ರಾಸಲೀಲೆ ಪ್ರಕರಣ: ವಿಚಾರಣೆ ಜೂ.18ಕ್ಕೆ ಮುಂದೂಡಿಕೆ

ಬೆಂಗಳೂರು , ಮೇ.31- ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣವನ್ನು ಸಿಬಿಐಗೆ ವಹಿಸುವ ಬಗ್ಗೆ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ನಡೆಸಿರುವ ಹೈಕೋರ್ಟ್​ ವಿಚಾರಣೆಯನ್ನು ಜೂನ್ 18ಕ್ಕೆ ಮುಂದೂಡಿದೆ.
ಅಶ್ಲೀಲ ಸಿಡಿ ಪ್ರಕರಣವನ್ನು ಸಿಬಿಐ ತನಿಖೆ ನಡೆಸಬೇಕೆಂದು ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ನಡೆಯಿತು.
ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಲು ಎಸ್​ಐಟಿಗೆ ಸೂಚಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಇಂದು ವಿಚಾರಣೆ ನಡೆಸಿರುವ ಹೈಕೋರ್ಟ್​ ವಿಚಾರಣೆಯನ್ನು ಜೂನ್ 18ಕ್ಕೆ ಮುಂದೂಡಿದೆ.
ಜೂನ್ 17ಕ್ಕೆ ಮತ್ತೆ ವರದಿ ಸಲ್ಲಿಕೆಗೆ ಸೂಚನೆ ನೀಡಿರುವ ಹೈಕೋರ್ಟ್ ನ್ಯಾಯಮೂರ್ತಿಗಳು, ಎಸ್ಐಟಿ ಮುಖ್ಯಸ್ಥರ ಸಹಿಯೊಂದಿಗೆ ವರದಿ ಸಲ್ಲಿಸಬೇಕು. ಇಲ್ಲದೇ ಹೋದರೆ ಎಸ್ಐಟಿ ​ಉಸ್ತುವಾರಿ ಯಾರು ಇರುತ್ತಾರೋ ಅವರು ಸಲ್ಲಿಸಬೇಕು ಎಂದು ಸೂಚಿಸಿದ್ದಾರೆ.
ಸಿಡಿ ಪ್ರಕರಣದ ತನಿಖಾ ಪ್ರಗತಿ ವರದಿಯನ್ನು ಎಸ್​ಐಟಿ ಹೈಕೋರ್ಟ್​ಗೆ ಮುಚ್ಚಿದ ಲಕೋಟೆಯಲ್ಲಿ ನೀಡಿದೆ. ಆರ್​ಟಿ ನಗರ ಠಾಣೆಯಲ್ಲಿ ದಾಖಲಾದ ಅಪಹರಣ ಪ್ರಕರಣದಲ್ಲಿ ಬಿ ರಿಪೋರ್ಟ್ ಸಲ್ಲಿಸಿರುವುದಾಗಿ ಸರ್ಕಾರಿ ಪರ ವಕೀಲ ಪ್ರಭುಲಿಂಗ ನಾವಡಗಿ ಹೇಳಿಕೆ ನೀಡಿದ್ದರು. ಅತ್ಯಾಚಾರ ಪ್ರಕರಣದಲ್ಲಿ ತನಿಖೆ ಪೂರ್ಣಗೊಂಡಿದೆ ಎಂದು ಹೇಳಿಕೆ ನೀಡಿದ್ದರು.