ಬೆಂಗಳೂರು, ಏ. ೨೦- ರಾಜ್ಯ ಚುನಾವಣಾ ಅಖಾಡದ ದಿನದಿಂದ ದಿನಕ್ಕೆ ತೀವ್ರ ಕುತೂಹಲ ಕೆರಳಿಸುತ್ರಿದ್ದ ಸಂಸದ ಡಿಕೆ ಸುರೇಶ್ ರಾಜ್ಯ ರಾಜಕಾರಣಕ್ಕೆ ಪ್ರವೇಶಿಸಲು ಮುಂದಾಗಿದ್ದಾರೆ. ಯಾವ ಕ್ಷೇತ್ರದಿಂದ ಸ್ಪರ್ಧೆ ಎಂಬುದನ್ನು ಕಾದು ನೋಡಿ ಎನ್ನುವ ಮೂಲಕ ಕುತೂಹಲ ಮೂಡಿಸಿದ್ದಾರೆ.ಸಹೋದರ ಡಿ.ಕೆ. ಶಿವಕುಮಾರ್ ಅವರನ್ನು ಕಟ್ಟಿಹಾಕಲು ಕಂದಾಯ ಸಚಿವ ಆರ್. ಅಶೋಕ್ ಅವರನ್ನು ಕನಕಪುರದಿಂದ ಬಿಜೆಪಿ ಕಣಕ್ಕಿಳಿರಿಸುವ ಹಿನ್ನೆಲೆಯಲ್ಲಿ ಠಕ್ಕರ್ ಕೊಡಲು ಕಾಂಗ್ರೆಸ್ ಪಕ್ಷ ಪದ್ಮನಾಭನಗರದಿಂದ ಡಿ.ಕೆ. ಸುರೇಶ್ ಅವರನ್ನು ಕಣಕ್ಕಿಳಿಸಲು ಸಿದ್ದತೆ ಮಾಡಿಕೊಂಡಿದೆ.ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. ಸುರೇಶ್, ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಾಮಪತ್ರ ಸಲ್ಲಿಸಲು ಬೆಂಗಳೂರಿಗೆ ಹೋಗುತ್ತಿದ್ದೇನೆ. ಆದರೆ ಯಾವ ಕ್ಷೇತ್ರ ಎಂಬುದನ್ನು ಕಾದುನೋಡಿ ಎಂದು ಹೇಳಿದ್ದಾರೆ. ಈ ಮೂಲಕ ರಾಜ್ಯ ರಾಜಕಾರಣದಲ್ಲಿ ಭಾರೀ ಕುತೂಹಲ ಮೂಡಿಸಿದ್ದಾರೆ. ಇಂದು ಯಾವ ಕ್ಷೇತ್ರದಿಂದ ನಾಮಪತ್ರ ಸಲ್ಲಿಸುತ್ತೇನೆ ಎಂದು ನನಗೂ ಗೊತ್ತಿಲ್ಲ. ಪಕ್ಷದ ವರಿಷ್ಠರ ಸೂಚನೆ ಮೇರೆಗೆ ಅರ್ಜಿ ಹಾಕುತ್ತೇನೆ. ಯಾವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬುದು ಕಾದು ನೋಡಬೇಕಿದೆ ಎಂದಿದ್ದಾರೆ.