ವಸತಿ ನಿಲಯಗಳ ಸುಧಾರಣೆಗೆ ಜಿಲ್ಲಾಧಿಕಾರಿ ಕರೆ

ಕಲಬುರಗಿ,ಜು.11-ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರ ನೀಡುವುದರ ಮೂಲಕ ಸುರಕ್ಷತೆ, ನೈರ್ಮಲ್ಯ ಕಾಪಾಡುವ ದಿಶೆಯಲ್ಲಿ ವಸತಿ ನಿಲಯದ ಸಿಬ್ಬಂದಿಗಳು ಶ್ರಮಿಸಬೇಕೆಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಕರೆ ನೀಡಿದರು.
ನಗರದ ಎಸ್.ಎಂ.ಪಂಡಿತ ರಂಗಮಂದಿರದಲ್ಲಿ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ತಾಲ್ಲೂಕು ಅಧಿಕಾರಿಗಳು, ವಸತಿ ನಿಲಯಗಳ ಮೇಲ್ವಿಚಾರಕರು, ವಸತಿ ಶಾಲೆಯ ಪ್ರಾಂಶುಪಾಲರು ಹಾಗೂ ನಿಲಯ ಪಾಲಕರನ್ನೊಳಗೊಂಡ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ವಸತಿ ನಿಲಯ ಮತ್ತು ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಉತ್ತಮ ಆರೋಗ್ಯ, ಶುಚಿತ್ವ, ಓದಿಗೆ ಪೂರಕವಾದ ವಾತಾವರಣ ನಿರ್ಮಾಣ ಮಾಡಿ ಅವರ ಸವಾರ್ಂಗೀಣ ಅಭಿವೃದ್ಧಿಗೆ ಶ್ರಮಿಸಬೇಕೆಂದು ಹೇಳಿದರು.
ಮೆನು ಚಾರ್ಟ್ ಪ್ರಕಾರ ಮಕ್ಕಳಿಗೆ ಊಟ, ತಿಂಡಿ ನೀಡಬೇಕು, ಸಿಬ್ಬಂದಿಗಳು ಕೇಂದ್ರ ಸ್ಥಾನದಲ್ಲಿರಬೇಕು. ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ನೀಡಕೂಡದು.ಇಲಾಖೆಗಳ ಮಾರ್ಗ ಸೂಚಿಗಳು ಕಟ್ಟು ನಿಟ್ಟಾಗಿ ಅನುಸರಿಸಬೇಕು. ತಪ್ಪಿದ್ದಲ್ಲಿ ಕಾನೂನು ಕ್ರಮ ಜರುಗಿಸಲಾಗುವದು ಎಂದು ಎಚ್ಚರಿಕೆ ನೀಡಿದರು.
ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಪಿ.ಶುಭ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಮಹಮೂದ್, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಜಾವಿದ್ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಜಿಲ್ಲಾ ಸಮನ್ವಯಾಧಿಕಾರಿ ಶಿವರಾಂ ಚವ್ಹಾಣ ಮಾತನಾಡಿದರು.
ಸಭೆಯಲ್ಲಿ ಮೂರು ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳು, ವಸತಿ ಶಾಲೆಗಳ ಪ್ರಾಂಶುಪಾಲರು ಮತ್ತು ನಿಲಯ ಪಾಲಕರು ಭಾಗವಹಿಸಿದ್ದರು.