ಲಾಕ್ ಡೌನ್ ವಿಸ್ತರಣೆ ಜೂ 5 ಮಹತ್ವದ ಸಭೆ

ಹಾವೇರಿ, ಜೂ 2-ರಾಜ್ಯದಲ್ಲಿ ಜಾರಿಯಲ್ಲಿರುವ ಲಾಕ್ಡೌನ್ ವಿಸ್ತರಣೆಯ ಕುರಿತು ಜೂನ್ 5 ರಂದು ನಿಗದಿಯಾಗಿರುವ ಮಹತ್ವದ ಸಭೆಯಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.
ಜಿಲ್ಲೆಯ ರಟ್ಟಿಹಳ್ಳಿ ಗ್ರಾಮದ ಸರ್ಕಾರಿ ಆಸ್ಪತ್ರೆಗೆ ಇಂದು ಭೇಟಿ ನೀಡಿ ಪರಿಶೀಲನೆ‌ ನಡೆಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಜೂ.4ರಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಬೆಳಗಾವಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ವಿವಿಧ ಜಿಲ್ಲೆಗಳಲ್ಲಿರುವ ಪರಿಸ್ಥಿತಿಯನ್ನು ಅವರು ಅರಿತುಕೊಳ್ಳುತ್ತಾರೆ. ಕೆಲ ಜಿಲ್ಲೆಗಳಲ್ಲಿ ಕೋವಿಡ್ ಸೋಂಕಿತರ ಪ್ರಮಾಣ ಕಡಿಮೆ ಇದೆ.
ಕೆಲ ಜಿಲ್ಲೆಗಳಲ್ಲಿ ಕಡಿಮೆ ಆಗಬೇಕಾಗಿದೆ. ಈ ಎಲ್ಲ ಅಂಶಗಳನ್ನು ಗಮನಿಸಿ ತಜ್ಞರು ನೀಡುವ ವರದಿಯನ್ನು ವಿಶ್ಲೇಷಣೆ ಮಾಡಿ ರಾಜ್ಯದಲ್ಲಿ ಲಾಕ್ಡೌನ್ ಯಾವ ರೀತಿ ಇರಬೇಕು ಮತ್ತು ಹೇಗೆ ಮುಂದುವರಿಸಬೇಕು ಎಂಬುದರ ಕುರಿತು ಆ ಸಭೆಯಲ್ಲಿ ಮುಖ್ಯಮಂತ್ರಿಗಳು ನಿರ್ಧರಿಸಲಿದ್ದಾರೆ ಎಂದು ಅವರು ನುಡಿದರು.
ಕೋವಿಡ್ ೩ ಅಲೆಗೆ ರಾಜ್ಯ ಸರ್ಕಾರ ತನ್ನ ಶಕ್ತಿ ಮೀರಿ ಸಿದ್ಧತೆಗಳನ್ನು ಮಾಡಿದೆ. ಈಗಾಗಲೇ ರಾಜ್ಯದಲ್ಲಿ 24 ಸಾವಿರಕ್ಕಿಂತ ಹೆಚ್ಚು ಆಕ್ಸಿಜನ್ ಬೆಡ್ ಗಳನ್ನು ಸಿದ್ಧಪಡಿಸಲಾಗಿದೆ. ವೆಂಟಲೇಲೆಟರ್ ಗಳ ಸಂಖ್ಯೆಯನ್ನು ಶೇ.100ರಷ್ಟು ಹೆಚ್ಚು ಮಾಡಲಾಗಿದೆ. ಪ್ರತಿ ತಾಲೂಕು ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಆಕ್ಸಿಜನ್ ಜನರೇಟರ್ ಮಾಡಬೇಕೆಂದು ತೀರ್ಮಾನಿಸಲಾಗಿದೆ. ಆಕ್ಸಿಜನ್ ಜನರೇಟರ್ ಇದ್ರೆ ಅಪಾಯದಲ್ಲಿರುವ ಸೋಂಕಿತರಿಗೆ ಅನುಕೂಲ ಆಗುತ್ತದೆ ಎಂದು ಅವರು ಹೇಳಿದರು.