ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯಕಾರಿಣಿ

ಬೆಂಗಳೂರಿನಲ್ಲಿಂದು ಮೂರು ದಿನಗಳ ರಾಷ್ಟ್ರೀಯ ಯುವ ಕಾರ್ಯಕಾರಿಣಿಗೆ ಚಾಲನೆ ನೀಡಲಾಗಿದ್ದು, ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ ಶ್ರೀನಿವಾಸ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ರಾಷ್ಟ್ರೀಯ ಯುವ ಕಾಂಗ್ರೆಸ್ ಉಸ್ತುವಾರಿ ಕೃಷ್ಣಅಳವಾರು, ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಂ.ಎಸ್. ರಕ್ಷಾ ರಾಮಯ್ಯ, ಕೆಪಿಸಿಸಿ ಉಪಾಧ್ಯಕ್ಷ ಎಂ. ಸೂರಜ್‌ಹೆಗ್ಡೆ, ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹ್ಮದ್ ನಲ್ಪಾಡ್ ಮತ್ತಿತರರು ಈ ಸಂದರ್ಭದಲ್ಲಿ ಇದ್ದರು.

ಬೆಂಗಳೂರು,ಮಾ.೪: ವಿಧಾನಸಭಾ ಚುನಾವಣೆಗೆ ಯುವ ಕಾರ್ಯಕರ್ತರನ್ನು ಸಜ್ಜುಗೊಳಿಸಲು ಯುವ ಕಾಂಗ್ರೆಸ್ ತಯಾರಿ ನಡೆಸಿದ್ದು, ಇಂದು ಬೆಂಗಳೂರಿನಲ್ಲಿ ಮೂರು ದಿನಗಳ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯಕಾರಿಣಿ ಆರಂಭವಾಗಿದೆ.
ಮುಂದಿನ ವಿಧಾನಸಭಾ ಚುನಾವಣೆಯ ಮೇಲೆ ಕಣ್ಣಿಟ್ಟು, ಚುನಾವಣೆಯಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಸಕ್ರಿಯಗೊಳಿಸಿ ಬೂತ್ ಮಟ್ಟದಲ್ಲಿ ಪಕ್ಷದ ಗೆಲುವಿಗೆ ರೂಪಿಸಬೇಕಾದ ಕಾರ್ಯತಂತ್ರಗಳ ಬಗ್ಗೆ ಈ ಮೂರು ದಿನಗಳ ಕಾಲ “ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯಕಾರಿಣಿ”ಯಲ್ಲಿ ಪ್ರಮುಖವಾಗಿ ಚರ್ಚೆ ಆಗಲಿದೆ.ಇದರ ಜತೆಗೆ ರಾಷ್ಟ್ರಮಟ್ಟದಲ್ಲಿ ಯುವ ಕಾಂಗ್ರೆಸ್‌ನ್ನು ಮತ್ತಷ್ಟು ಬಲಪಡಿಸಿ ಪಕ್ಷಕ್ಕೆ ಹೆಚ್ಚಿನ ಚೈತನ್ಯ ತುಂಬುವ ನಿಟ್ಟಿನಲ್ಲೂ ಚರ್ಚೆಗಳು ನಡೆಯಲಿದ್ದು, ಕೆಲ ನಿರ್ಣಯಗಳನ್ನು ಕೈಗೊಳ್ಳಲಾಗುತ್ತದೆ.
ಕರ್ನಾಟಕ ಸೇರಿದಂತೆ ವಿಧಾನಸಭಾ ಚುನಾವಣೆಗಳು ನಡೆಯಲಿರುವ ರಾಜ್ಯಗಳಲ್ಲಿ ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ಮನೆ ಮನೆಗೆ ತಲುಪಿಸಲು ರೂಪಿಸಬೇಕಾದ ಕಾರ್ಯಕ್ರಮಗಳು, ಕೇಂದ್ರ ಸರ್ಕಾರ ಯುವ ಜನರಿಗೆ ಉದ್ಯೋಗ ಒದಗಿಸಲು ವಿಫಲವಾಗಿರುವುದನ್ನು, ಯುವಕರಿಗೆ ಮನದಟ್ಟು ಮಾಡುವ ನಿಟ್ಟಿನಲ್ಲಿ ಯಾವ್ಯೆಲ್ಲ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂಬ ಬಗ್ಗೆ ಕಾರ್ಯಕಾರಿಣಿಯಲ್ಲಿ ಚರ್ಚಿಸಲಾಗುವುದು.ಭಾರತ್ ಜೋಡೊ ಯಾತ್ರೆ ಯಶಸ್ವಿನ ನಂತರ ಕಾಂಗ್ರೆಸ್ ಪಕ್ಷ ನಡೆಸಲಿರುವ ಯೂತ್ ಜೋಡೊ ಅಭಿಯಾನದ ಯಶಸ್ಸಿನ ಸಂಬಂಧವು ಚರ್ಚೆಗಳು ನಡೆಯಲಿವೆ.ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ ಶ್ರೀನಿವಾಸ್ ನೇತೃತ್ವದಲ್ಲಿ ಈ ಕಾರ್ಯಕಾರಿಣಿ ನಡೆದಿದ್ದು, ಇಂದು ಬೆಳಿಗ್ಗೆ ಈ ಕಾರ್ಯಕಾರಿಣಿಯನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ರಾಷ್ಟ್ರೀಯ ಯುವ ಕಾಂಗ್ರೆಸ್ ಉಸ್ತುವಾರಿ ಕೃಷ್ಣಅಳವಾರು, ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಂ.ಎಸ್. ರಕ್ಷಾ ರಾಮಯ್ಯ, ಕೆಪಿಸಿಸಿ ಉಪಾಧ್ಯಕ್ಷ ಎಂ. ಸೂರಜ್‌ಹೆಗ್ಡೆ, ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹ್ಮದ್ ನಲ್ಪಾಡ್ ಮತ್ತಿತರರು ಈ ಸಂದರ್ಭದಲ್ಲಿ ಇದ್ದರು.