
ಸಂಜೆವಾಣಿ ವಾರ್ತೆ
ಕುರುಗೋಡು:ಮೇ.17: ಡೆಂಗಿ ಜ್ವರವು ಸಾಂಕ್ರಾಮಿಕ ರೋಗವಾಗಿದ್ದು, ಸಾರ್ವಜನಿಕರು ತಮ್ಮ ಮನೆ ಸುತ್ತಮುತ್ತ ಒಳಾಂಗಣದಲ್ಲಿ ಮತ್ತು ಹೊರಾಂಗಣದಲ್ಲಿ ನೀರು ಶೇಖರಣೆಯಾಗದಂತೆ ಎಚ್ಚರ ವಹಿಸಬೇಕು ಎಂದು ವೈದ್ಯಾಧಿಕಾರಿ ಡಾ. ರೂಪಾ ಜಾಲಿಹಾಳ್ ಹೇಳಿದರು.
ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದ ವತಿಯಿಂದ ರಾಷ್ಟ್ರೀಯ ಡೆಂಗಿ ದಿನಾಚರಣೆ ಅಂಗವಾಗಿ ಮಂಗಳವಾರ ಹಮ್ಮಿಕೊಂಡಿದ್ದ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಇದ್ದಕ್ಕಿದ್ದಂತೆ ಬರುವ ಅಧಿಕ ಜ್ವರ, ತೀವ್ರ ತಲೆ ನೋವು, ಕಣ್ಣುಗಳ ಹಿಂಭಾಗದಲ್ಲಿ ತೀವ್ರತರ ನೋವು, ಮೈಕೈ ಮತ್ತು ಕೀಲುಗಳಲ್ಲಿ ನೋವು, ವಾಂತಿಯು ಡೆಂಗಿ ಜ್ವರದ ಲಕ್ಷಣಗಳು. ಈ ಕಾಯಿಲೆ ಬಂದವರು ಸರ್ಕಾರಿ ಆಸ್ಪತ್ರೆಯಲ್ಲಿ ಪರೀಕ್ಷೆ ಮಾಡಿಸಿ ಸೂಕ್ತ ಚಿಕಿತ್ಸೆ ಪಡೆಯಬೇಕು’ ಎಂದು ಕಿವಿಮಾತು ಹೇಳಿದರು.
ಮಳೆಗಾಲದಲ್ಲಿ ಸಾಮಾನ್ಯವಾಗಿ ನೀರು ಶೇಖರಣೆಯಾಗುತ್ತದೆ. ಹೀಗಾಗಿ ವೈರಾಣು ಜ್ವರ ಪ್ರಕರಣ ಹೆಚ್ಚಾಗುವ ಸಾಧ್ಯತೆಯಿದ್ದು, ಮುನ್ನೆಚ್ಚರಿಕೆ ವಹಿಸಬೇಕು ಎಂದು ಕೋರಿದರು.
ಸಮುದಾಯ ಆರೋಗ್ಯ ಕೇಂದ್ರದಿಂದ ಪ್ರಾರಂಭಗೊಂಡ ಜಾಗೃತಿ ಜಾಥಾ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಡೆಂಗಿ ರೋಗ ಲಕ್ಷಣಗಳ ಕುರಿತು ಜಾಗೃತಿ ಮೂಡಿಸಿದರು.
ಈ ಸಂದರ್ಭದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಸಿಬ್ಬಂದಿಗಳು, ಆಶಾ ಕಾರ್ಯಕರ್ತರು ಇದ್ದರು.