ರೈತರ ಸುರಕ್ಷತೆಗೆ ಆದ್ಯತೆ ನೀಡಿ: ಮುಧೋಳ್ ಕರ್

ಬೀದರ:ಜೂ.8: ‘ಕೋವಿಡ್ ಪ್ರಯುಕ್ತ ಜಿಲ್ಲೆಯ ಬಿತ್ತನೆ ಬೀಜ ವಿತರಣಾ ಕೇಂದ್ರಗಳಲ್ಲಿ ರೈತರ ಸುರಕ್ಷತೆಗೆ ಕ್ರಮ ಕೈಗೊಳ್ಳಬೇಕು’ ಎಂದು ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ)ಯ ಜಿಲ್ಲಾ ಘಟಕದ ಅಧ್ಯಕ್ಷ ಸೋಮನಾಥ ಮುಧೋಳ ಒತ್ತಾಯಿಸಿದ್ದಾರೆ.

‘ಮುಂಗಾರು ಹಂಗಾಮಿಗೆ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಖರೀದಿಗಾಗಿ ನಿತ್ಯ ನೂರಾರು ಜನ ರೈತ ಸಂಪರ್ಕ ಕೇಂದ್ರ ಹಾಗೂ ಹೆಚ್ಚುವರಿ ಬೀಜ ವಿತರಣೆ ಕೇಂದ್ರಗಳಿಗೆ ತೆರಳುತ್ತಿದ್ದಾರೆ. ಕೋವಿಡ್ ಸೋಂಕು ಹರಡುವಿಕೆ ಭೀತಿಯ ಕಾರಣ ಸುರಕ್ಷತಾ ನಿಯಮಗಳ ಪಾಲನೆಯೊಂದಿಗೆ ಬೀಜ ಹಾಗೂ ರಸಗೊಬ್ಬರ ವಿತರಣೆ ಮಾಡಬೇಕು’ ಎಂದು ಹೇಳಿದ್ದಾರೆ.

‘ಕೋವಿಡ್ ಎರಡನೇ ಅಲೆ ಜಿಲ್ಲೆಯಲ್ಲಿ ಸಾಕಷ್ಟು ಆತಂಕ ಮೂಡಿಸಿತ್ತು. ಅನೇಕ ಸಾವು, ನೋವುಗಳಿಗೂ ಕಾರಣವಾಗಿತ್ತು. ಇದೀಗ ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಬರುತ್ತಿದೆ.ಹೀಗಾಗಿ ಮತ್ತೆ ಸೋಂಕು ಹರಡದಂತೆ ಮುಂಜಾಗ್ರತೆ ವಹಿಸಬೇಕಾಗಿದೆ’ ಎಂದು ತಿಳಿಸಿದ್ದಾರೆ.
‘ಬಿತ್ತನೆ ಬೀಜ ವಿತರಣಾ ಕೇಂದ್ರಗಳನ್ನು ಸಂಪೂರ್ಣ ಸ್ಯಾನಿಟೈಸ್ ಮಾಡಬೇಕು. ರೈತರಿಗೆ ಸರತಿ ಸಾಲಿನಲ್ಲಿ ನಿಂತು ಬೀಜ ಪಡೆಯಲು ಅನುಕೂಲವಾಗುವಂತೆ ಸುರಕ್ಷಿತ ಅಂತರದಲ್ಲಿ ಗುರುತು ಹಾಕಬೇಕು. ಸ್ಯಾನಿಟೈಸರ್ ಇಡಬೇಕು. ರೈತರು ಕೂಡ ಸುರಕ್ಷತೆ ದೃಷ್ಟಿಯಿಂದ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು’ ಎಂದು ಮನವಿ ಮಾಡಿದ್ದಾರೆ.

‘ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ ಸೋಯಾಬೀನ್, ಉದ್ದು, ಹೆಸರು ಬೀಜಗಳಿಗೆ ಹೆಚ್ಚು ಬೇಡಿಕೆ ಇದೆ. ಈಚಿನ ವರ್ಷಗಳಲ್ಲಿ ಸೋಯಾಬೀನ್ ಬೆಳೆಯುವ ರೈತರ ಸಂಖ್ಯೆ ಅಧಿಕವಾಗಿದೆ. ಕಾರಣ, ರೈತರಿಗೆ ಯಾವುದೇ ಬೀಜದ ಕೊರತೆಯಾಗದಂತೆ ನೋಡಿಕೊಳ್ಳಬೇಕು’ ಎಂದು ಆಗ್ರಹಿಸಿದ್ದಾರೆ.