ರಾಜ್ಯ ಸರ್ಕಾರಿ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಆರಂಭ

ಮೈಸೂರು,ಮಾ.1:- ನೌಕರರ ವೇತನ ಪರಿಷ್ಕರಣೆ ಕುರಿತು ಬಜೆಟ್ ನಲ್ಲಿ ಘೋಷಣೆ ಮಾಡದ ರಾಜ್ಯ ಸರ್ಕಾರದ ಧೋರಣೆ ಖಂಡಿಸಿ ಹಾಗೂ ಹೊಸ ಪಿಂಚಣಿ ನೀತಿಗೆ ಒತ್ತಾಯಿಸಿ ಇಂದು ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ರಾಜ್ಯ ಸರ್ಕಾರಿ ನೌಕರರು ಇಂದಿನಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದ್ದಾರೆ.
ಜಿಲ್ಲಾಧಿಕಾರಿಗಳ ಕಛೇರಿ ಬಳಿ ಜಮಾಯಿಸಿದ ನೌಕರರು ವೇತನ ಆಯೋಗಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಯವರು ಬಜೆಟ್ ನಲ್ಲಿ ಹಣ ಮೀಸಲಿರಿಸಿ ಘೋಷಣೆ ಮಾಡುವವರೆಗೂ ತಮ್ಮ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.
7ನೇ ವೇತನ ಆಯೋಗದ ಶಿಫಾರಸು ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕದ ಸರ್ಕಾರಿ ನೌಕರರು ಬುಧವಾರದಿಂದ ಅನಿರ್ಧಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ. ಕೇವಲ ಮೈಸೂರಿನಲ್ಲಷ್ಟೇ ಅಲ್ಲದೇ ರಾಜ್ಯಾದ್ಯಂತ ಮುಷ್ಕರ ನಡೆಯುತ್ತಿದೆ.
6ನೇ ವೇತನ ಆಯೋಗದ ಮಾದರಿಯಂತೆ 7ನೇ ವೇತನ ಆಯೋಗದಿಂದ ಮಧ್ಯಂತರ ವರದಿಯನ್ನು ಆದಷ್ಟು ಬೇಗನೆ ಪಡೆದು, ಚುನಾವಣೆ ನೀತಿ ಸಂಹಿತೆಗಿಂತ ಮೊದಲು ಶೇ. 40 ಫಿಟ್ಮೆಂಟ್ ಸೌಲಭ್ಯವನ್ನು ದಿನಾಂಕ 01/07/2022ರಿಂದ ಜಾರಿಗೆ ಬರುವಂತೆ ಸರ್ಕಾರಿ ಆದೇಶ ಹೊರಡಿಸಬೇಕು. ಎನ್. ಪಿ. ಎಸ್. ನೌಕರರನ್ನು ಓ.ಪಿ. ಎಸ್. ವ್ಯಾಪ್ತಿಗೆ ತರಬೇಕು. ಪಂಜಾಬ್, ರಾಜಸ್ಥಾನ, ಛತ್ತೀಸ್ಗಢ, ಜಾರ್ಖಂಡ್, ಹಿಮಾಚಲ ಪ್ರದೇಶ ರಾಜ್ಯಗಳ ಮಾದರಿಯಲ್ಲಿ ಹಳೆ ಪಿಂಚಣಿ ಯೋಜನೆಯನ್ನು ಕರ್ನಾಟಕದಲ್ಲೂ ಜಾರಿಗೊಳಿಸುವಂತೆ ಒತ್ತಾಯಿಸಿದ್ದಾರೆ.
ಆಸ್ಪತ್ರೆಗಳಲ್ಲಿ ತುರ್ತು ಸೇವೆಯಲ್ಲಿ ಇರುವ ಸಿಬ್ಬಂದಿಗಳು ಕಪ್ಪುಪಟ್ಟಿ ಧರಿಸಿಕೊಂಡು ಕೆಲಸಕ್ಕೆ ಹಾಜರಾಗಿದ್ದಾರೆ. ಶಾಲೆಗಳಲ್ಲಿ ಕೆಲವು ಶಿಕ್ಷಕರು ಗೈರಾಗಿದ್ದಾರೆ. ಕೆಲವು ಕಾಲೇಜುಗಳಲ್ಲಿ ಉಪನ್ಯಾಸಕರು ಗೈರು ಹಾಜರಾಗಿದ್ದಾರೆ. ಸರ್ಕಾರದ ವಿವಿಧ ಕಛೇರಿಗಳಲ್ಲಿಯೂ ನೌಕರರು ಗೈರಾಗಿರುವುದು ಕಂಡು ಬಂದಿದೆ.
ವಿವಿದ ಬೇಡಿಕೆಗಳ ಈಡೇರಿಕೆಗಾಗಿ ಸರ್ಕಾರಿ ನೌಕರರು ಮುಷ್ಕರದ ಹಾದಿ ಹಿಡಿದಿದ್ದಾರೆ.ಸರ್ಕಾರಿ ನೌಕರರೇ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ.ಇದರಿಂದಾಗಿ ಸಾರ್ವಜನಿಕರ ಸೇವೆಗೆ ಅಡಚಣೆಯಾಗುತ್ತದೆ.ಹೀಗಾಗಿ ಮುಷ್ಕರ ಹತ್ತಿಕ್ಕಲು ಸರ್ಕಾರ ತಮ್ಮ ನೌಕರರಿಗೆ ಚಾಟಿ ಏಟು ಬೀಸಿದೆ.ಅನಿವಾರ್ಯ ಕಾರಣಗಳಿಂದ ಕಚೇರಿಗೆ ಹಾಜರಾಗಲು ಸಾಧ್ಯವಾಗದಿದ್ದಲ್ಲಿ ಅಧಿಕೃತವಾಗಿ ಮುಂಚಿತವಾಗಿ ರಜೆ ಮಂಜೂರು ಮಾಡಿಸಿಕೊಳ್ಳಬೇಕು.
ಇದಕ್ಕೆ ವಿರುದ್ದವಾಗಿ ನಡೆದುಕೊಂಡು ಕರ್ತವ್ಯಕ್ಕೆ ಗೈರಾದ್ರೆ ಆies ಟಿoಟಿ ಎಂದು ಪರಿಗಣಿಸಿ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಲಾಗಿದೆ.ಈಗಾಗಲೇ ವಿಶೇಷಾಧಿಕಾರಿ ಹಾಗೂ ಸಕ್ಷಮ ಪ್ರಾಧಿಕಾರದ ಕಚೇರಿಯಿಂದ ಎಲ್ಲಾ ಸರ್ಕಾರಿ ಕಚೇರಿಗಳಿಗೆ ಸುತ್ತೋಲೆ ಹೊರಡಿಸುವ ಮೂಲಕ ಚಾಟಿ ಬೀಸಿದೆ.