ರಾಜ್ಯಪಾಲರಿಂದ ಸುಳ್ಳು ಹೇಳಿಸಿದ ಸರ್ಕಾರ

ಬೆಂಗಳೂರು, ಫೆ. ೧೨- ರಾಜ್ಯದ ಕಾಂಗ್ರೆಸ್ ಸರ್ಕಾರ ಯಾವುದೇ ಅಭಿವೃದ್ಧಿ ಕೆಲಸಗಳನ್ನು ಮಾಡಿಲ್ಲ. ಸರ್ಕಾರ ರಾಜ್ಯಪಾಲರ ಭಾಷಣದಲ್ಲಿ ಸುಳ್ಳು ಹೇಳಿಸಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ರಾಜ್ಯಪಾಲರ ಭಾಷಣಕ್ಕೆ ಪ್ರತಿಕ್ರಿಯಿಸಿದ್ದಾರೆ.
ವಿಧಾನಸೌಧದಲ್ಲಿಂದು ವಿಧಾನ ಮಂಡಲದ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಮಾಡಿದ ಭಾಷಣದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರ ಭಾಷಣದಲ್ಲಿ ಸುಳ್ಳು ಮಾಹಿತಿ ಇದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಇದುವರೆಗೂ ಯಾವುದೇ ಅಭಿವೃದ್ಧಿಯಾಗಿಲ್ಲ. ಜನರ ಹಣವನ್ನು ಲೂಟಿ ಮಾಡುವುದಕ್ಕಷ್ಟೇ ಈ ಸರ್ಕಾರ ಸೀಮಿತಾಗಿದೆ ಎಂದು ಟೀಕಿಸಿದರು.
ಕೇಂದ್ರ ಸರ್ಕಾರದ ಯೋಜನೆಗಳನ್ನು ನಾವೇ ಮಾಡಿದ್ದು ಎಂದು ರಾಜ್ಯ ಸರ್ಕಾರ ರಾಜ್ಯಪಾಲರ ಭಾಷಣದಲ್ಲಿ ಹೇಳಿಕೊಂಡಿದೆ. ೫ನೇ ಗ್ಯಾರಂಟಿಯಾದ ಯುವನಿಧಿಯಿಂದ ಒಬ್ಬ ನಿರುದ್ಯೋಗಿ ಯುವಕನಿಗೂ ಒಂದು ರೂಪಾಯಿ ಸಿಕ್ಕಿಲ್ಲ ಎಂದು ಅವರು ದೂರಿದರು.
ಬರ ಪರಿಸ್ಥಿತಿ ನಿರ್ವಹಣೆಯೂ ಸರಿಯಾಗಿ ಆಗಿಲ್ಲ. ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸ ಆಗುತ್ತಿದೆ. ಅಭಿವೃದ್ಧಿ ಕುಂಠಿತವಾಗಿದೆ ಎಂದು ಅಶೋಕ್ ಹೇಳಿದರು.
ಸರ್ವ ಜನಾಂಗದ ಶಾಂತಿಯ ತೋಟ ಎಂಬ ಸಾಲುಗಳನ್ನು ರಾಜ್ಯಪಾಲರ ಭಾಷಣದಲ್ಲಿ ಸರ್ಕಾರ ಉಲ್ಲೇಖಿಸಿದೆ. ಆದರೆ ಇಡೀ ಕರ್ನಾಟಕ ಉರಿಯುತ್ತಿದೆ. ಹಿಂದೂಗಳ ಮೇಲೆ ದೌರ್ಜನ್ಯ ನಡೆಯುತ್ತಿದೆ. ಭಯೋತ್ಪಾದಕ ಚಟುವಟಿಕೆಗಳು ಹೆಚ್ಚಿವೆ. ಇಷ್ಟಾದರೂ ಶಾಂತಿ ಸುವ್ಯವಸ್ಥೆ ಕಾಪಾಡುತ್ತೇವೆ ಎಂದು ಹೇಳುತ್ತಿದ್ದಾರೆ. ಕನ್ನಡ ರಕ್ಷಣೆ ಮಾಡುವ ಸರ್ಕಾರ ಕನ್ನಡ ಹೋರಾಟಗಾರರನ್ನೇ ಜೈಲಿಗೆ ಹಾಕಿತ್ತು ಎಂದು ಅವರು ದೂರಿದರು.