
ಅಥಣಿ : ಮೇ.16:ಉತ್ತರ ಕರ್ನಾಟಕದ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ ಹಾಗೂ ಅಥಣಿ ಮತಕ್ಷೇತ್ರದಿಂದ ನಾಲ್ಕನೇ ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಲಕ್ಷ್ಮಣ ಸವದಿಯವರಿಗೆ ಮತ್ತು ಬಾಗಲಕೋಟ ಜಿಲ್ಲೆಯ ಮುಧೋಳ ಮತಕ್ಷೇತ್ರದಿಂದ ಮತ್ತೆ ಶಾಸಕರಾಗಿ ಆಯ್ಕೆಯಾಗಿರುವ ಮಾದಿಗ ಸಮುದಾಯದ ಹಿರಿಯ ನಾಯಕರು ಹಾಗೂ ಮಾಜಿ ಸಚಿವರಾದ ಆರ್ ಬಿ ತಿಮ್ಮಪೂರ ಅವರಿಗೆ ಸಾಮಾಜಿಕ ನ್ಯಾಯದಡಿಯಲ್ಲಿ ಡಿಸಿಎಂ ಸ್ಥಾನ ನೀಡಬೇಕೆಂದು ಅಥಣಿ ತಾಲೂಕ ಮಾದಿಗ ಮೀಸಲಾತಿ ಹೋರಾಟ ಸಮಿತಿಯ ಅಧ್ಯಕ್ಷ ಹಣಮಂತ ಅರ್ಧಾವೂರ ಕಾಂಗ್ರೆಸ್ ಪಕ್ಷದ ಹೈಕಮಾಂಡನ್ನು ಒತ್ತಾಯಿಸಿದರು.
ಅವರು ಅಥಣಿ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಅಥಣಿ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಅತ್ಯಧಿಕ ಮತಗಳ ಅಂತರದಿಂದ ಆಯ್ಕೆಯಾಗಿರುವ ಲಕ್ಷ್ಮಣ ಸವದಿ ಅವರು ಉತ್ತರ ಕರ್ನಾಟಕದ ಪ್ರಭಾವಿ ನಾಯಕರಲ್ಲಿ ಒಬ್ಬರಾಗಿದ್ದಾರೆ. ಸಚಿವರಾಗಿ ರಾಜ್ಯದ ಉಪಮುಖ್ಯಮಂತ್ರಿಗಳಾಗಿ ಕಾರ್ಯನಿರ್ವಹಿಸಿದ ಅನುಭವವಿದೆ. ಕಾಂಗ್ರೆಸ್ ಪಕ್ಷವನ್ನು ಸೇರುವ ಮೂಲಕ ಜಿಲ್ಲೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಿಸುವಲ್ಲಿ ಅವರ ಪಾತ್ರ ಕೂಡಾ ಮಹತ್ತರವಾಗಿದೆ. ಅದೇ ರೀತಿ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ, ಪಕ್ಷ ಸಂಘಟನೆ ಜೊತೆಗೆ ಜನಸೇವೆಗಳನ್ನು ಮಾಡುತ್ತಾ ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಮುಧೋಳ ಮತಕ್ಷೇತ್ರದಿಂದ ಸ್ಪರ್ಧಿಸಿ ಗೋವಿಂದ ಕಾರಜೋಳ ಅವರನ್ನು ಸೋಲಿಸುವ ಮೂಲಕ ವಿಜಯ ಪತಾಕೆ ಹಾರಿಸಿದ್ದಾರೆ. ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿ ಮತ್ತು ಸಮ್ಮಿಶ್ರ ಸರ್ಕಾರದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ ಮಾದಿಗ ಎಡಗೈ ಸಮುದಾಯದ ಪ್ರಭಾವಿ ನಾಯಕರಾಗಿರುವ ಆರ್ ಬಿ ತಿಮ್ಮಾಪೂರ್ ಅವರಿಗೆ ಸಾಮಾಜಿಕ ನ್ಯಾಯದಡಿ ಡಿಸಿಎಂ ಸ್ಥಾನ ನೀಡಬೇಕೆಂದು ಕಾಂಗ್ರೆಸ್ ಪಕ್ಷದ ಹೈಕಮಾಂಡಕ್ಕೆ ಒತ್ತಾಯಿಸಿದರು.
ಪುರಸಭೆಯ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ರಾವಸಾಬ ಐಹೊಳೆ, ಕರ್ನಾಟಕ ಪ್ರದೇಶ ಮಾದಿಗ ಸಂಘದ ಜಿಲ್ಲಾ ಅಧ್ಯಕ್ಷ ರಾಜೇಂದ್ರ ರಾಜoಗಳೆ ಮಾತನಾಡಿ ಕ್ಷೇತ್ರದಿಂದ ಆಯ್ಕೆಯಾದ ಲಕ್ಷ್ಮಣ ಸವದಿ ಹಾಗೂ ಮುಧೋಳ ಕ್ಷೇತ್ರದಿಂದ ಆಯ್ಕೆಯಾದ ಆರ್ ಬಿ ತಿಮ್ಮಾಪುರ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಕಾಂಗ್ರೆಸ್ ಪಕ್ಷದ ವರಿಷ್ಠರನ್ನು ಅಗ್ರಹಿಸಿದರು.
ಈ ಸಂದರ್ಭದಲ್ಲಿ ಮಾದಿಗ ಸಮುದಾಯದ ಮುಖಂಡರಾದ ಸಂಗಪ್ಪ ಮಾಯನಟ್ಟಿ, ಪ್ರಕಾಶ ಹೆಗ್ಗಣ್ಣನವರ, ಅನಿಲ ತಳವಾರ, ಕಾಸಪ್ಪ ಜಮಖಂಡಿ, ವಿಶ್ವನಾಥ ಗಡದೆ, ವೈಭವ ಐಹೊಳೆ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.