ರಾಜ್ಯೋತ್ಸವ ಸಂಭ್ರಮ :ಜಿಲ್ಲೆಯಾದ್ಯಂತ ರಂಗೋಲಿ, ಗಾಳಿಪಟ ಉತ್ಸವ, ಕನ್ನಡ ಜ್ಯೋತಿ

ಧಾರವಾಡ, ಅ.31: ಕರ್ನಾಟಕ ಎಂಬ ಹೆಸರು ನಾಮಕರಣಗೊಂಡು 50 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಈ ವರ್ಷದ ಕನ್ನಡ ರಾಜ್ಯೋತ್ಸವವನ್ನು ವಿಶೇಷ ರೀತಿಯಲ್ಲಿ ಆಚರಿಸಲು ಉದ್ದೇಶಿಸಲಾಗಿದ್ದು, ಜಿಲ್ಲೆಯ ಎಲ್ಲ ಮನೆಗಳ ಮುಂದೆ ಕನ್ನಡದ ರಂಗೋಲಿ, ಕೆಂಪು ಮತ್ತು ಹಳದಿ ಬಣ್ಣದ ಗಾಳಿಪಟ ಉತ್ಸವ ಹಾಗೂ ಕನ್ನಡ ಜ್ಯೋತಿ ಬೆಳಗುವುದರ ಮೂಲಕ ಸಂಭ್ರಮಿಸಲಾಗುವುದೆಂದು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರು ಹೇಳಿದರು.

 ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯೋತ್ಸವದ ಕುರಿತು ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ನವೆಂಬರ್ 1 ರಂದು ಜಿಲ್ಲೆಯ ಎಲ್ಲ ಮನೆಗಳ ಮುಂದೆ ಕೆಂಪು ಮತ್ತು ಹಳದಿ ಬಣ್ಣದ ರಂಗೋಲಿಯೊಂದಿಗೆ ಕರ್ನಾಟಕ ಸಂಭ್ರಮ 50 ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಎಂಬ ಘೋಷ ವಾಕ್ಯದ ರಂಗೋಲಿ ಬಿಡಿಸುವ ಬಗ್ಗೆ ಮಹಾನಗರ ಪಾಲಿಕೆ, ಗ್ರಾಮ ಪಂಚಾಯಿತಿ ಅಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಇಲಾಖೆ, ಶಿಕ್ಷಣ ಇಲಾಖೆ ಅಧಿಕಾರಿಗಳು ಜಾಗೃತಿ ಮೂಡಿಸಿ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಅಂದು ಬೆಳಿಗ್ಗೆ 9 ಗಂಟೆಗೆ ಆಕಾಶವಾಣಿಯಲ್ಲಿ ನಾಡಗೀತೆ ಪ್ರಸಾರವಾಗಲಿದ್ದು, ಆ ಸಮಯದಲ್ಲಿ ಜಿಲ್ಲೆಯ ಸಮಸ್ತ ನಾಗರಿಕರು ಎದ್ದು ಗೌರವ ಸಲ್ಲಿಸಬೇಕು.

ಸಂಜೆ 5 ಗಂಟೆಗೆ ಜಿಲ್ಲೆಯ ಎಲ್ಲ ಗ್ರಾಮಗಳ ಹಾಗೂ ನಗರದ ಮೈದಾನಗಳಲ್ಲಿ ಕೆಂಪು ಮತ್ತು ಹಳದಿ ಬಣ್ಣದ ಗಾಳಿಪಟಗಳನ್ನು ಆಕಾಶಕ್ಕೆ ಹಾರಿ ಬಿಡುವ ಮೂಲಕ ಸುವರ್ಣ ಸಂಭ್ರಮ ಗಾಳಿಪಟ ಉತ್ಸವ ಆಚರಿಸುವಂತೆ ತಿಳಿಸಿದರು. ಈ ನಿಟ್ಟಿನಲ್ಲಿ ಸಂಬಂಧಿಸಿದ ಅಧಿಕಾರಿಗಳು ಕಾರ್ಯಪ್ರವೃತ್ತರಾಗುವಂತೆ ಸೂಚಿಸಿದರು.

ಸಂಜೆ 7 ಗಂಟೆಗೆ ಎಲ್ಲಾ ಕಚೇರಿಗಳ ಮುಂದೆ, ಮನೆಗಳ ಮುಂದೆ, ಅಂಗಡಿ ಮಳಿಗೆಗಳ ಮುಂದೆ ದೀಪವನ್ನು ಹಚ್ಚುವ ಮೂಲಕ ಕನ್ನಡ ಜ್ಯೋತಿ ಹಚ್ಚಲಾಗುವುದೆಂದು ತಿಳಿಸಿದರು.

ಜಿಲ್ಲೆಯ ಎಲ್ಲಾ ಅಧಿಕಾರಿಗಳು ಗ್ರಾಮ ಪಂಚಾಯಿತ, ತಾಲೂಕು ಪಂಚಾಯತ ಅಧಿಕಾರಿಗಳು ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಸೂಚಿಸಿದರು.

ಜಿಲ್ಲಾ ಮಟ್ಟದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಆರ್.ಎನ್. ಶೆಟ್ಟಿ ಕ್ರೀಡಾಂಗಣದಲ್ಲಿ ಅಂದು ಬೆಳಿಗ್ಗೆ 5 ಕನ್ನಡ ಗೀತೆಗಳನ್ನು ಹಾಡುವ ಮೂಲಕ ನುಡಿ ನಮನ ಸಲ್ಲಿಸಲಾಗುವುದು. ಹುಯಿಲಗೋಳ ನಾರಾಯಣರಾಯರ ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು, ಕುವೆಂಪು ಅವರ ಎಲ್ಲಾದರೂ ಇರು ಎಂತಾದರು ಇರು, ಬೇಂದ್ರೆಯವರ ಒಂದೇ ಒಂದೇ ಕರ್ನಾಟಕ ಒಂದೇ, ಸಿದ್ದಯ್ಯ ಪುರಾಣಿಕ ಅವರ ಹೊತ್ತಿತೋ ಹೊತ್ತಿತೋ ಕನ್ನಡದ ದೀಪ ಹಾಗೂ ಚನ್ನವೀರ ಕಣವಿ ಅವರ ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಗೀತೆಗಳನ್ನು ಹಾಡಲಾಗುವುದು ಎಂದು ಅವರು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಮೂಗನೂರ್ ಮಠ, ಕನ್ನಡ ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್ ಬೆಕ್ಕೇರಿ, ಸೇರಿದಂತೆ ಹಲವರು ಉಪಸ್ಥಿತರಿದ್ದರು.