ಲಕ್ಷಣ ರಹಿತ ಸೋಂಕಿತರನ್ನು ಕೋವಿಡ್ ಆರೈಕೆ ಕೇಂದ್ರಕ್ಕೆ ದಾಖಲಿಸಿ: ಜಿಲ್ಲಾಧಿಕಾರಿ

ಬೆಳಗಾವಿ, ಮೇ 27: ಜಿಲ್ಲೆಯಾದ್ಯಂತ ಗ್ರಾಮಗಳಲ್ಲಿಯೇ ರ್ಯಾಪಿಡ್ ಆಯಂಟಿಜನ್ ಟೆಸ್ಟ್ ನಡೆಸಲಾಗುತ್ತಿದ್ದು, ಈ ಸಂದರ್ಭದಲ್ಲಿ ಪತ್ತೆಯಾಗುವ ಲಕ್ಷಣರಹಿತ ಸೋಂಕಿತರನ್ನು ಕೂಡಲೇ ಕೋವಿಡ್ ಆರೈಕೆ ಕೇಂದ್ರಗಳಿಗೆ ದಾಖಲಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಖಾನಾಪುರ ತಾಲ್ಲೂಕಿಗೆ ಭೇಟಿ ನೀಡಿದ ಅವರು ಕೋವಿಡ್ ಆರೈಕೆ ಕೇಂದ್ರ ಹಾಗೂ ತಾಲ್ಲೂಕು ಆಸ್ಪತ್ರೆಗೆ ಭೇಟಿ ನೀಡಿದ ಬಳಿಕ ತಹಶಿಲ್ದಾರ ಕಚೇರಿಯಲ್ಲಿ ಸಭೆ ನಡೆಸಿದರು.
ಒಬ್ಬರಿಂದ ಒಬ್ಬರಿಗೆ ಸೋಂಕು ವ್ಯಾಪಕವಾಗಿ ಹರಡುತ್ತಿರುವುದರಿಂದ ಲಕ್ಷಣರಹಿತ ಸೋಂಕಿತರನ್ನು ಕೂಡ ಕೋವಿಡ್ ಆರೈಕೆ ಕೇಂದ್ರಗಳಲ್ಲಿ ದಾಖಲಿಸಿ ಸರಕಾರದ ಮಾರ್ಗಸೂಚಿ ಪ್ರಕಾರ ಔಷಧೋಪಚಾರ ಒದಗಿಸಬೇಕು.
ಸೋಂಕು ದೃಢಪಟ್ಟ ತಕ್ಷಣವೇ ಅಂತಹ ವ್ಯಕ್ತಿಗಳನ್ನು ಆರೈಕೆ ಕೇಂದ್ರಕ್ಕೆ ದಾಖಲಿಸುವುದರ ಜತೆಗೆ ಅವರ ಪ್ರಥಮ ಮತ್ತು ದ್ವಿತೀಯ ಸಂಪರ್ಕಿತರನ್ನು ಕೂಡ ಗುರುತಿಸಬೇಕು. ಸೋಂಕಿನ ಲಕ್ಷಣಗಳಿದ್ದರೆ ಅವರನ್ನು ಕೂಡ ಕಡ್ಡಾಯವಾಗಿ ಪರೀಕ್ಷೆಗೆ ಒಳಪಡಿಸಬೇಕು ಎಂದು ತಿಳಿಸಿದರು.

ಲಸಿಕಾಕರಣಕ್ಕೆ ಆದ್ಯತೆ ನೀಡಲು ಸೂಚನೆ
ಸರಕಾರವು ಇತ್ತೀಚೆಗೆ ನೀಡಿರುವ ಆದ್ಯತಾ ಪಟ್ಟಿಯಲ್ಲಿ ಇರುವವರಿಗೆ ತಪ್ಪದೇ ಲಸಿಕೆ ಹಾಕಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ನಿರ್ದೇಶನ ನೀಡಿದರು.
ಪೆಟ್ರೋಲ್ ಬಂಕ್ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವರು, ಮನೆ ಮನೆಗೆ ಎಲ್.ಪಿ.ಜಿ. ಸಿಲಿಂಡರ್‍ಗಳನ್ನು ವಿತರಿಸುವವರು, ವಿಕಲಚೇತನರು, ಅಂಚೆ ನೌಕರರು ಸೇರಿದಂತೆ ಒಟ್ಟಾರೆ ಇಪ್ಪತ್ತು ಬಗೆಯ ಜನರನ್ನು ಆದ್ಯತಾ ಪಟ್ಟಿಯಲ್ಲಿ ಸರಕಾರ ಸೇರ್ಪಡೆಗೊಳಿಸಿರುತ್ತದೆ. ಇಂತಹವರನ್ನು ಗುರುತಿಸಿ ಸರಕಾರದ ಮಾರ್ಗಸೂಚಿ ಪ್ರಕಾರ ತಕ್ಷಣವೇ ಲಸಿಕೆ ನೀಡಬೇಕು ಎಂದು ಹೇಳಿದರು.
ಕೋವಿಡ್ ನಿಯಂತ್ರಣ ಹಾಗೂ ಚಿಕಿತ್ಸೆಗೆ ಸಂಬಂಧಿಸಿದಂತೆ ತಾಲ್ಲೂಕಿನಲ್ಲಿ ತೆಗೆದುಕೊಳ್ಳಲಾಗಿರುವ ಕ್ರಮಗಳ ಕುರಿತು ಖಾನಾಪುರ ತಹಶಿಲ್ದಾರ ರೇಷ್ಮಾ ತಾಳಿಕೋಟಿ ಅವರು ಜಿಲ್ಲಾಧಿಕಾರಿಗಳಿಗೆ ಮಾಹಿತಿಯನ್ನು ನೀಡಿದರು.
ತಾಲ್ಲೂಕು ಆರೋಗ್ಯಾಧಿಕಾರಿಗಳು, ಸ್ಥಳೀಯ ಸಂಸ್ಥೆಯ ಮುಖ್ಯಾಧಿಕಾರಿ, ಸ್ಥಳೀಯ ಪೆÇಲೀಸ್ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಇದಕ್ಕೂ ಮುಂಚೆ ಜಿಲ್ಲಾಧಿಕಾರಿ ಹಿರೇಮಠ ಅವರು ತಾಲ್ಲೂಕು ಆಸ್ಪತ್ರೆ ಹಾಗೂ ಕೋವಿಡ್ ಆರೈಕೆ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.