ವಿಕ್ಟೋರಿಯಾ ಕೋವಿಡ್ ಆಸ್ಪತ್ರೆಯಾಗಿ ಪರಿವರ್ತನೆ

ಬೆಂಗಳೂರು,ಏ.೧೮- ನಗರದಲ್ಲಿ ಸೋಂಕಿನ ಪ್ರಕರಣಗಳು ಮಿತಿಮೀರುತ್ತಿರುವ ಹಿನ್ನೆಲೆಯಲ್ಲಿ ವಿಕ್ಟೋರಿಯಾ ಆಸ್ಪತ್ರೆ ಕೋವಿಡ್ ಆಸ್ಪತ್ರೆಯಾಗಿ ಬದಲಾಗಿದೆ.
ಕಳೆದ ವರ್ಷ ವಿಕ್ಟೋರಿಯಾ ಆಸ್ಪತ್ರೆಯನ್ನು ಅತಿ ದೊಡ್ಡ ಕೋವಿಡ್ ಆಸ್ಪತ್ರೆಯನ್ನಾಗಿ ಮಾರ್ಪಾಡು ಮಾಡಲಾಗಿತ್ತು. ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಕಳೆದ ವರ್ಷ ೧.೫೦೦ ಹಾಸಿಗೆಗಳನ್ನು ಕೋವಿಡ್ ರೋಗಿಗಳಿಗೆ ಮೀಸಲಿಡಲಾಗಿತ್ತು.
ಸೋಂಕಿತರ ಸಂಖ್ಯೆ ಕಡಿಮೆಯಾದ ಹಿನ್ನೆಲೆಯಲ್ಲಿ ಕೋವಿಡ್ ಇಲ್ಲದ ರೋಗಿಗಳಿಗೆ ಚಿಕಿತ್ಸೆ ಆರಂಭಿಸಲಾಗಿತ್ತು. ಈಗ ನಗರದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಮಿತಿಮೀರಿದ್ದು, ವಿಕ್ಟೋರಿಯಾ ಆಸ್ಪತ್ರೆಯನ್ನು ಕೋವಿಡ್ ಆಸ್ಪತ್ರೆಯನ್ನಾಗಿ ಪರಿವರ್ತಿಸಲಾಗಿದೆ.
ವಿಕ್ಟೋರಿಯಾ ಆಸ್ಪತ್ರೆಗೆ ಬೆಂಗಳೂರು ಮಾತ್ರವಲ್ಲದೆ ರಾಜ್ಯದ ವಿವಿಧ ಭಾಗಗಳಿಂದ ರೋಗಿಗಳು ಹೆಚ್ಚಿನ ಸಂಖ್ಯೆಯಲ್ಲಿ ಚಿಕಿತ್ಸೆಗೆ ಆಗಮಿಸುತ್ತಾರೆ. ಆದರೆ, ನಗರದಲ್ಲಿ ಸೋಂಕು ನಿಯಂತ್ರಣಕ್ಕೆ ಬರುವತನಕ ಕೋವಿಡ್ ಬಿಟ್ಟು ಬೇರೆ ಯಾವುದೇ ಕಾಯಿಲೆ ಇದ್ದರೂ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ರೋಗಿಗಳಿಗೆ ಚಿಕಿತ್ಸೆ ದೊರೆಯುವುದಿಲ್ಲ.
ವಿಕ್ಟೋರಿಯಾ ಆಸ್ಪತ್ರೆ ಆವರಣದ ಟ್ರಾಮಾ ಕೇರ್ ಸೆಂಟರ್‌ನ್ನು ೨೦೨೦ ಮಾರ್ಚ್ ತಿಂಗಳಿಂದ ಸಂಪೂರ್ಣವಾಗಿ ಕೋವಿಡ್ ಚಿಕಿತ್ಸೆಗೆ ಮೀಸಲಿಡಲಾಗಿದೆ. ಸೋಂಕಿನ ಪ್ರಮಾಣ ಹೆಚ್ಚಾಗುತ್ತಿರುವುದರಿಂದ ಆಸ್ಪತ್ರೆಯ ಮುಖ್ಯ ಕಟ್ಟಡವನ್ನು ಕೋವಿಡ್ ಆಸ್ಪತ್ರೆಯಾಗಿ ಬದಲಾಯಿಸಲಾಗಿತ್ತು.
ವಿಕ್ಟೋರಿಯಾ ಆಸ್ಪತ್ರೆಯನ್ನು ಸಂಪೂರ್ಣವಾಗಿ ಕೋವಿಡ್ ಆಸ್ಪತ್ರೆಯನ್ನಾಗಿ ಪರಿವರ್ತಿಸಲು ಸೂಚನೆ ನೀಡಲಾಗಿದೆ. ಚಿಕಿತ್ಸೆ ಪಡೆಯುತ್ತಿರುವ ರೋಗಿಗಳು ಗುಣಮುಖರಾಗುತ್ತಿದ್ದಂತೆ ಅವರನ್ನು ಮನೆಗೆ ಕಳುಹಿಸಲು ಸೂಚಿಸಲಾಗಿದೆ. ಒಂದುವಾರದೊಳಗೆ ಎಲ್ಲ ರೋಗಿಗಳು ಮನೆಗೆ ತೆರಳಲಿದ್ದು, ಸೋಂಕಿತರಿಗೆ ಮಾತ್ರ ಚಿಕಿತ್ಸೆ ಪಡೆಯಲು ಅವಕಾಶ ನೀಡಲಾಗುತ್ತದೆ.