ಲೋಪರಹಿತ ಮತದಾರರ ಪಟ್ಟಿ ಸಿದ್ಧಪಡಿಸಿ: ಅತೀಕ್ ಸೂಚನೆ

ಬೆಳಗಾವಿ, ಡಿ.18: ಜಿಲ್ಲೆಯಲ್ಲಿ ಯುವ ಮತದಾರರ ನೋಂದಣಿ ಹೆಚ್ಚಿಸುವುದರ ಜತೆಗೆ ಲೋಪರಹಿತ ಮತದಾರರ ಪಟ್ಟಿ ಸಿದ್ಧಪಡಿಸಲು ಮತದಾರರ ಪಟ್ಟಿಯ ಪರಿಷ್ಕರಣೆ ಕಾರ್ಯವನ್ನು ಮಾರ್ಗಸೂಚಿ ಪ್ರಕಾರ ಸಮರ್ಪಕವಾಗಿ ನಡೆಸಬೇಕು ಎಂದು ಜಿಲ್ಲೆಯ ಮತದಾರರ ಪಟ್ಟಿಯ ವೀಕ್ಷಕ(ರೋಲ್ ಅಬ್ಸರ್ವರ್)ರಾದ ಎಲ್.ಕೆ.ಅತೀಕ್ ಸೂಚನೆ ನೀಡಿದರು.
ಜಿಲ್ಲೆಯ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ರಾಜ್ಯದಲ್ಲಿ ಶೇ.71 ರಷ್ಟು ಜನರ ಹೆಸರು ಮತದಾರರ ಪಟ್ಟಿಯಲ್ಲಿದೆ. ಆದರೆ ಜಿಲ್ಲೆಯ ಮತದಾರರ ಪಟ್ಟಿಯಲ್ಲಿ ಸದ್ಯಕ್ಕೆ ಶೇ.65 ರಷ್ಟು ಜನರ ಹೆಸರು ನೋಂದಣಿ ಇರುವುದರಿಂದ ಇದನ್ನು ಇನ್ನಷ್ಟು ಹೆಚ್ಚಿಸಲು ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅತೀಕ್ ನಿರ್ದೇಶನ ನೀಡಿದರು.

ಇದೇ ರೀತಿ ಲಿಂಗಾನುಪಾತ ದ ಪ್ರಕಾರ ಮತದಾರರ ಸಂಖ್ಯೆ ಇರುವಂತೆ ನೋಡಿಕೊಳ್ಳಬೇಕು. ಮಹಿಳೆಯರು, ಯುವಜನರು ಮತ್ತು ವಿಕಲಚೇತನರು ಹೆಚ್ಚಿನ ಸಂಖ್ಯೆಯಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸುವಂತೆ ಕ್ರಮ ಕೈಗೊಳ್ಳಬೇಕು ಎಂದರು.

ಆಕ್ಷೇಪಣೆಗಳ ವಿಲೇವಾರಿಗೆ ನಿರ್ದೇಶನ:

ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ವೀಕರಿಸಲಾಗುವ ಆಕ್ಷೇಪಣೆಗಳನ್ನು ನಿಯಮಾವಳಿ ಪ್ರಕಾರ ವಿಲೇವಾರಿ ಮಾಡಬೇಕು.ಹೆಸರು ತೆಗೆದುಹಾಕುವ ಸಂದರ್ಭದಲ್ಲಿ ಮಾರ್ಗಸೂಚಿ ಪ್ರಕಾರ ಸೂಕ್ತ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು.

1-1-2021 ಕ್ಕೆ ಅನ್ವಯಿಸುವಂತೆ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ನಡೆಯುತ್ತಿದೆ. ಮತ ಪಟ್ಟಿಯ ಲೋಪದೋಷಗಳನ್ನು ಸರಿಪಡಿಸಲು ಅವಕಾಶಗಳನ್ನು ಒದಗಿಸಲಾಗಿದೆ. ತಿದ್ದುಪಡಿ, ಸೇರ್ಪಡೆ, ಡಿಲೀಟ್ ಗೆ ಅವಕಾಶ ನೀಡಲಾಗಿದೆ.
ಜಿಲ್ಲೆಯಲ್ಲಿ ಇರುವ 4434 ಮತಗಟ್ಟೆಗಳಿಗೆ ಬೂತ್ ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಉಪಸ್ಥಿತರಿದ್ದು, ಪರಿಷ್ಕರಣೆ ಕೆಲಸ ಸರಿಯಾಗಿ ನಿರ್ವಹಿಸಬೇಕು. ಉನ್ನತ ಮಟ್ಟದ ಅಧಿಕಾರಿಗಳು ಇದರ ಮೇಲೆ ನಿಗಾ ವಹಿಸಬೇಕು ಎಂದು ಅತೀಕ್ ನಿರ್ದೇಶನ ನೀಡಿದರು.

ಯುವ ಮತದಾರರ ನೋಂದಣಿಗೆ ಆದ್ಯತೆ:

ಹದಿನೆಂಟು ವರ್ಷಗಳನ್ನು ಪೂರ್ಣಗೊಳಿಸಿದ ಯುವಕರ ಹೆಸರುಗಳನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಳಿಸಲು ಆದ್ಯತೆ ನೀಡಬೇಕು. ಇದಕ್ಕೆ ಹೆಚ್ಚಿನ ಪ್ರಚಾರ ನೀಡುವ ಮೂಲಕ ಯುವ ಸಮುದಾಯ ಹೆಸರು ನೋಂದಣಿಗೆ ಮುಂದಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಅತೀಕ್ ಸಲಹೆ ನೀಡಿದರು.
ಖುದ್ದಾಗಿ ಭೇಟಿ ನೀಡಿ ಪರಿಶೀಲನೆ:

ವಿಶೇಷ ಪರಿಷ್ಕರಣೆ ಬಳಿಕವೂ ಮತದಾರರ ಪಟ್ಟಿಯ ನಿರಂತರ ಪರಿಷ್ಕರಣೆ ಮುಂದುವರಿಯಲಿದೆ ಎಂದು ಜಿಲ್ಲಾಧಿಕಾರಿ ಹಿರೇಮಠ ತಿಳಿಸಿದರು.
ಕೆಲವು ಮತಗಟ್ಟೆಗಳಿಗೆ ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಲಾಗಿದೆ. ಆದಾಗ್ಯೂ ಎಲ್ಲಿಯಾದರೂ ಸಮಸ್ಯೆ ಕಂಡುಬಂದರೆ ಸರಿಪಡಿಸಲಾಗುವುದು ಎಂದು ಭರವಸೆ ನೀಡಿದರು.
ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದಂತೆ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಲು ಸಹಾಯವಾಣಿ ಕೇಂದ್ರ(ಕಂಟ್ರೋಲ್ ರೂಮ್) ಕಾರ್ಯನಿರ್ವಹಿಸುತ್ತಿದೆ ಎಂದು ಜಿಲ್ಲಾಧಿಕಾರಿ ವಿವರಿಸಿದರು.

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್ ಎಚ್.ವಿ., ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಚಿಕ್ಕೋಡಿ ಉಪ ವಿಭಾಗಾಧಿಕಾರಿಗಳಾದ ಯುಕೇಶ್ ಕುಮಾರ್, ಮಹಾನಗರ ಪಾಲಿಕೆಯ ಆಯುಕ್ತರಾದ ಜಗದೀಶ್ ಕೆ.ಎಚ್., ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಮತ್ತಿತರರು ಉಪಸ್ಥಿತರಿದ್ದರು.