ರಾಜ್ಯದ ಹಲವೆಡೆ ಮಳೆ ನಿರೀಕ್ಷೆ

ಬೆಂಗಳೂರು, ಆ. ೨೦- ಈ ತಿಂಗಳ ಆರಂಭದಿಂದಲೇ ಬಿಸಿಲಿನ ಬೇಗೆಗೆ ಬೇಸತ್ತಿರುವ ಜನತೆಯನ್ನು ತಂಪಾಗಿಸಲು ಮಳೆರಾಯನ ಆಗಮನವಾಗಿದೆ.
ನಿನ್ನೆಯಿಂದಲೇ ರಾಜ್ಯದ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನಲ್ಲಿ ಮಳೆ ಆರಂಭವಾಗಿದೆ. ರಾಜಧಾನಿ ಬೆಂಗಳೂರಿನಲ್ಲೂ ಮಳೆಯಾಗಿದೆ.
ಉತ್ತರ ಒಳನಾಡಿನ ವಿಜಯಪುರ, ಯಾದಗಿರಿ, ಬಾಗಲಕೋಟೆ ಮತ್ತು ಕೊಪ್ಪಳ ಭಾಗದಲ್ಲಿ ಮಳೆಯಾಗಿರುವ ಬಗ್ಗೆ ವರದಿಯಾಗಿದೆ. ಮೋಡ ಮುಸುಕಿದ ವಾತಾವರಣವಿದ್ದು, ಸಣ್ಣ ಮಳೆಯಿಂದ ಜನರು ಸಂತಸಗೊಂಡಿದ್ದಾರೆ.
ಇಂದಿನಿಂದ ಮುಂದಿನ ಐದು ದಿನಗಳ ಕಾಲ ಕರಾವಳಿ ಮತ್ತು ಮಲೆನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಏತನ್ಮಧ್ಯೆ, ಮುಂದಿನ ೨೪ ಗಂಟೆಗಳಲ್ಲಿ ಮೂರು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ.
ಕಳೆದ ಎರಡ್ಮೂರು ವಾರಗಳಿಂದ ರಾಜ್ಯಾದ್ಯಂತ ಮಳೆ ಕೊರತೆ ಉಂಟಾಗಿದ್ದು, ರೈತರಲ್ಲಿ ತಲ್ಲಣ ಮೂಡಿಸಿದೆ. ಏತನ್ಮಧ್ಯೆ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು, ಮೈಸೂರು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದ್ದು, ಕೊಪ್ಪಳ, ಬೆಂಗಳೂರು ಮತ್ತು ದಾವಣಗೆರೆಯಲ್ಲಿ ಸಾಧಾರಣ ಮಳೆಯಾಗಿದೆ.