ರಾಮನಗರದಲ್ಲಿ ಕಾಂಗ್ರೆಸ್ ಪಾದಯಾತ್ರೆ

(ಸಂಜೆವಾಣಿ ಪ್ರತಿನಿಧಿಯಿಂದ)
ಬೆಂಗಳೂರು,ಸೆ.೭:ದೇಶ ಒಗ್ಗೂಡಿಸಲು ಕಾಂಗ್ರೆಸ್‌ನ ಯುವರಾಜ ರಾಹುಲ್‌ಗಾಂಧಿ ಅವರ ನೇತೃತ್ವದಲ್ಲಿ ನಡೆದ ಭಾರತ್ ಜೋಡೋ ಯಾತ್ರೆಗೆ ಒಂದು ವರ್ಷ ತುಂಬಿದ ಹಿನ್ನೆಲೆಯಲ್ಲಿ ಇಂದು ರಾಜ್ಯ ಕಾಂಗ್ರೆಸ್ ರಾಮನಗರದಲ್ಲಿ ಪಾದಯಾತ್ರೆ ಹಮ್ಮಿಕೊಂಡಿದೆ.
ಇಂದು ಸಂಜೆ ೫ ಗಂಟೆಯಿಂದ ೬ ಗಂಟೆಯವರೆಗೆ ರಾಮನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಿಂದ ಐಜೂರು ವೃತ್ತದವರೆಗೆ ಪಾದಯಾತ್ರೆ ನಡೆಯಲಿದೆ.
ಈ ಪಾದಯಾತ್ರೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ, ಸಂಸದ ಡಿ.ಕೆ ಸುರೇಶ್ ಸೇರಿದಂತೆ ಎಲ್ಲ ಪ್ರಮುಖ ಕಾಂಗ್ರೆಸ್ ನಾಯಕರು ಭಾಗಿಯಾಗುವರು.
ಕಳೆದ ವರ್ಷ ಕಾಂಗ್ರೆಸ್‌ನ ಯುವರಾಜ ರಾಹುಲ್‌ಗಾಂಧಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ ಪಾದಯಾತ್ರೆ ನಡೆಸಿದ್ದರು. ಈ ಪಾದಯಾತ್ರೆ ಕರ್ನಾಟಕ ಸೇರಿದಂತೆ ಎಲ್ಲ ರಾಜ್ಯಗಳಲ್ಲೂ ಹಾದು ಹೋಗಿತ್ತು. ಈ ಪಾದಯಾತ್ರೆ ಒಂದು ವರ್ಷ ತುಂಬಿದ ಹಿನ್ನೆಲೆಯಲ್ಲಿ ದೇಶಾದ್ಯಂತ ಸಂಭ್ರಮಾಚರಣೆಯನ್ನು ಕಾಂಗ್ರೆಸ್ ಪಕ್ಷ ನಡೆಸಿದ್ದು, ಅದರಂತೆ ರಾಜ್ಯದಲ್ಲೂ ಕೆಪಿಸಿಸಿ ರಾಮನಗರದಲ್ಲಿ ಪಾದಯಾತ್ರೆ ನಡೆಸುವ ಮೂಲಕ ಸಂಭ್ರಮಾಚರಣೆಯನ್ನು ಹಮ್ಮಿಕೊಂಡಿದೆ. ಅದರಂತೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಭಾರತ್‌ಜೋಡೊ ಯಾತ್ರೆಯ ಸಂಭ್ರಮಾಚರಣೆ ನಡೆದಿದೆ.