ಲಂಚ:ಬಿಜೆಪಿ-ಕೈ ಜಟಾಪಟಿ

ಬೆಂಗಳೂರು,ಮಾ.೪:ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರನ ಲಂಚ ಪ್ರಕರಣ ರಾಜಕೀಯ ಕೆಸರೆರಚಾಟಕ್ಕೂ ಕಾಣವಾಗಿದ್ದು, ಕಾಂಗ್ರೆಸ್ ಪಕ್ಷ ಈ ಪ್ರಕರಣವನ್ನು ಮುಂದಿಟ್ಟುಕೊಂಡು ಹೋರಾಟ ನಡೆಸಿ ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಿದೆ. ಇದಕ್ಕೆ ಪ್ರತಿಯಾಗಿ ಬಿಜೆಪಿ ಕಾಂಗ್ರೆಸ್ ಕಾಲದಲ್ಲಿನ ಹಗರಣಗಳನ್ನು ಪ್ರಸ್ತಾಪಿಸಿ ಕಾಂಗ್ರೆಸ್‌ಗೆ ತಿರುಗೇಟು ನೀಡಿದೆ. ಇದೆಲ್ಲದರ ನಡುವೆ ಕೆಎಸ್‌ಡಿಎಲ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ತಮ್ಮ ವಿರುದ್ಧ ಎಫ್‌ಐಆರ್ ದಾಖಲಾಗುತ್ತಿದ್ದಂತೆಯೇ ನಾಪತ್ತೆಯಾಗಿದ್ದು, ಅವರ ಪತ್ತೆಗೆ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆಯನ್ನು ಚುರುಕುಗೊಳಸಿದ್ದಾರೆ.ಈ ಲಂಚ ಪ್ರಕರಣದಲ್ಲಿ ಶಾಸಕರು ಮೊದಲ ಆರೋಪಿಯಾಗಿದ್ದು, ಅವರನ್ನು ವಿಚಾರಣೆಗೊಳಪಡಿಸಲು ಲೋಕಾಯುಕ್ತ ಪೊಲೀಸರು ಮುಂದಾಗಿದ್ದು, ಶಾಸಕರ ಪತ್ತೆ ಕಾರ್ಯವನ್ನು ನಡೆಸಿದ್ದಾರೆ.ಈ ಲಂಚ ಪ್ರಕರಣವನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಪಕ್ಷ ಇಂದು ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಿ ಮುಖ್ಯಮಂತ್ರಿಗಳ ರೇಸ್‌ಕೋರ್ಸ್ ಮನೆ ಮುತ್ತಿಗೆ ಹೋರಾಟ ನಡೆಸಿದ್ದು, ಮುಖ್ಯಮಂತ್ರಿಗಳ ನಿವಾಸವನ್ನು ಮುತ್ತಿಗೆ ಹಾಕಲು ಹೊರಟ ಕಾಂಗ್ರೆಸ್ ನಾಯಕರನ್ನು ಪೊಲೀಸರು ವಶಕ್ಕೆ ಪಡೆದರು.ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್,ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಮಾಜಿ ಸಚಿವರಾದ ಕೆ.ಜೆ. ಜಾರ್ಜ್, ರಾಮಲಿಂಗಾರೆಡ್ಡಿ, ದಿನೇಶ್ ಗುಂಡೂರಾವ್, ಸಲೀಂ ಅಹ್ಮದ್, ಮಾಜಿ ಉಪ ಮೇಯರ್ ಬಿ.ಎಸ್. ಪುಟ್ಟರಾಜು, ಮುಖಂಡರಾದ ಉದಯಶಂಕರ್ ಸೇರಿದಂತೆ ಹಲವು ಮುಖಂಡರು ಈ ಮುತ್ತಿಗೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು, ಇವರೆಲ್ಲರನ್ನೂ ಪೊಲೀಸರು ವಶಕ್ಕೆ ಪಡೆದರು.

ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ಖಂಡಿಸಿ ರೇಸ್‌ಕೋರ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತು. ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ,ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ,ಕಾಂಗ್ರೆಸ್ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ, ಶಾಸಕ ದಿನೇಶ್ ಗುಂಡೂರಾವ್, ಪ್ರಧಾನ ಕಾರ್ಯದರ್ಶಿ ಎಂ.ಉದಯ್ ಶಂಕರ್,ಜಿಲ್ಲಾಧ್ಯಕ್ಷರುಗಳಾದ ಜಿ.ಶೇಖರ್,ಜಿ.ಕೃಷ್ಣಪ್ಪ,ರಾಜ್‌ಕುಮಾರ್ ಮತ್ತಿತರರು ಇದ್ದಾರೆ.

ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ದಾಖಲೆ ಸಮೇತ ಲೋಕಾಯುಕ್ತ ಬಲೆಗೆ ಬಿದ್ದಿದ್ದು, ಬಿಜೆಪಿ ಸರ್ಕಾರದ ಶೇ. ೪೦ ರಷ್ಟು ಕಮಿಷನ್ ದಂದೆ ಬಟಾಬಂiiಲಾಗಿದೆ. ಭ್ರಷ್ಟಾಚಾರದ ನೈತಿಕ ಹೊಣೆ ಹೊತ್ತು, ಮುಖ್ಯಮಂತ್ರಿಗಳು ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ನಾಯಕರು ಆಗ್ರಹಿಸಿದರು.
ತಿರುಗೇಟು
ಕಾಂಗ್ರೆಸ್‌ನ ಈ ಹೋರಾಟಗಳಿಗೆ ಬಿಜೆಪಿ ಕಾಂಗ್ರೆಸ್ ಕಾಲದ ಹಗರಣಗಳನ್ನು ಪ್ರಸ್ತಾಪಿಸಿ ಕಾಂಗ್ರೆಸ್ ನಾಯಕರು ತಮ್ಮ ಹಗರಣಗಳು ಬಯಲಾಗುತ್ತವೆ ಎಂಬ ಕಾರಣಕ್ಕೆ ಲೋಕಾಯುಕ್ತರ ಅಧಿಕಾರ ಮೊಟಕುಗೊಳಿಸಿ ಎಸಿಬಿ ರಚನೆ ಮಾಡಿದರು. ಕಾಂಗ್ರೆಸ್‌ನವರಿಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ. ಶಾಸಕ ಪುತ್ರನ ಲಂಚ ಪ್ರಕರಣ ಎರಡೂ ಪಕ್ಷಗಳ ನಡುವೆ ಜಟಾಪಟಿಗೆ ಕಾರಣವಾಗಿದೆ.
ಶಾಸಕರ ಶೋಧ
ಈ ಲಂಚ ಪ್ರಕರಣದಲ್ಲಿ ಆರೋಪಿಯಾಗಿರುವ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪತ್ತೆಗೆ ಲೋಕಾಯುಕ್ತ ಪೊಲೀಸರು ಶೋಧ ನಡೆಸಿದ್ದು, ಶಾಸಕರನ್ನು ಪತ್ತೆ ಹಚ್ಚಿ ಅವರನ್ನು ವಿಚಾರಣೆಗೆ ಒಳಪಡಿಸಲಾಗುವುದು ಎಂದು ಲೋಕಾಯುಕ್ತ ಮೂಲಗಳು ಹೇಳಿವೆ.