ರಾಜ್ಯದ ವಿವಿಧ ಭಾಗದಲ್ಲಿ ಮಳೆ ಆರ್ಭಟ

ಬೆಂಗಳೂರು, ನ. ೯- ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮ ಬೆಂಗಳೂರು ಸೇರಿದಂತೆ ರಾಜ್ಯದ ಕರಾವಳಿಯಲ್ಲಿಯೂ ಭಾರಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಸೇರಿದಂತೆ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಮಳೆ ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಇಂದು ಕೂಡ ಸಹ ಮಳೆಯ ಸಿಂಚನ ಮುಂದುವರಿಯಲಿದೆ. ಇತ್ತ ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ದಕ್ಷಿಣ ಕರ್ನಾಟಕದ ಕೆಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಗಳಿವೆ. ನೆರೆಯ ತಮಿಳುನಾಡಿನ ರಾಜಧಾನಿ ಚೆನ್ನೆ ಮಳೆಯ ಸುಳಿಯಲ್ಲಿ ಸಿಲುಕಿದ್ದು, ರಕ್ಷಣಾ ಕಾರ್ಯ ಮುಂದುವರಿದಿದೆ. ಮತ್ತೊಂದು ಕಡೆ ಅರಬ್ಬಿ ಸಮುದ್ರದಲ್ಲಿಯೂ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದ ಕರಾವಳಿಯಲ್ಲಿಯೂ ಮಳೆಯಾಗುವ ಸಾಧ್ಯತೆಗಳಿವೆ. ಈಗಾಗಲೇ ಅರಬ್ಬಿ ಸಮುದ್ರ ತೀರದ ಪ್ರದೇಶಗಳಲ್ಲಿ ಮಳೆ ಆರಂಭಗೊಂಡಿದ್ದು, ಮಹಾರಾಷ್ಟ್ರದ ಆರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಚಿಕ್ಕಬಳ್ಳಾಪುರ ಭಾಗದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ. ಬೀದರ್, ಕಲಬುರಗಿ, ರಾಯಚೂರು, ಬಳ್ಳಾರಿ, ಬಾಗಲಕೋಟೆ, ವಿಜಯಪುರ, ಕೊಪ್ಪಳ ಮತ್ತು ಗದಗನಲ್ಲಿ ಒಣ ಹವೆ ಮುಂದುವರಿಯಲಿದೆ. ಅರಬ್ಬಿ ಸಮುದ್ರ ಮತ್ತು ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯಭಾರ ಕುಸಿತದ ಪರಿಣಾಮ ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ನವೆಂಬರ್ ೧೧ರ ತನಕ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ವಾಯುಭಾರ ಕುಸಿತದ ಪರಿಣಾಮ ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಮಂಡ್ಯ, ಕೊಡಗು, ಮೈಸೂರು, ರಾಮನಗರ, ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಹವಾಮಾನ ಇಲಾಖೆ ಯೆಲ್ಲೊ ಅಲರ್ಟ್ ಘೋಷಣೆ ಮಾಡಿದೆ.
ತಮಿಳುನಾಡು ರಾಜ್ಯದಲ್ಲಿಈಗಾಗಲೇ ಭಾರೀ ಮಳೆಯಾಗುತ್ತಿದೆ. ಶುಕ್ರವಾರದ ತನಕ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ ಎಂದು ಎಚ್ಚರಿಕೆ ನೀಡಲಾಗಿದೆ. ಹವಾಮಾನ ಇಲಾಖೆ ತಮಿಳುನಾಡು ಮತ್ತು ಪುದುಚೇರಿಯಲ್ಲಿ ಆರೆಂಕ್ ಅಲರ್ಟ್ ಘೋಷಿಸಿದೆ. ಮುಂದಿನ ಮೂರು ದಿನಗಳ ತಮಿಳನಾಡು ಮತ್ತು ಪುದುಚೇರಿ ಭಾಗದಲ್ಲಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚೆನ್ನೈನ ನುಂಗಂಬಾಕ್ಯಂ ಮತ್ತು ಮೀನಂಬ್ಯಾಕಂ ನಗರಗಳಲ್ಲಿ ಕ್ರಮವಾಗಿ ೨೧.೫ ಸೆಂ.ಮೀ ಮತ್ತು ೧೧.೩ ಸೆಂ.ಮೀ.ನಷ್ಟು ಮಳೆಯಾಗಿದೆ.