ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮಕ್ಕೆ ಚಾಲನೆ

ಧಾರವಾಡ, ಏ.17: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಜಿಲ್ಲೆಯಲ್ಲಿ ಏ.16 ರಿಂದ 30 ರವರೆಗೆ ಆಯೋಜಿಸಿರುವ ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮಕ್ಕೆ, ಕಲಘಟಗಿ ಶಾಸಕ ಸಿ.ಎಂ. ನಿಂಬಣ್ಣವರ ಕಲಘಟಗಿಯಲ್ಲಿ ಮಕ್ಕಳಿಗೆ ಜಂತುಹುಳು ನಿವಾರಣಾ ಮಾತ್ರೆ ನೀಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ಕೊಟ್ಟರು.

ಪ್ರತಿ ವರ್ಷ ಶಾಲೆ ಮತ್ತು ಅಂಗನವಾಡಿಗಳಲ್ಲಿ ಈ ಕಾರ್ಯಕ್ರಮ ನಡೆಯುತ್ತಿತ್ತು. ಈ ವರ್ಷ ಶಾಲೆ, ಕಾಲೇಜುಗಳು ಆರಂಭವಾಗದೇ ಇರುವುದರಿಂದ ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ಮನೆ- ಮನೆಗೆ ತೆರಳಿ 1 ರಿಂದ 2 ವರ್ಷದೊಳಗಿನ ಮಕ್ಕಳಿಗೆ ಅಲ್ಬೆಂಡ್‍ಝೋಲ್ 200 ಎಂಜಿ ಮಾತ್ರೆಗಳನ್ನು ಹಾಗೂ 2 ರಿಂದ 19 ವರ್ಷದೊಳಗಿನ ಮಕ್ಕಳಿಗೆ ಅಲ್ಬೆಂಡ್‍ಝೋಲ್ 400 ಎಂಜಿ ಮಾತ್ರೆಗಳನ್ನು ಕೊಡಲಾಗುವುದು. ಕೊರೊನಾ ಪಾಸಿಟಿವ್ ಇರುವ ಮನೆಗಳಲ್ಲಿ ಮಾತ್ರೆಗಳನ್ನು ನೀಡುವಂತಿಲ್ಲ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದರು.

ಧಾರವಾಡ ತಾಲೂಕು- 2,12,062, ಹುಬ್ಬಳ್ಳಿ ತಾಲೂಕು-2,45,525, ಕಲಘಟಗಿ ತಾಲೂಕು - 46,945, ಕುಂದಗೋಳ ತಾಲೂಕು - 48,477 ಹಾಗೂ ನವಲಗುಂದ ತಾಲೂಕು - 63,952 ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 6,16,961 ಮಕ್ಕಳಿಗೆ ಜಂತುಹುಳು ಮಾತ್ರೆ ನೀಡುವ ಗುರಿ ಹೊಂದಲಾಗಿದೆ. 

ಕಾರ್ಯಕ್ರಮದಲ್ಲಿ  ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಈರಣ್ಣ ಜಡಿ,   ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಬಿ.ಸುಶೀಲಾ,  ತಾಲೂಕಾ ಆಸ್ಪತ್ರೆಯ ಡಾ.ಸತ್ಯನಾರಾಯಣ,  ಹಿರಿಯ ಆರೋಗ್ಯ ಸಹಾಯಕಿ ಗಿರಿಜಾ ಹಾಗೂ ಆಶಾ ಕಾರ್ಯಕರ್ತೆಯರು, ಸಾರ್ವಜನಿಕರು ಭಾಗವಹಿಸಿದ್ದರು.