ರಾಜ್ಯ ಆಹಾರ ಆಯೋಗದ ಅದ್ಯಕ್ಷರಿಂದ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ


ಗದಗ ನ.11: ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ 2013 ರಡಿಯಲ್ಲಿ ಹದಿನೈದು ಇಲಾಖೆಗಳು ಕಾರ್ಯನಿರ್ವಹಿಸುತ್ತಿದ್ದು ಈ ಎಲ್ಲ ಇಲಾಖೆಗಳ ಕಾರ್ಯ ಚಟುವಟಿಕೆಗಳನ್ನು ಪರಿಶೀಲಿಸಿ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಹೆಚ್. ವಿ.ಶಿವಶಂಕರ ಹೇಳಿದರು.
ನಗರದ ಪ್ರವಾಸಿ ಮಂದಿರದಲ್ಲಿ ಸೋಮವಾರ ಸಂಜೆ ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸರ್ಕಾರದ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪಬೇಕು. ಈ ಪ್ರಕ್ರಿಯೆಯಲ್ಲಿ ಇರುವ ಸಮಸ್ಯೆ ಸವಾಲುಗಳ ಕುರಿತು ಪರಿಹಾರ ಸಿಗದಿದ್ದಲ್ಲಿ ಆಯೋಗದ ಗಮನಕ್ಕೆ ತರುವದರ ಮೂಲಕ ಪರಿಹಾರ ಕಂಡುಕೊಳ್ಳಬಹುದಾಗಿದೆ. ಆಹಾರ ಆಯೋಗವು ನ.13ರ ವರೆಗೆ ಜಿಲ್ಲೆಯ ವಿವಿಧ ಇಲಾಖೆಗಳಿಗೆ ಭೇಟಿ ನೀಡಿ ಯೋಜನೆಗಳ ಅನುಷ್ಠಾನದ ಕುರಿತು ದಾಖಲೆಗಳ ಪರಿಶೀಲನೆ ನಡೆಸಲಿದೆ ಎಂದರು.
ಜಿಲ್ಲೆಯ ವಿವಿಧ ತಾಲೂಕುಗಳಲ್ಲಿರುವ ನ್ಯಾಯ ಬೆಲೆ ಅಂಗಡಿ, ಆಹಾರ ಧಾನ್ಯ ಸಗಟು ಮಳಿಗೆ, ಅಂಗನವಾಡಿ ಕೇಂದ್ರ, ಎಂ.ಎಸ್.ಪಿ.ಟಿ.ಸಿ, ಮಧ್ಯಾಹ್ನದ ಉಪಹಾರದ ಯೋಜನೆ, ಜಿಲ್ಲಾ ಆಸ್ಪತ್ರೆಯಲ್ಲಿರುವ ಎನ್.ಆರ್.ಸಿ.ಘಟಕ, ಕೃಷಿ ಇಲಾಖೆ, ವಿಕಲಚೇತನ,ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಾಮಾಜಿಕ ಭದ್ರತೆ, ಪಿಂಚಣಿ ಇಲಾಖೆ ಮತ್ತು ಜಿಲ್ಲೆಯ ಸರ್ಕಾರಿ ವಸತಿ ನಿಲಯಗಳಿಗೆ ಭೇಟಿ ನೀಡಿ ಅಲ್ಲಿರುವ ವ್ಯವಸ್ಥೆಯ ಕುರಿತು ಪರಿಶೀಲನೆ ನಡೆಸಲಾಗುವದು. ಈ ಸಂದರ್ಭದಲ್ಲಿ ಸ್ಥಳೀಯ ಅಧಿಕಾರಿಗಳು ಹಾಜರಿದ್ದು ಮಾಹಿತಿ ಒದಗಿಸುವಂತೆ ಹೆಚ್. ವಿ.ಶಿವಶಂಕರ ಸೂಚಿಸಿದರು.
ಆಯೋಗದ ಸದಸ್ಯರಾದ ಬಿ.ಎ.ಮಹ್ಮದ ಅಲಿ ಹಾಗೂ ಶ್ರೀಮತಿ ಮಂಜುಳಾ ಸಾತನೂರ ಅವರುಗಳು ಮಾತನಾಡಿ ಆಯೋಗವು ನವೆಂಬರ 13 ರಂದು 11 ಗಂಟೆಗೆ ಗದಗ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ಜರುಗಿಸುವರು ನಂತರ 12.30ಕ್ಕೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯ ಯೋಜನೆಗಳ ಅನುಷ್ಠಾನದ ಬಗ್ಗೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲ್ಲಿದ್ದು ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ.
ಸಭೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ಮಂಜುನಾಥ, ಸಹಾಯಕ ನಿರ್ದೇಶಕಿ ಶೀಮತಿ ಗಿರಿಜಮ್ಮ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಟಿ.ಎಸ್.ರುದ್ರೇಶಪ್ಪ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸತೀಶ್ ಬಸರಿಗಿಡದ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಪ್ರಶಾಂತ ವರಗಪ್ಪನ್ನವರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು, ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ಬಿ.ಆಯ್.ಅಸುಂಡಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಶ್ರೀಮತು ಆರ್.ಹೊಸಮನಿ, ಕೆ.ಎಸ್.ಎಫ್.ಸಿ. ಅಧಿಕಾರಿ ವಿನೋದಕುಮಾರ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.