
ಬೀದರ್:ಮಾ.3: ಮಾರ್ಚ್ 5 ರಂದು ಶ್ರೀ ರೇಣುಕಾಚಾರ್ಯರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಬೇಕು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶ್ರೀ ರೇಣುಕಾಚಾರ್ಯರ ಜಯಂತಿ ಆಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
‘ಇದೇ ಮೊದಲ ಬಾರಿಗೆ ರೇಣುಕಾಚಾರ್ಯರ ಜಯಂತಿಯನ್ನು ಸರ್ಕಾರದ ವತಿಯಿಂದ ಆಚರಿಸಲಾಗುತ್ತಿದೆ. ಅಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ರೇಣುಕಾಚಾರ್ಯರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಗುವುದು. ಸಂಜೆ 4 ಗಂಟೆಗೆ ರೇಣುಕಾಚಾರ್ಯರ ಭಾವಚಿತ್ರದ ಮೆರವಣಿಗೆ ನಗರದ ಬಸವೇಶ್ವರ ವೃತ್ತ, ಅಂಬೇಡ್ಕರ್ ವೃತ್ತ, ಶಿವಾಜಿ ವೃತ್ತ, ಹಾಗೂ ಹರಳಯ್ಯ ವೃತ್ತದ ಮಾರ್ಗವಾಗಿ ಚೆನ್ನಬಸವ ಪಟ್ಟದೇವರು ರಂಗಮಂದಿರಕ್ಕೆ ಆಗಮಿಸಿದ ನಂತರ ಸಂಜೆ 6 ಗಂಟೆಗೆ ವೇದಿಕೆ ಕಾರ್ಯಕ್ರಮ ನಡೆಯಲಿದೆ ಎಂದರು.
ಶ್ರೀ ರಾಜಶೇಖರ ಸ್ವಾಮಿ ಗೋರ್ಟಾ ಮಾತನಾಡಿ, ಸರ್ಕಾರದ ವತಿಯಿಂದ ಜಗದ್ಗುರು ರೇಣುಕಾಚಾರ್ಯರರ ಜಯಂತಿ ಆಚರಿಸುತ್ತಿರುವುದು ಸಂತಸದ ವಿಷಯವಾಗಿದೆ ಎಂದರು.
ಜಗದ್ಗುರು ರೇಣುಕಾಚಾರ್ಯರ ಜಯಂತಿ ಆಚರಣೆ ಸಮಿತಿಯ ಅಧ್ಯಕ್ಷ ಸೂರ್ಯಕಾಂತ ನಾಗಮಾರಪಳ್ಳಿ ಮಾತನಾಡಿ, ಈ ಜಯಂತಿಯನ್ನು ಸರ್ವಧರ್ಮದವರು ಸೇರಿ ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ಹೇಳಿದರು.
ಶಿವಶರಣಪ್ಪ ವಾಲಿ, ರೇಣುಕಾಚಾರ್ಯರ ಜಯಂತಿ ಆಚರಣೆ ಸಮಿತಿಯ ಪ್ರಧಾನ ಕಾರ್ಯದರ್ಶಿ ಶಿವಯ್ಯ ಸ್ವಾಮಿ, ಈಶ್ವರಸಿಂಗ್ ಠಾಕೂರ, ಸಿದ್ರಾಮಯ್ಯ ಸ್ವಾಮಿ, ವಿರೂಪಾಕ್ಷ ಗಾದಗಿ ಇದ್ದರು.