ಬೆಂಗಳೂರು,ಏ.೨೩:ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಸಮೀಪಿಸುತ್ತಿರುವಂತೆಯೇ ರಾಷ್ಟ್ರ ಬಿಜೆಪಿ ನಾಯಕರ ದಂಡು ರಾಜ್ಯಕ್ಕೆ ಭೇಟಿ ನೀಡಿ ಸರಣಿ ಸಮಾವೇಶ, ರೋಡ್ ಶೋ ನಡೆಸುವ ಮೂಲಕ ಮತಬೆಟೆಗೆ ಮುಂದಾಗಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಚಾರಕ್ಕಾಗಿ ಇಂದು ಮತ್ತೆ ರಾಜ್ಯ ಭೇಟಿ ಕೈಗೊಳ್ಳಲಿದ್ದಾರೆ. ನಿನ್ನೆಯಷ್ಟೇ ದೆಹಲಿಗೆ ವಾಪಸ್ಸಾಗಿದ್ದ ಅವರು, ಇಂದು ರಾತ್ರಿ ಮೈಸೂರಿಗೆ ಆಗಮಿಸಲಿದ್ದಾರೆ.
ರಾತ್ರಿ ೯.೩೦ಕ್ಕೆ ಆಗಮಿಸಲಿರುವ ಅಮಿತ್ ಶಾ, ನಗರದ ರ್‍ಯಾಡಿಸನ್ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ನಾಳೆ ಬೆಳಿಗ್ಗೆ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ, ನಾಡದೇವತೆ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ಪ್ರಚಾರ ನಡೆಸಲಿದ್ದಾರೆ.
ಗುಂಡ್ಲುಪೇಟೆಯಲ್ಲಿ ಅಮಿತ್ ಶಾ ರೋಡ್ ಶೋ ನಡೆಸಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಲಿದ್ದಾರೆ. ಇದಾದ ಬಳಿಕ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಹಾಸನ ಜಿಲ್ಲೆಯ ಸಕಲೇಶಪುರಕ್ಕೆ ತೆರಳಿ ರೋಡ್ ಶೋ ನಡೆಸಿ ಮೈಸೂರಿಗೆ ವಾಪಸ್ಸಾಗಿ ಹುಬ್ಬಳ್ಳಿಗೆ ತೆರಳಿದ್ದಾರೆ.
ಮೈಸೂರು ಭಾಗ ಮತ್ತು ಮಧ್ಯ ಕರ್ನಾಟಕದಲ್ಲಿ ಅಬ್ಬರದ ಪ್ರಚಾರ ನಡೆಸಿ ಮತಯಾಚನೆ ಮಾಡಲಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಲಿಂಗಾಯತ ಸಮುದಾಯದ ಮತದಾರರ ಮೇಲೆ ಕಣ್ಣಿಟ್ಟಿರುವ ಬಿಜೆಪಿ, ಇತ್ತೀಚೆಗಷ್ಟೆ ಬಿಜೆಪಿಗೆ ರಾಜೀನಾಮೆ ನೀಡಿ ಕಾಂಗ್ರೆಸ್‌ನಿಂದ ೭ನೇ ಬಾರಿಗೆ ಆಯ್ಕೆ ಬಯಸಿ ಸ್ಪರ್ಧಿಸಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್‌ರವರ ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದಲ್ಲೂ ಪ್ರಚಾರ ನಡೆಸಲು ಅಮಿತ್ ಶಾ ಸಜ್ಜಾಗಿದ್ದಾರೆ.
ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಮಹೇಶ್ ಟೆಂಗಿನಕಾಯಿ ಅವರನ್ನು ಗೆಲ್ಲಿಸಿಕೊಂಡು ಬರಲು ಹುಬ್ಬಳ್ಳಿಯಲ್ಲಿ ನಾಳೆ ರಾತ್ರಿ ವಾಸ್ತವ್ಯ ಹೂಡಿ ಸರಣಿ ಸಭೆಗಳನ್ನು ನಡೆಸಲಿದ್ದಾರೆ.