ಕಲಬುರಗಿ,ಮಾ.27-ರೈತರಿಗೆ ಬೆಳೆವಿಮೆ ಪರಿಹಾರ ಬಿಡುಗಡೆ ಮಾಡಬೇಕು ಎಂಬ ಬೇಡಿಕೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘ (ಕೆಪಿಆರ್‍ಎಸ್) ಜಿಲ್ಲಾ ಸಮಿತಿ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಇಂದು ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆ ನಂತರ ಜಿಲ್ಲಾಧಿಕಾರಿಗಳ ಮುಖಾಂತರ ರಾಜ್ಯಪಾಲರು ಮತ್ತು ಮುಖ್ಯಮಂತ್ರಿಗಳಿಗೆ ಮನವಿಪತ್ರ ಸಲ್ಲಿಸಲಾಯಿತು.
ರೈತರಿಂದ ಹಣ ಸುಲಿಗೆ ಮಾಡುತ್ತಿರುವ ಬೆಳೆವಿಮಾ ಕಂಪನಿ ಮೇಲೆ ಕ್ರಿಮಿನಲ್ ಕೇಸ್ ಹಾಕಿ ಜೈಲಿಗೆ ತಳ್ಳಿ ರೈತರಿಗೆ ಬೆಳೆವಿಮೆ ಹಣ ಬಿಡುಗಡೆ ಮಾಡಬೇಕು, ಅತಿವೃಷ್ಟಿಯಿಂದ ಮತ್ತು ನೆಟೆ ರೋಗದಿಂದ ಒಣಗಿ ಹೋದ ತೊಗರಿಗೆ ವೈಜ್ಞಾನಿಕವಾಗಿ ಪರಿಹಾರ ನೀಡಬೇಕು, ಸಾಲ ಮಂಜೂರಾದ ರೈತರಿಗೆ ಡಿಸಿಸಿ ಬ್ಯಾಂಕ್ ಸರಳವಾಗಿ ಸಾಲ ನೀಡಬೇಕು, ಬಹರ್ ಹುಕಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಬೇಕು ಎಂದು ಮನವಿಪತ್ರದಲ್ಲಿ ಒತ್ತಾಯಿಸಲಾಗಿದೆ.
ಸಂಘದ ಜಿಲ್ಲಾಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ಸಾಯಿಬಣ್ಣಾ ಗುಡುಬಾ, ಸುಭಾಷ ಜೇವರ್ಗಿ, ದಿಲೀಪ್ ಕುಮಾರ್ ಸೇರಿದಂತೆ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.