ಲಸಿಕೆ ಬರುವ ತನಕ ಶಾಲೆ ಆರಂಭ ಬೇಡ: ಗ್ರಾ.ಪಂ ಚುನಾವಣೆ ಸದ್ಯಕ್ಕೆ ಕೈಬಿಡಿ: ಸಿದ್ದು

ಚಿತ್ರದುರ್ಗ.ನ.5- ರಾಜ್ಯದಲ್ಲಿ ಕೊರೋನಾ ಸೋಂಕಿಗೆ ಲಸಿಕೆ ಬರುವ ತನಕ ಶಾಲಾ-ಕಾಲೇಜುಗಳನ್ನು ತೆರೆಯುವುದಾಗಲಿ ಅಥವಾ ಗ್ರಾಮ ಪಂಚಾಯಿತಿ ಚುನಾವಣೆ ನಡೆಸುವುದನ್ನು ಸರ್ಕಾರ ಕೈಬಿಡಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಸೋಂಕು ಇರುವ ಸಂದರ್ಭದಲ್ಲಿ ಶಾಲೆಗಳನ್ನು ತೆರೆಯುವುದು ಒಳ್ಳೆಯ ಬೆಳವಣಿಗೆಯಲ್ಲ, 1 ವರ್ಷ ಶಾಲಾ ಮಕ್ಕಳನ್ನು ಪಾಸ್ ಮಾಡಿದರೆ ಯಾವುದೇ ಸಮಸ್ಯೆಯಾಗುವುದಿಲ್ಲ. ಸರ್ಕಾರ ಈ ಬಗ್ಗೆ ಗಂಭೀರವಾಗಿ ಚಿಂತನೆ ನಡೆಸಲಿ ಎಂದು ಹೇಳಿದ್ದಾರೆ.

ರಾಜ್ಯ ಸರ್ಕಾರ ಈಗಾಗಲೇ ಗ್ರಾಮ ಪಂಚಾಯಿತಿ ಚುನಾವಣೆಯನ್ನು ಮುಂದೂಡಲು ನಿರ್ಧರಿಸಿದೆ. ಇದರ ಜೊತೆಗೆ ಲಸಿಕೆ ಬರುವ ತನಕ ಚುನಾವಣೆ ನಡೆಸುವುದು ಬೇಡ ಎನ್ನುವುದು ಕಾಂಗ್ರೆಸ್ ಪಕ್ಷದ ಉದ್ದೇಶ ಎಂದು ಹೇಳಿದರು.

ಕೊರೋನಾ ಸೋಂಕಿನ ಸಮಯದಲ್ಲಿ ವಿದ್ಯುತ್ ದರ ಹೆಚ್ಚಳ ಮಾಡಿರುವ ಕ್ರಮ ಸರಿಯಲ್ಲ. ರಾಜ್ಯದಲ್ಲಿ ಹಣಕಾಸು ಪರಿಸ್ಥಿತಿ ಸಂಪೂರ್ಣವಾಗಿ ಹದಗೆಟ್ಟಿದೆ. ಅಭಿವೃದ್ಧಿ ಕಾರ್ಯಗಳಿಗೆ ಹಣಕಾಸು ನೀಡುತ್ತಿಲ್ಲ ಎಂದರು.

ಬಿಹಾರ ವಿಧಾನಸಭೆ ಚುನಾವಣೆ ಬಳಿಕ ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬದಲಾಗಲಿದ್ದಾರೆ ಎಂದು ಹೇಳಿದರು.

ರಾಜಕೀಯ ಪ್ರೇರಿತ:

ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ಬಂಧಿಸಿರುವುದು ರಾಜಕೀಯ ಪ್ರೇರಿತ ಎಂದು ಸಿದ್ದ ರಾಮಯ್ಯ ಹೇಳಿದ್ದಾರೆ‌

ಮುಗಿದು ಹೋಗಿದ್ದ ಪ್ರಕರಣವನ್ನು ಮರು ತನಿಖೆ ಮಾಡುವ ಮೂಲಕ ಕೇಂದ್ರ , ರಾಜ್ಯ ಸರ್ಕಾರ ದ್ವೇಷದ ರಾಜಕೀಯ ಮಾಡುತ್ತಿದೆ ಎಂದು ದೂರಿದ್ದಾರೆ.

ವಿನಯ್ ಕುಲಕರ್ಣಿ ಜೊತೆ ಮಾತನಾಡಿದ್ದೇನೆ ಯಾವುದೇ ತಪ್ಪು ಮಾಡಿಲ್ಲ ಎಂದು ಹೇಳಿದ್ದಾರೆ ಎಂದು ತಿಳಿಸಿದ್ದಾರೆ.