ರೈತರ ಸಂಪೂರ್ಣ ಸಾಲ ಮನ್ನಾಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ

ಕಲಬುರಗಿ:ಫೆ.27: ರೈತರ ಸಂಪೂರ್ಣ ಸಾಲ ಮನ್ನಾ ಮಾಡುವುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಫೆಬ್ರವರಿ 28ರಂದು ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಶ್ರೀಮತಿ ಕವಿತಾ ಶಟಗಾರಮಠ್ ಅವರು ಹೇಳಿದರು.
ಮಂಗಳವಾರ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಭೀಕರ ಬರಗಾಲ ಎದುರಾಗಿದೆ. ರಾಜ್ಯ ಸರ್ಕಾರವು ಬರ ಘೋಷಣೆ ಮಾಡಿದರೂ ಸಹ ಪರಿಹಾರದ ಕ್ರಮಗಳು ಜಾರಿಯಲ್ಲಿಲ್ಲ. ಅಲ್ಲದೇ ರೈತರ ಸಾಲ ವಸೂಲಾತಿಗೆ ನೋಟಿಸ್ ನೀಡಲಾಗುತ್ತಿದೆ. ಕೂಡಲೇ ಇದೆಲ್ಲವನ್ನು ತಡೆದು ರೈತರ ಸಾಲ ಸಂಪೂರ್ಣ ಮನ್ನಾ ಮಾಡಬೇಕು ಎಂದು ಒತ್ತಾಯಿಸಿದರು.
ಭದ್ರಾ ಮತ್ತು ಮಹಾದಾಯಿ ಯೋಜನೆಗಳನ್ನು ಕೂಡಲೇ ಜಾರಿಗೊಳಿಸಬೇಕು ಎಂದು ಆಗ್ರಹಿಸಿದ ಅವರು, ನವಲಿ ಸಮಾನಾಂತರ ಜಲಾಶಯ ನಿರ್ಮಿಸಬೇಕು ಎಂದು ಒತ್ತಾಯಿಸಿದರು. ಮೇಕೆದಾಟು ಯೋಜನೆ ಜಾರಿಗಾಗಿ ಕಾಂಗ್ರೆಸ್ ವಿರೋಧ ಪಕ್ಷದ ಸ್ಥಾನದಲ್ಲಿದ್ದಾಗ ಹೋರಾಟ ಮಾಡಿತ್ತು. ಈಗ ಅಧಿಕಾರದಲ್ಲಿದ್ದರೂ ಸಹ ಆ ಯೋಜನೆ ಜಾರಿಯಾಗಲು ಕ್ರಮ ಕೈಗೊಂಡಿಲ್ಲ. ಕೂಡಲೇ ಯೋಜನೆ ಜಾರಿಗೊಳಿಸಬೇಕು ಎಂದು ಅವರು ಆಗ್ರಹಿಸಿದರು.
ಡಾ. ಸ್ವಾಮಿನಾಥನ್ ಆಯೋಗದ ವರದಿಯನ್ನು ಜಾರಿಗೆ ತರುವಂತೆ, ರೈತರ ಬೆಳೆಗೆ ಕಾನೂನಾತ್ಮಕ ದರ ನಿಗದಿಪಡಿಸುವಂತೆ ಒತ್ತಾಯಿಸಿದ ಅವರು, ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದೆ. ಕೂಡಲೇ ಅಪ್ಪರ್ ಮುಲ್ಲಾಮಾರಿ ಮತ್ತು ಲೋಹರ್ ಮುಲ್ಲಾಮಾರಿ ಯೋಜನೆಯನ್ನು ಸಂಪೂರ್ಣ ಜಾರಿಗೆ ತಂದು ನೀರು ಬಿಡುವಂತೆ ಆಗ್ರಹಿಸಿದರು.
ಜಿಲ್ಲೆಯಲ್ಲಿನ ಕುಡಿಯುವ ನೀರಿನ ಸಮಸ್ಯೆಯನ್ನು ಶಾಶ್ವತವಾಗಿ ಪರಿಹರಿಸಬೇಕು ಎಂದು ಅವರು ಒತ್ತಾಯಿಸಿದರು. ಈ ಎಲ್ಲ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಸಂಘಟನೆಯು ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಲಾಗಿದೆ ಎಂದು ಅವರು ಹೇಳಿದರು. ಸುದ್ದಿಗೋಷ್ಠಿಯಲ್ಲಿ ರಾಜ್ಯ ಕಾರ್ಯದರ್ಶಿ ಶ್ರೀಮತಿ ಲಕ್ಷ್ಮೀ ದೊಡ್ಡಮನಿ ಸೇಡಂ, ಜಿಲ್ಲಾ ಕಾರ್ಯದರ್ಶಿ ಶ್ರೀಮತಿ ಗೌರಮ್ಮ ಹಡಪದ್, ಶ್ರೀಮತಿ ಲಕ್ಷ್ಮೀ ಹಾಗೂ ಯಾದಗಿರಿ ಜಿಲ್ಲಾ ಉಪಾಧ್ಯಕ್ಷ ವೆಂಕೋಬಾ ಕಟ್ಟಿಮನಿ ಕಂಚಗಾರಹಳ್ಳಿ ಮುಂತಾದವರು ಉಪಸ್ಥಿತರಿದ್ದರು.