ಸಂಜೆವಾಣಿ ವಾರ್ತೆ
ಹೊಸಪೇಟೆ ಜೂ.29: ಜುಲೈ 1 ರಿಂದ 7 ರವರೆಗೂ ನಡೆಯುವ ಅರಣ್ಯೀಕರಣ ವೇಳೆಯಲ್ಲಿ ನೆಡುವ ಪ್ರತಿ ಸಸಿಯನ್ನು ದೀರ್ಘಕಾಲದವರೆಗೂ ಸಮರ್ಪಕ ನಿರ್ವಹಣೆ ಕೈಗೊಳ್ಳಲು ಅಗತ್ಯ ಕ್ರಮ ವಹಿಸಿ ಸಸಿ ನೆಡುವ ಕಾರ್ಯಕ್ರಮ ಆಚರಿಸಬೇಕು ಎಂದು ಜಿಲ್ಲಾಧಿಕಾರಿ ವೆಂಕಟೇಶ್ ಟಿ. ಅವರು ಅಧಿಕಾರಿಗಳಿಗೆ ಸೂಚಿಸಿದರು.
ರಾಜ್ಯದಲ್ಲಿ 5 ಕೋಟಿ ಸಸಿಗಳನ್ನು ನೆಡುವ ಬೃಹತ್ ಬೃಹತ್ ಕಾರ್ಯಕ್ರಮದ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಬುಧವಾರ ನಡೆದ ಪೂರ್ವಭಾವಿ ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳನ್ನು ಉದ್ದೇಶಿಸಿ ವಿಜಯನಗರ ಜಿಲ್ಲೆಯಲ್ಲಿ ಆಚರಣೆ ಕುರಿತು ಅವರು ಮಾತನಾಡಿದರು.
ಹೆಚ್ಚಿನ ಮಟ್ಟದಲ್ಲಿ ಸಸಿ ನೆಡುವ ಮೂಲಕ ಜಿಲ್ಲೆಯಲ್ಲಿ ಕಾರ್ಯಕ್ರಮ ಯಶಸ್ವಿಯಾಗಿ ಅನುಷ್ಠಾನಗೊಳ್ಳಲು ವಿವಿಧ ಇಲಾಖೆಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು. ಆಯಾ ಇಲಾಖೆಯ ಅಧಿಕಾರಿಗಳು ತಮ್ಮ ಇಲಾಖೆ ವ್ಯಾಪ್ತಿಯಲ್ಲಿ ಜಿಲ್ಲಾಡಳಿತದ ಸಹಯೋಗದೊಂದಿಗೆ ವಿವಿಧ ಕಾರ್ಯಕ್ರಮ ಆಯೋಜಿಸಿ ಆ ಮೂಲಕ ಸಪ್ತಾಹದ 7 ದಿನಗಳ ಕಾಲ ಹೆಚ್ಚಿನ ಮಟ್ಟದಲ್ಲಿ ಸಸಿ ನೆಡಬೇಕು ಎಂದರು.
ಅಗತ್ಯ ಸಸಿಗಳ ಪೂರೈಕೆಗೆ ಕ್ರಮ: ಜಿಲ್ಲೆ ವ್ಯಾಪ್ತಿಯಲ್ಲಿ ಬರುವ ಶಾಲಾ, ಕಾಲೇಜುಗಳು ಸೇರಿದಂತೆ ಗ್ರಾಮ ಪಂಚಾಯಿತಿ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ನರೇಗಾ ಕಾಮಗಾರಿ ಪ್ರದೇಶ, ಗಣಿಗಾರಿಕೆ ಪ್ರದೇಶ, ಕೃಷಿ ಇಲಾಖೆ ಅಧೀನದಲ್ಲಿ ಸಸಿಗಳನ್ನು ನೆಡಬೇಕು. ಜಿಲ್ಲಾ ಮಟ್ಟದ ಕಾರ್ಯಕ್ರಮದ ಜೊತೆಗೆ ಜಿಲ್ಲೆಯಲ್ಲಿ ಏಕಕಾಲದಲ್ಲಿ ಕಾರ್ಯಕ್ರಮ ನಡೆಯಬೇಕು. ಸಾಂಕೇತಿಕವಾಗಿ ಕಾರ್ಯಕ್ರಮ ನಡೆದ ಉಳಿದ 6 ದಿನಗಳು ಸಹ ಸಸಿ ನೆಡಲು ಅಗತ್ಯ ಕ್ರಮ ವಹಿಸಬೇಕು. ಆಯಾ ಇಲಾಖೆಗೆ ಅಗತ್ಯವಾಗುವ ಸಸಿಗಳ ವಿವರವನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಬೇಕು.
ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಕಾರ್ಯಕ್ರಮ: ಜಿಲ್ಲಾ ಉಸ್ತುವಾರಿ ಸಚಿವರಿಂದ ಕಾರ್ಯಕ್ರಮ ನಡೆಸಲು ಸಿದ್ಧತೆ ಕೈಗೊಳ್ಳಲಾಗುತ್ತದೆ. ಅದೇ ರೀತಿಯಾಗಿ ತಾಲ್ಲೂಕು ಮಟ್ಟದಲ್ಲಿ ಶಾಸಕರನ್ನು ಮತ್ತು ಸ್ಥಳೀಯ ಜನಪ್ರತಿನಿಧಿಗಳ ಸಮ್ಮುಖದಲ್ಲಿ ಕಾರ್ಯಕ್ರಮ ನೆರವೇರಿಸಲು ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.
ಸಸಿ ನೆಡುವ ಬೃಹತ್ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹಾಗೂ ವಿವಿಧ ಸಂಸ್ಥೆಗಳು ಸಹ ಜಿಲ್ಲಾಡಳಿತದೊಂದಿಗೆ ಕೈಜೋಡಿಸಲು ಅವಕಾಶ ಒದಗಿಸಲಾಗುತ್ತದೆ. ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಜಿಲ್ಲಾಡಳಿತವನ್ನು ಸಂಪರ್ಕಿಸಬಹುದಾಗಿದೆ.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿ ಬಾಬು ಬಿ.ಎಲ್., ಅಪರ ಜಿಲ್ಲಾಧಿಕಾರಿ ಅನುರಾಧ ಜಿ., ಪ್ರಾದೇಶಿಕ ಉಪ ಅರಣ್ಯ ಸಂರಕ್ಷಣಾಧಿಕಾರಿ ಅರ್ಸಲನ್, ಜಂಟಿ ಕೃಷಿ ನಿರ್ದೇಶಕ ಶರಣಪ್ಪ ಮುದಗಲ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಕೊಟ್ರೇಶ್ ಜಿ. ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
One attachment • Scanned by Gmail