ರಾಜ್ಯದ ಹಲವೆಡೆ ಮಳೆ ನಿರೀಕ್ಷೆ

ಬೆಂಗಳೂರು,ಮೇ.೬- ಬಂಗಾಳಕೊಲ್ಲಿಯಲ್ಲಿ ಉಂಟಾದ ಮೇಲ್ಮೈ ಸುಳಿಗಾಳಿಯ ಪರಿಣಾಮ ಕರ್ನಾಟಕದಲ್ಲೂ ಕಳೆದ ೧ ವಾರದಿಂದ ಮಳೆಯಾಗುತ್ತಿದೆ. ಮುಂಗಾರು ಆರಂಭಕ್ಕೂ ಮುನ್ನವೇ ಬೇಸಿಗೆಯಲ್ಲಿ ಮಳೆಯಾಗುತ್ತಿರುವುದರಿಂದ ಬಿಸಿಲಿನಿಂದ ಕಂಗೆಟ್ಟಿದ್ದ ಜನರು ಎರಡ್ಮೂರು ದಿನದ ಮಳೆಗೆ ಮನೆಯಲ್ಲಿ ಬಂಧಿಯಾಗಿದ್ದಾರೆ.
ಈಗ ಮತ್ತೆ ಬೆಂಗಳೂರು ನಗರ ಸೇರಿದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯಾಗಲಿದ್ದು, ಬಳ್ಳಾರಿ, ಕಲಬುರಗಿ, ಬೀದರ್, ಗದಗ ಭಾಗದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಿದೆ. ಮೇ ೮ರಿಂದ ರಾಜ್ಯದ ಮಲೆನಾಡು ಪ್ರದೇಶಗಳಾದ ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಇನ್ನು ಹಾಸನ, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿಯೂ ಭಾರೀ ಮಳೆಯಾಗಲಿದೆ. ಮೇ ೮ ಮತ್ತು ಮೇ ೯ರಂದು ಈ ಎಲ್ಲಾ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಪರಿಣಾಮ ರಾಜ್ಯದ ಮೇಲೆಯೂ ವ್ಯತಿರಿಕ್ತ ಪರಿಣಾಮ ಬೀರಿದ್ದು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಉತ್ತರ ಒಳನಾಡು ಭಾಗದಲ್ಲಿ ಹಗುರ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮಾಹಿತಿ ನೀಡಿದೆ.