ರಾಜ್ಯ ಬಜೆಟ್‍ನಲ್ಲಿ ಬಿಸಿಯೂಟ ತಯಾರಕರ ವೇತನ ಹೆಚ್ಚಳಕ್ಕೆ ಒತ್ತಾಯ

ಕಲಬುರಗಿ,ಜೂ.13: ಬರುವ ಜುಲೈ ತಿಂಗಳಿನಲ್ಲಿ ರಾಜ್ಯ ಸರ್ಕಾರ ಮಂಡಿಸುವ ಬಜೆಟ್‍ನಲ್ಲಿ ಬಿಸಿಯೂಟ ತಯಾರಕರಿಗೆ ವೇತನವನ್ನು 6000ರೂ.ಗಳಿಗೆ ಹೆಚ್ಚಿಸಬೇಕು ಎಂದು ಒತ್ತಾಯಿಸಿ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್ ಪದಾಧಿಕಾರಿಗಳು ಮಂಗಳವಾರ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಕರ್ನಾಟಕ ರಾಜ್ಯದಲ್ಲಿ ಮಧ್ಯಾಹ್ನ ಉಪಹಾರ ಯೋಜನೆ ಅಡಿಯಲ್ಲಿ ರಾಜ್ಯಾದ್ಯಂತ ಇರುವ ಶಾಲೆಗಳಲ್ಲಿ ಅಡುಗೆ ಕೆಲಸ ನಿರ್ವಹಿಸುತ್ತಿರುವ ಬಿಸಿಯೂಟ ತಯಾರಕರಿಗೆ 2023ರ ಜುಲೈ ತಿಂಗಳಿನಲ್ಲಿ ಮಂಡಿಸುವ ಬಜೆಟ್‍ನಲ್ಲಿ ರಾಜ್ಯ ಸರ್ಕಾರವು ಬಿಸಿಯೂಟ ತಯಾರಕರಿಗೆ ಅವರ ವೇತನವನ್ನು ಆರು ಸಾವಿರ ರೂ.ಗಳಿಗೆ ಹೆಚ್ಚಿಸಬೇಕೆಂದು ಒತ್ತಾಯಿಸಿದರು.
2023ರ ಕರ್ನಾಟಕ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಎಐಟಿಯುಸಿ ನಾಯಕರೊಂದಿಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಪ್ರಿಯಾಂಕಾ ಗಾಂಧಿಯವರು ಬೆಳಗಾವಿ ಜಿಲ್ಲೆಯ ಖಾನಾಪುರದಲ್ಲಿ ಚರ್ಚಿಸಿ ಈ ಬಾರಿ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಅಧಿಕಾರಕ್ಕೆ ತಂದರೆ ನಮ್ಮ ಸರ್ಕಾರವು ಆರನೇ ಗ್ಯಾರಂಟಿಯಾಗಿ ಬಿಸಿಯೂಟ ತಯಾರಕರಿಗೆ ಈಗಿರುವ ವೇತನಕ್ಕೆ ಬದಲಾಗಿ 6000ರೂ.ಗಳಿಗೆ ಹೆಚ್ಚಿಸಲಾಗುವುದು ಎಂದು ಬೆಳಗಾವಿಯ ಚುನಾವಣಾ ಪ್ರಚಾರದ ವೇದಿಕೆಯಲ್ಲಿ ಘೋಷಿಸಿದ್ದರು ಎಂದು ಅವರು ತಿಳಿಸಿದರು.
ಆದ್ದರಿಂದ ಕಾಂಗ್ರೆಸ್ ಸರ್ಕಾರವು ಪ್ರಣಾಳಿಕೆಯಲ್ಲಿ ಆರನೇ ಗ್ಯಾರಂಟಿಯಾಗಿ ಘೋಷಿಸಿದಂತೆ 2023ರ ಜುಲೈ ತಿಂಗಳಲ್ಲಿ ಸರ್ಕಾರವು ಮಂಡಿಸುವ ಬಜೆಟ್‍ನಲ್ಲಿ ಬಿಸಿಯೂಟ ತಯಾರಕರಿಗೆ 6000ರೂ.ಗಳಿಗೆ ವೇತನವನ್ನು ಹೆಚ್ಚಿಸಬೇಕೆಂದು ಅವರು ಕೋರಿದರು.
ಎಐಟಿಯುಸಿ ಜಿಲ್ಲಾಧ್ಯಕ್ಷ ಹೆಚ್.ಎಸ್. ಪತಕಿ, ಐಟಿಯುಸಿ ರಾಜ್ಯ ಉಪಾಧ್ಯಕ್ಷ ಪ್ರಭುದೇವ್ ಯಳಸಂಗಿ, ಎನ್‍ಎಫ್‍ಐಡಬ್ಲ್ಯೂ ಜಿಲ್ಲಾ ಮುಖಂಡರಾದ ಪದ್ಮಾವತಿ ಮಾಲಿಪಾಟೀಲ್, ಬಿಸಿಯೂಟ ಯೂನಿಯನ್ ಜಿಲ್ಲಾ ಕಾರ್ಯದರ್ಶಿ ಯಶೋಧಾ ರಾಠೋಡ್, ತಾಲ್ಲೂಕು ಮುಖಂಡರಾದ ಅಂಬವ್ವ ಶ್ರೀನಿವಾಸ್ ಸರಡಗಿ ಮಲ್ಲಮ್ಮ ಜಗತಿ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.