ್ತೆಯಾಗಿದೆ. ಆದರೂ, ಜನರು ಆತಂಕ, ಗೊಂದಲ, ಊಹಾಪೋಹದ ಸುದ್ದಿಗಳಿಗೆ ಆದ್ಯತೆ ನೀಡಬೇಡಿ ಎಂದು ಅವರು ತಿಳಿಸಿದ್ದಾರೆ.

ಪರೀಕ್ಷೆ ಪ್ರಮಾಣ ಮತ್ತಷ್ಡು ಹೆಚ್ಚಳ:

ಒಮಿಕ್ರಾನ್ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಸೋಂಕು ಪತ್ತೆ ಪರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಲು ಸೂಚಿಸಲಾಗಿದೆ. ಈ ಸಂಬಂಧ ಮುಖ್ಯಮಂತ್ರಿಗಳ ಜೊತೆಯೂ ಚರ್ಚಿಸಲಾಗಿದೆ ಎಂದು ಹೇಳಿದರು.

ಜನರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ವ್ಯಕ್ತಿಗತ ಅಂತರಕ್ಕೆ ಒತ್ತು ನೀಡಬೇಕು, ದೊಡ್ಡ ಸಮಾರಂಭಗಳು, ಒಳಾಂಗಣದಲ್ಲಿ ನಡೆಯುವ ಕಾರ್ಯಕ್ರಮಗಳಿಗೆ ಹೋಗದಂತೆ ಎಚ್ಚರಿಕೆ ವಹಿಸಬೇಕಾಗಿದೆ. ಇದುವರೆಗೆ ಯಾರು 2 ಡೋಸ್ ಲಸಿಕೆ ಪಡೆದಿಲ್ಲ ಅವರು ಶೀಘ್ರದಲ್ಲೇ ಲಸಿಕೆ ಪಡೆಯಿರಿ ಎಂದು ಮನವಿ ಮಾಡಿದರು.

ವಿಮಾನ ನಿಲ್ದಾಣಗಳಲ್ಲಿ ಬಿಗಿ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.