ಲೋಕಸಭಾ ಚುನಾವಣೆ: ಡಿಸಿ ಅಧ್ಯಕ್ಷತೆಯಲ್ಲಿ ವಿಡಿಯೋ ಸಂವಾದ


ಸಂಜೆವಾಣಿ ವಾರ್ತೆ
ಹೊಸಪೇಟೆ ಮಾ30: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ ಗುರುವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚುನಾವಣೆ ಸಿದ್ಧತೆಗಳ ಬಗ್ಗೆ ಪರಿಶೀಲಿಸಿದರು.
ಜಿಲ್ಲಾಡಳಿತ ಭವನದಲ್ಲಿ ನಡೆದ ವಿಡಿಯೋ ಸಂವಾದದಲ್ಲಿ ಮಾತನಾಡಿದ ಅವರು, ಚುನಾವಣಾ ಆಯೋಗವು ಅಗತ್ಯ ಸೇವೆಗಳ ಇಲಾಖೆಗಳು ಮತ್ತು ವಲಯಗಳಾದ ಪೊಲೀಸ್, ಕೆಎಸ್‍ಆರ್‍ಟಿಸಿ, ರೈಲ್ವೆ, ಆರೋಗ್ಯ ಇಲಾಖೆ, ಆಲ್ ಇಂಡಿಯಾ ರೇಡಿಯೋ, ಅಗ್ನಿಶಾಮಕ, ಟ್ರಾಫಿಕ್ ಪೊಲೀಸ್, ಅಂಬ್ಯುಲನ್ಸ್ ಸೇವೆ ಸೇರಿದಂತೆ ವಿವಿಧ ಎವಿಇಎಸ್ ವಿಭಾಗಗಳಿಗೆ ಅಂಚೆ ಮತ ಚೀಟಿ ಮೂಲಕ ಮತದಾನ ಮಾಡಲು ಅವಕಾಶ ಕಲ್ಪಿಸಿದೆ. ಹೀಗಾಗಿ ಚುನಾವಣೆಯ ಕಾರ್ಯದಲ್ಲಿರುವ ಸರ್ಕಾರಿ ಹಾಗೂ ಖಾಸಗಿ ವಲಯಗಳ ಅಧಿಕಾರಿಗಳು ಮತ್ತು ಇತರೆ ಅಧಿಕಾರಿಗಳು ಮತ್ತು ಸಿಬ್ಬಂದಿಯು ನಿಯಮಾನುಸಾರ ನಮೂನೆಗಳನ್ನು ಭರ್ತಿ ಮಾಡಿ ಸಲ್ಲಿಸಿ ಅಂಚೆ ಮತಪತ್ರ ಪಡೆದು ಮತದಾನ ಮಾಡಬೇಕು. ಅಂಚೆ ಮತಪತ್ರ ನೋಡಲ್ ಅಧಿಕಾರಿಗೆ ಸಲ್ಲಿಸುವ ಕಾರ್ಯವನ್ನು ಅತೀ ತುರ್ತಾಗಿ ಮಾಡಲು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ಚುನಾವಣೆ ಹಿನ್ನೆಲೆಯಲ್ಲಿ ಈಗಾಗಲೇ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಎಇಓ, ಎಟಿ, ಎಫ್‍ಎಸ್‍ಟಿ, ವಿಎಸ್‍ಟಿ, ವಿವಿಟಿ ತಂಡಗಳನ್ನು ರಚಿಸಿ ಆದೇಶಿಸಲಾಗಿದ್ದು ಈ ಎಲ್ಲ ತಂಡಗಳಲ್ಲಿನ ಅಧಿಕಾರಿಗಳು ಮುತುವರ್ಜಿವಹಿಸಿ ಕೆಲಸ ನಿರ್ವಹಿಸಬೇಕು. ಈಗಾಗಲೇ ಆರಂಭವಾಗಿರುವ ಕಂಟ್ರೊಲ್ ರೂಮ್, ದೂರು ಮೇಲ್ವಿಚಾರಣಾ ಕೇಂದ್ರ, ಮಾಧ್ಯಮ ಸೇರಿದಂತೆ ವಿವಿಧ ಕೇಂದ್ರಗಳು ಸರಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು. ಚುನಾವಣೆ ಹಿನ್ನೆಲೆಯಲ್ಲಿ ಬೇರೆ ಬೇರೆ ಅಂಶಗಳ ಕುರಿತು ಕೈಗೊಂಡ ಕ್ರಮದ ಕುರಿತು ಅನುಪಾಲನಾ ವರದಿಗಳನ್ನು ನಿಗದಿತ ನಮೂನೆಯಲ್ಲಿ ನಿಗದಿಪಡಿಸಿದ ಅವಧಿಯೊಳಗೆ ಸಲ್ಲಿಸಲು ವಿವಿಧ ಸಮಿತಿಗಳ ನೋಡಲ್ ಅಧಿಕಾರಿಗಳು ಮುತುವರ್ಜಿ ವಹಿಸಬೇಕು  ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾರ್ಚ 16ರಿಂದಲೇ ನೀತಿ ಸಂಹಿತೆ ಜಾರಿಯಾಗಿದ್ದು, ಯಾವುದೇ ಕಡೆಗಳಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆಗಳು ನಡೆಯದಂತೆ ಮುನ್ನೆಚ್ಚರಿಕೆ ಮತ್ತು ತಿಳಿವಳಿಕೆ ನೀಡಬೇಕು. ಸಭೆ-ಸಮಾರಂಭಗಳಿಗೆ ಅನುಮತಿ ಕೋರಿ ಸಲ್ಲಿಕೆಯಾಗುವ ಅರ್ಜಿಗಳಿಗೆ ಕಡ್ಡಾಯವಾಗಿ ಷರತ್ತುಗಳನ್ನು ವಿದಿಸಿ ಅನುಮತಿ ಪತ್ರ ನೀಡಬೇಕು ಎಂದು ಜಿಲ್ಲಾಧಿಕಾರಿಗಳು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಲೋಕಸಭಾ ಚುನಾವಣೆ 2024ರ ಸಂಬಂಧ ಮಾಧ್ಯಮಗಳಲ್ಲಿ ಪ್ರಕಟವಾಗುವ ಕಾಸಿಗಾಗಿ ಸುದ್ದಿಗಳ ಮೇಲೆ ವಿಶೇಷ ನಿಗಾವಹಿಸಬೇಕು. ಜಿಲ್ಲಾಮಟ್ಟದ ಮಾಧ್ಯಮ ಪ್ರಮಾಣೀಕರಣ ಮತ್ತು ಉಸ್ತುವಾರಿ ಸಮಿತಿಗಳು ಪೇಡ್ ನ್ಯೂಸ್ ಸಾಪ್ತಾಹಿಕ ವರದಿಯನ್ನು ನಿಗದಿತ ಅವಧಿಯೊಳಗೆ ಸಲ್ಲಿಸಬೇಕು ಎಂದು ಸೂಚಿಸಿದರು.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಈಗಾಗಲೇ ಜಿಲ್ಲೆಯ ವಿವಿಧೆಡೆ ಸ್ಥಾಪಿಸಿರುವ ಚೆಕ್‍ಪೋಸ್ಟಗಳಲ್ಲಿ ವಾಹನಗಳ ತಪಾಸಣಾ ಕ್ರಮವನ್ನು ಬಿಗಿಗೊಳಿಸಬೇಕು. 50 ಸಾವಿರ ಅಥವಾ 50 ಸಾವಿರ ರೂಪಾಯಿಗಳಿಗು ಅಧಿಕ ಹಣ ಒಯ್ಯುವವರು ಸಮರ್ಪಕ ದಾಖಲೆ ಹೊಂದಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು. ಧರಿಸಿದ ಆಭರಣ ಹೊರತುಪಡಿಸಿ ದೊರೆಯುವ ಅಧಿಕ ಬೆಳೆಬಾಳುವ ಬಂಗಾರದ ಆಭರಣಗಳನ್ನು ವಶಪಡಿಸಿಕೊಳ್ಳಲು ಕ್ರಮ ವಹಿಸಬೇಕು ಎಂದು ಸೂಚನೆ ನೀಡಿದರು.
ವಿಡಿಯೋ ಸಂವಾದದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಅನುರಾಧ ಜಿ., ವಿವಿಧ ತಾಲೂಕಿನ ತಹಸೀಲ್ದಾರರು ಮತ್ತು ವಿವಿಧ ಸಮಿತಿಗಳ ನೋಡಲ್ ಅಧಿಕಾರಿಗಳು ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.