ರಾಜ್ಯದ ಎಲ್ಲರಿಗೂ ಉಚಿತ ಲಸಿಕೆ ನೀಡಿ:ಎಚ್ ಡಿಕೆ ಆಗ್ರಹ

ಬೆಂಗಳೂರು,ಏ.24- ಮುಂದಿನ ತಿಂಗಳ 1 ರಿಂದ ‌18 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ನೀಡಲು ಕೇಂದ್ರ ಸರಕಾರ ತೆಗೆದುಕೊಂಡಿರುವ ತೀರ್ಮಾನದಂತೆ, ರಾಜ್ಯದ ಆರುವರೆ ಕೋಟಿ ಜನತೆಗೂ ಉಚಿತ ಲಸಿಕೆ ನೀಡಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ

ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಜನರು ಸೇರಿದಂತೆ ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡಿ ಜನರ
ನೆರವಿಗೆ ಧಾವಿಸಬೇಕೆಂದು ಮನವಿ ಮಾಡಿದ್ದಾರೆ.

ಈಗಾಗಲೇ ಜಾರ್ಖಂಡ್, ಗೋವಾ, ಛತ್ತೀಸ್‌ಘಡ, ಉತ್ತರ ಪ್ರದೇಶ, ಅಸ್ಸಾಂ, ಮಧ್ಯಪ್ರದೇಶ, ಕೇರಳ, ಬಿಹಾರ ಮತ್ತು ಸಿಕ್ಕಿಂನಲ್ಲಿ ಲಸಿಕೆಯನ್ನು ಉಚಿತವಾಗಿ ನೀಡುವುದಾಗಿ ಘೋಷಿಸಲಾಗಿದೆ. ಆಂಧ್ರಪ್ರದೇಶವು ಮುಂದೆ ಬಂದಿದೆ
ಈಗ ಕರ್ನಾಟಕ ರಾಜ್ಯದಲ್ಲಿಯೂ ಸಹ ಇದೇ ಕ್ರಮ ಅನುಸರಿಸಬೇಕು‌ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಒತ್ತಾಯಿಸಿದ್ದಾರೆ

ಈಗಿನ ಸಂದರ್ಭದಲ್ಲಿ ಜನರು ಹಣ ಕೊಟ್ಟು ಲಸಿಕೆ ಪಡೆಯಲು ಸಾಧ್ಯವಿಲ್ಲ. ಹೀಗಾಗಿ ಸರಕಾರವೇ ಮುಂದೆ ಬಂದು 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಉಚಿತ ಲಸಿಕೆ ನೀಡುವ ತೀರ್ಮಾನವನ್ನು ಪ್ರಕಟಿಸಬೇಕೆಂಬುದು ಆಗ್ರಹಿಸಿದ್ದಾರೆ

ಸುಮಾರು ಒಂದು ಕೋಟಿ ಡೋಸ್ ಲಸಿಕೆ ಕೊಳ್ಳಲು 400 ಕೋಟಿ ರೂ ಮೀಸಲಿಡಲಾಗಿದೆ.
ಸರಿಸುಮಾರು 2.50 ಲಕ್ಷ ಕೋಟಿ ಬಜೆಟ್ ಮಂಡನೆ ಮಾಡುವ ಸರಕಾರಕ್ಕೆ ಕನಿಷ್ಠ ಪಕ್ಷ 2 ಸಾವಿರ ಕೋಟಿ ಹಣವನ್ನು ಲಸಿಕೆ ಖರೀದಿ ಮಾಡಲು ಮೀಸಲಿಡುವುದರಿಂದ ಬೊಕ್ಕಸಕ್ಕೆ ಭಾರೀ ಹೊರೆಯಾಗದು ಎಂದಿದ್ದಾರೆ

ಬಡವ-ಬಲ್ಲಿದನೆಂಬ ತಾರತಮ್ಯ ತೋರದೆ ರಾಜ್ಯದ ಎಲ್ಲಾ ಜನತೆಗೆ ಉಚಿತವಾಗಿ ಲಸಿಕೆ ನೀಡುವ ಮಹತ್ವದ ನಿರ್ಧಾರ ತೆಗೆದುಕೊಳ್ಳುವಂತೆ ಸರ್ಕಾರಕ್ಕೆ ಈ ಮೂಲಕ ಆಗ್ರಹಿಸಿದ್ದಾರೆ

ರಾಜ್ಯದ ಪ್ರತಿಯೊಬ್ಬರಿಗೂ ಉಚಿತ ಲಸಿಕೆ ನೀಡುವಂತೆ ಒಂದುವರೆ ತಿಂಗಳ ಹಿಂದೆಯೇ ಸರ್ಕಾರಕ್ಕೆ ಸಲಹೆ ನೀಡಿದ್ದೆ. ಪಲ್ಸ್ ಪೋಲಿಯೋ ಲಸಿಕೆ ನೀಡಿದ ಮಾದರಿಯಲ್ಲಿ ಎಲ್ಲರಿಗೂ ಉಚಿತವಾಗಿ ಕೊರೋನಾ ಲಸಿಕೆ ನೀಡುವ ನಿರ್ಧಾರ ಕೈಗೊಂಡರೆ ಅದು ಅಭಿನಂದನಾರ್ಹ ಎಂದು ತಿಳಿಸಿದ್ದಾರೆ