ವಾಣಿಜ್ಯ ಮಳಿಗೆಗಳಿಗೆ ಡಿಸಿ-ಎಸ್ಪಿ ಭೇಟಿ: ಪರಿಶೀಲನೆ

ತುಮಕೂರು, ಏ. ೨೦- ಕೋವಿಡ್-೧೯ ೨ನೇ ಅಲೆಯ ಸೋಂಕು ಹೆಚ್ಚಾಗುತ್ತಿದ್ದು, ಸರ್ಕಾರದ ಮಾರ್ಗಸೂಚಿಗಳ ಪಾಲನೆ ಕುರಿತು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಕೆ. ವಂಶಿಕೃಷ್ಣ ಅವರು ನಗರದ ಮಾಲ್‌ಗಳು, ಚಿತ್ರಮಂದಿರ, ವಾಣಿಜ್ಯ ಮಳಿಗೆಗಳು, ಹೋಟೆಲ್‌ಗಳಿಗೆ ಧಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಗರದ ಬಿ.ಹೆಚ್.ರಸ್ತೆಯಲ್ಲಿರುವ ಅಂಗಡಿ ಮಳಿಗೆಗಳು, ಮಾಲ್‌ಗಳು, ಗಾಯತ್ರಿ ಚಿತ್ರಮಂದಿರ, ಹೋಟೆಲ್‌ಗಳು, ಗಂಗೋತ್ರಿ ಬಡಾವಣೆ ಹಾಗೂ ಫುಡ್ ಸ್ಟ್ರೀಟ್‌ಗೆ ಈ ಅಧಿಕಾರಿಗಳು ಭೇಟಿ ನೀಡಿ ಕೋವಿಡ್ ಮಾರ್ಗಸೂಚಿಯನ್ನು ಪರಿಶೀಲಿಸಿ ಪಾಲನೆ ಮಾಡದವರಿಗೆ ಸ್ಥಳದಲ್ಲಿಯೇ ದಂಡ ವಿಧಿಸಿದರು.
ಕೆಲವರಿಗೆ ಮಾಸ್ಕ್ ಧರಿಸುವಿಕೆ, ಸಾಮಾಜಿಕ ಅಂತರ, ಸ್ಯಾನಿಟೈಸಿಂಗ್ ಕುರಿತು ಅರಿವು ಮೂಡಿಸಿ, ಕಡ್ಡಾಯವಾಗಿ ಪಾಲನೆ ಮಾಡುವಂತೆ ಸೂಚಿಸಿದರು.
ಸರ್ಕಾರ ಚಿತ್ರಮಂದಿರಗಳಿಗೆ ಶೇ. ೫೦ ರಷ್ಟು ಸೀಟುಗಳಿಗೆ ಅವಕಾಶ ನೀಡಿರುವ ಹಿನ್ನೆಲೆಯಲ್ಲಿ ನಗರದ ಗಾಯಿತ್ರಿ ಚಿತ್ರಮಂದಿರಕ್ಕೆ ಭೇಟಿ ನೀಡಿ ಮಾಸ್ಕ್ ಧರಿಸಿ ಸಿನಿಮಾ ವೀಕ್ಷಣೆ ಮಾಡುತ್ತಿದ್ದಾರಾ ಎಂದು ಪರಿಶೀಲನೆ ನಡೆಸಿದರು.
ನಂತರ ಮಾತನಾಡಿದ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು, ಜಿಲ್ಲೆಯಲ್ಲಿ ಸರ್ಕಾರದ ಮಾರ್ಗಸೂಚಿ ಅನ್ವಯ ಕೋವಿಡ್ ನಿಯಂತ್ರಣಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲಾಗುತ್ತಿದೆ. ತಹಶೀಲ್ದಾರ್ ನೇತೃತ್ವದಲ್ಲಿ ಕಾರ್ಯಪಡೆ ರಚನೆ ಮಾಡಿ ಎಲ್ಲಾ ತಾಲ್ಲೂಕು ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಅಗತ್ಯವಿದ್ದರೆ ಮಾತ್ರ ಮನೆಯಿಂದ ಹೊರಗಡೆ ಬರಬೇಕು. ವಯಸ್ಸಾದವರು ಆದಷ್ಟು ಮನೆಯಲ್ಲಿರಬೇಕು ಎಂದರು.
೭೦ಕ್ಕೂ ಹೆಚ್ಚು ಜನರು ಇರುವ ಮಾಲ್‌ಗಳಿಗೆ ಭೇಟಿ ನೀಡಿ ಕೋವೀಡ್ ಪರೀಕ್ಷೆ ಮಾಡಲಾಗುತ್ತಿದೆ. ಸರ್ಕಾರದ ಮಾರ್ಗಸೂಚಿ ಪಾಲಿಸುವಂತೆ ಮತ್ತು ಪಾಲಿಸದಿದ್ದರೆ ದಂಡ ವಿಧಿಸುವುದರ ಬಗ್ಗೆ ತಿಳಿಸಲಾಗಿದೆ ಎಂದರು.
ಈಗಾಗಲೇ ನೈಟ್ ಕರ್ಫ್ಯೂ ವಿಧಿಸಲಾಗಿದ್ದು, ಸರ್ಕಾರದ ಆದೇಶ ಬರುವವರೆಗೂ ಮುಂದುವರಿಯಲಿದೆ. ಸಾರ್ವಜನಿಕರು ಇದಕ್ಕೆ ಸಹಕಾರ ನೀಡಬೇಕು. ಕೋವಿಡ್-೧೯ ಮಾರ್ಗಸೂಚಿ ಪಾಲಿಸಬೇಕು. ಈಗಾಗಲೇ ಜಿಲ್ಲೆಗೆ ಕೋವಿಡ್ ಸಂಬಂಧ ಬೇಕಾಗಿರುವ ಎಲ್ಲಾ ಔಷಧಿಗಳನ್ನು ದಾಸ್ತಾನು ಮಾಡಲು ಸರ್ಕಾರದ ಸಮನ್ವಯ ಸಾಧಿಸಲಾಗಿದೆ. ಸಾರ್ವಜನಿಕರು ಕೋವಿಡ್ ಲಕ್ಷಣಗಳು ಕಂಡು ಬಂದಲ್ಲಿ ಸ್ವಯಂ ಪ್ರೇರಿತರಾಗಿ ಕೋವಿಡ್ ಪರೀಕ್ಷೆಗೊಳಪಡಬೇಕು. ಜಿಲ್ಲೆಯಲ್ಲಿ ೨ ಮೆಡಿಕಲ್ ಕಾಲೇಜುಗಳಲ್ಲಿ ಶೇ. ೫೦ ರಷ್ಟು ಹಾಸಿಗೆಗಳನ್ನು ಮೀಸಲಿರಿಸುವಂತೆ ವ್ಯವಸ್ಥೆ ಮಾಡಲಾಗಿದೆ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ. ವಂಶಿಕೃಷ್ಣ ಮಾತನಾಡಿ, ಸರ್ಕಾರದ ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು. ಮಾಸ್ಕ್ ಧರಿಸದವರಿಗೆ ದಂಡ ವಿಧಿಸಲಾಗುತ್ತಿದೆ. ಕೋವಿಡ್ ಮಾರ್ಗಸೂಚಿಗಳನ್ನು ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಕಾರ್ಯಾಚರಣೆಯಲ್ಲಿ ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ, ಉಪವಿಭಾಗಾಧಿಕಾರಿ ಅಜಯ್, ಪಾಲಿಕೆ ಆಯುಕ್ತೆ ರೇಣುಕಾ, ಸೇರಿದಂತೆ ಪೊಲೀಸ್ ಹಾಗೂ ಪಾಲಿಕೆ ಸಿಬ್ಬಂದಿಗಳು ಭಾಗವಹಿಸಿದ್ದರು.