ರಾಷ್ಟ್ರೀಯ ಮತದಾರರ ದಿನಾಚರಣೆ


ಧಾರವಾಡ, ನ.20: ಉತ್ತಮ ನಾಯಕರನ್ನು ಆಯ್ಕೆ ಮಾಡಿ, ಸದೃಢ ಸಮಾಜ ನಿರ್ಮಿಸಲು ಮತದಾನ ಅವಶ್ಯಕ. 18 ವರ್ಷ ತುಂಬಿದ ಯುವಜನರು ಮತದಾರರ ಪಟ್ಟಿಗೆ ಹೆಸರು ನೋಂದಣಿ ಮಾಡಿಕೊಳ್ಳಬೇಕು. ಪ್ರತಿ ಚುನಾವಣೆಯಲ್ಲಿಯೂ ಮತ ಚಲಾಯಿಸಬೇಕು ಎಂದು ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರೂ ಆಗಿರುವ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಬಿ.ಸುಶೀಲಾ ಹೇಳಿದರು.

ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಜೆ.ಎಸ್.ಎಸ್ ಫ್ರೌಢಶಾಲೆಯ ಉತ್ಸವ ಸಭಾಂಗಣದಲ್ಲಿ ಏರ್ಪಡಿಸಿದ್ದ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ವಿವಿಧ ಚಟುವಟಿಕೆಗಳ ಸ್ಪರ್ಧೆ ಉದ್ಘಾಟಿಸಿ ಅವರು ಮಾತನಾಡಿದರು.

ಭಾರತವು ವಿಶ್ವದ ಅತೀ ದೊಡ್ಡ ಪ್ರಜಾಪ್ರಭುತ್ವ  ದೇಶವಾಗಿದೆ. ಇದರ ಮುಖ್ಯ ಬುನಾದಿಯೇ ಮತದಾನವಾಗಿದೆ. 18 ವರ್ಷ ತುಂಬಿದ ಎಲ್ಲರೂ ಮತದಾರ ಪಟ್ಟಿಗೆ ನೋಂದಣಿ ಮಾಡಿಕೊಳ್ಳಬೇಕು. ತಮ್ಮ ಮನೆಯ ನೆರೆ-ಹೊರೆಯವರಿಗೆ ಮತದಾನ ನೋಂದಣಿ ಮಾಡಿಕೊಳ್ಳುವಂತೆ ಸೂಚಿಸಬೇಕು. ಗ್ರಾಮ ಮಟ್ಟದಲ್ಲಿ ಅಂಗನವಾಡಿ ಕಾರ್ಯಕರ್ತರನ್ನು ಸಂಪರ್ಕಿಸಿ ಅಥವಾ ನೇರವಾಗಿ ಆನ್‍ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಬಹುದು. ಯಾವುದೇ ಜಾತಿ, ಮತ, ಆಮಿಷಕ್ಕೆ ಒಳಗಾಗದೇ ಮತ ಚಲಾಯಿಸಬೇಕು. ಚುನಾವಣೆ ಪ್ರಕ್ರಿಯೆ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆ ಕುರಿತು ತಿಳಿಸುವ ಉದ್ದೇಶದಿಂದ ತಾಲೂಕಾ, ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಇಂತಹ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು.

ಉಪ ವಿಭಾಗಾಧಿಕಾರಿ ಡಾ.ಬಿ. ಗೋಪಾಲಕೃಷ್ಣ,  ಜೆ.ಎಸ್.ಎಸ್ ಶಿಕ್ಷಣ ಸಂಸ್ಥೆಯ ವಿತ್ತಾಧಿಕಾರಿ ಡಾ. ಅಜಿತ್ ಪ್ರಸಾದ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮೋಹನಕುಮಾರ್ ಮಾತನಾಡಿದರು.

ಡಯಟ್ ಪ್ರಾಚಾರ್ಯೆ ಎನ್.ಕೆ.ಸಾವಕಾರ್,ಧಾರವಾಡ ನಗರ ಕ್ಷೇತ್ರ ಶಿಕ್ಷಣಾಧಿಕಾರಿ ಗಿರೀಶ ಪದಕಿ, ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿ ಉಮೇಶ್ ಬಮ್ಮಕ್ಕನವರ,ಸ್ಪರ್ಧೆಯ ನಿರ್ಣಾಯಕರು, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು. 

ಜಯಲಕ್ಷ್ಮೀ ಪ್ರಾರ್ಥಿಸಿದರು. ಬಿ.ಬಿ. ದುಬ್ಬನಮರಡಿ ನಿರೂಪಿಸಿದರು. ಶಿವಲೀಲಾ ಕಳಸಣ್ಣವರ ವಂದಿಸಿದರು.