
ಚಿತ್ರದುರ್ಗ.ಮೇ.೧೮; ರಾಷ್ಟ್ರೀಯ ಡೆಂಗೀ ದಿನದ ಅಂಗವಾಗಿ ಜಾಗೃತಿ ಜಾಥಾಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ರಂಗನಾಥ್ ಬುಧವಾರ ಚಾಲನೆ ನೀಡಿದರು.
ನಗರದ ಕೆಳಗೋಟೆಯ ಜನಸಾಗರ ಪ್ರಿಂಟ್ ಪ್ರೆಸ್ ಸಮೀಪ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳ ಕಚೇರಿ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ವತಿಯಿಂದ ಹಮ್ಮಿಕೊಂಡಿದ್ದ ರಾಷ್ಟ್ರೀಯ ಡೆಂಗೀ ದಿನ-“ಎಲ್ಲರ ಸಹಭಾಗಿತ್ವದೊಂದಿಗೆ ಡೆಂಗೀಯನ್ನು ಸೋಲಿಸೋಣ” ಎಂಬ ಘೋಷವಾಕ್ಯದೊಂದಿಗೆ ಜಾಗೃತಿ ಜಾಥಾಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ರಂಗನಾಥ್, ಮಳೆಗಾಲ ಪ್ರಾರಂಭವಾಗಿರುವುದರಿಂದ ಸೊಳ್ಳೆಗಳು ಹೆಚ್ಚಾಗಿದ್ದು, ನೀರು ಶೇಖರಣಾ ಪರಿಕರಗಳು ಹಾಗೂ ಮನೆಯ ಸುತ್ತಮುತ್ತಲಿನಲ್ಲಿ ನೀರು ನಿಲ್ಲದಂತೆ ಎಚ್ಚರವಹಿಸಬೇಕು. ಘನತ್ಯಾಜ್ಯ ವಸ್ತುಗಳು ಸೂಕ್ತ ವಿಲೇವಾರಿ ಮಾಡುವುದು. ಸ್ವಯಂ ರಕ್ಷಣಾ ವಿಧಾನಗಳನ್ನು ಅನುಸರಿಸುವುದು. ಸೊಳ್ಳೆ ಪರದೆ, ಸೊಳ್ಳೆಬತ್ತಿ, ಸೊಳ್ಳೆ ನಿರೋಧಕಗಳನ್ನು ಬಳಸುವುದು ಹಾಗೂ ಯಾವುದೇ ಜ್ವರ ಬಂದ ತಕ್ಷಣ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತ ಪರೀಕ್ಷೆ ಮಾಡಿಸಬೇಕು ಎಂದು ಕರೆ ನೀಡಿದರು.ಜಿಲ್ಲಾ ರೋಗವಾಹಕ ಆಶ್ರೀತ ರೋಗಗಳ ನಿಯಂತ್ರಣಾಧಿಕಾರಿ ಡಾ.ಎನ್.ಕಾಶೀ ಮಾತನಾಡಿ, ಡೆಂಗೀ ಒಂದು ವೈರಸ್ ಕಾಯಿಲೆಯಾಗಿದ್ದು, ಸೊಳ್ಳೆಗಳಿಂದ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಕೃತಕವಾದ ನೀರು ಶೇಖರಣಾ ಪರಿಕರಗಳನ್ನು ವಾರಕ್ಕೆ ಎರಡು ಬಾರಿ ಖಾಲಿ ಮಾಡಿ ನೀರು ತುಂಬಿಸಿ, ಮುಚ್ಚಳದಿಂದ ಮುಚ್ಚುವುದು. ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶಪಡಿಸುವುದು. ಯಾವುದೇ ಜ್ವರವಿರಲಿ ರಕ್ತ ಪರೀಕ್ಷೆ ಮಾಡಿಸಿ, ವೈದ್ಯರ ಸಲಹೆ ಪಡೆಯಿರಿ. ದ್ರವರೂಪದ ಆಹಾರ ಪದಾರ್ಥಗಳನ್ನು ಸೇವಿಸಿ ವಿಶ್ರಾಂತಿ ಪಡೆಯಿರಿ ಎಂದರು.