
ಬೀದರ್:ಮಾ.10: ರಾಜ್ಯ ಸರ್ಕಾರದ ವಸತಿ ಶಾಲೆಗಳು ಗ್ರಾಮೀಣ ಪ್ರದೇಶದ ಬಡ ಪ್ರತಿಭಾವಂತ ವಿದ್ಯಾರ್ಥಿಗಳ ಭವಿಷ್ಯ ಉಜ್ವಲಕ್ಕೆ ಶ್ರಮಿಸುತ್ತಿವೆ ಎಂದು ಕೇಂದ್ರದ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಹೇಳಿದರು.
ಬೀದರ್ ತಾಲ್ಲೂಕಿನ ಬಗದಲ್ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಆಯೋಜಿಸಿದ್ದ ಕಂಪ್ಯೂಟರ್ ಲ್ಯಾಬ್, ಸ್ಮಾರ್ಟ್ ಬೋರ್ಡ್, ಸ್ಮಾರ್ಟ್ ಕ್ಲಾಸ್, ಅರ್ಕಾಲಿಕ್ ಬೋರ್ಡ್ ಉದ್ಘಾಟನೆ ಹಾಗೂ ಶಾಲೆಯ 25ನೇ ವಾರ್ಷಿಕೋತ್ಸವದ ‘ಬೆಳ್ಳಿ ಬೆಳಕು’ ಸಮಾರಂಭದಲ್ಲಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಬಗದಲ್ ಶಾಲೆ ವಿಭಿನ್ನ ಚಟುವಟಿಕೆಗಳ ಮೂಲಕ ಗುಣಾತ್ಮಕ ಶಿಕ್ಷಣ ನೀಡುವಲ್ಲಿ ಮುಂಚೂಣಿಯಲ್ಲಿದೆ. ಶಾಲೆ ಬೆಳ್ಳಿ ಹಬ್ಬದ ಸಂಭ್ರಮದಲ್ಲಿರುವುದು ಸಂತಸ ಉಂಟು ಮಾಡಿದೆ. ಈ ಶಾಲೆಯಿಂದಾಗಿ ಸಾವಿರಾರು ವಿದ್ಯಾರ್ಥಿಗಳು ಭವಿಷ್ಯ ರೂಪಿಸಿಕೊಂಡಿದ್ದಾರೆ. ದೇಶ, ವಿದೇಶದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಹೇಳಿದರು.
ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ. ಶೈಲೇಂದ್ರ ಬೆಲ್ದಾಳೆ ಮಾತನಾಡಿ, ಬಗದಲ್ ಶಾಲೆ ಖಾಸಗಿ ಶಾಲೆಗಳನ್ನು ಮೀರಿ ಬೆಳೆದಿದೆ. ವಿಶಿಷ್ಟ ಛಾಪು ಮೂಡಿಸಿದೆ ಎಂದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಸದಾಶಿವ ಬಡಿಗೇರ, ಪ್ರಾಚಾರ್ಯ ಚನ್ನಬಸವ ಹೇಡೆ ಮಾತನಾಡಿದರು.