ವಿಜಯನಗರ ಜಿಲ್ಲಾಡಳಿತದಿಂದ ಸ್ವಾತಂತ್ರ್ಯ ದಿನಾಚರಣೆ ಪೂರ್ವಸಿದ್ಧತಾ ಸಭೆ


ಹೊಸಪೇಟೆ(ವಿಜಯನಗರ),ಜು.27: 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ಧೂರಿಯಾಗಿ ಆಚರಿಸಲು ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್ ಅವರ ಅಧ್ಯಕ್ಷತೆಯಲ್ಲಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ನಿರ್ಧರಿಸಲಾಗಿದೆ.
75ನೇ ಸ್ವಾತಂತ್ರ್ಯ ದಿನವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲು ಉದ್ದೇಶಿಸಲಾಗಿದ್ದು,ಇದಕ್ಕಾಗಿ ಸ್ವಾಗತ ಸಮಿತಿ,ವೇದಿಕೆ ಸಮಿತಿ,ಸನ್ಮಾನ ಸಮಿತಿ, ಸ್ವಚ್ಛತಾ,ಪರೇಡ್ ಸಮಿತಿ, ಆಹಾರ, ಮಾಧ್ಯಮ ಸಮಿತಿ ಸೇರಿದಂತೆ ವಿವಿಧ ಸಮಿತಿಗಳನ್ನು ರಚಿಸಲಾಗಿದೆ. ವಿವಿಧ ಸಮಿತಿಗಳಿಗೆ ವಹಿಸಲಾದ ಜವಾಬ್ದಾರಿಗಳನ್ನು ಅತ್ಯಂತ ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಆ.15ರಂದು ಬೆಳಗ್ಗೆ 9ಕ್ಕೆ ನಗರದ ಜಿಲ್ಲಾಕ್ರೀಡಾಂಗಣದಲ್ಲಿ ಮುಜರಾಯಿ,ಹಜ್ ಮತ್ತು ವಕ್ಫ್ ಸಚಿವರು ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಶಶಿಕಲಾ ಜೊಲ್ಲೆ ಅವರು ಧ್ವಜಾರೋಹಣ ನೆರವೇರಿಸಿ,ವಿವಿಧ ಪಡೆಗಳಿಂದ ಗೌರವವಂದನೆ ಸ್ವೀಕರಿಸಿ,ಧ್ವಜಾರೋಹಣ ಸಂದೇಶ ನೀಡಲಿದ್ದಾರೆ. ಇದೇ ಸಂದರ್ಭದಲ್ಲು ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವರನ್ನು ಹಾಗೂ ಎಸ್ಸೆಸ್ಸೆಲ್ಸಿ/ಪಿಯುಸಿಯಲ್ಲಿ ಅತಿಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಲಾಗುತ್ತದೆ ಎಂದು ಅವರು ತಿಳಿಸಿದರು.
ಹೊಸಪೇಟೆ ನಗರಸಭೆಗೆ ಘನತ್ಯಾಜ್ಯ ವಿಲೇವಾರಿ ವಾಹನಗಳ ವಿತರಣೆ ಸೇರಿದಂತೆ ವಿವಿಧ ಸರಕಾರಿ ಸವಲತ್ತುಗಳ ಪತ್ರಗಳನ್ನು ಫಲಾನುಭವಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಶಶಿಕಲಾ ಜೊಲ್ಲೆ ಅವರು ವಿತರಿಸಲಿದ್ದಾರೆ. 5 ಸಾವಿರಕ್ಕೂ ಹೆಚ್ಚು ಜನರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದ್ದು,ಯಾವುದೇ ರೀತಿಯ ತೊಂದರೆಯಾಗದಂತೆ ಎಲ್ಲ ರೀತಿಯ ಅಗತ್ಯ ಸಿದ್ಧತೆಗಳನ್ನು ವಿವಿಧ ಸಮಿತಿಗಳ ಅಧಿಕಾರಿಗಳು ಮಾಡಬೇಕು ಎಂದು ಅವರು ಸೂಚನೆ ನೀಡಿದರು.
ವನಮಹೋತ್ಸವ ದಿನಾಚರಣೆ ಅಂಗವಾಗಿ ಈ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಪ್ರತಿ ವಿದ್ಯಾರ್ಥಿಗೆ ಸಸಿಗಳನ್ನು ಅರಣ್ಯ ಇಲಾಖೆ ವತಿಯಿಂದ ವಿತರಿಸಲಾಗುತ್ತದೆ. ಇದೇ ಸಂದರ್ಭದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಅವರು ತಿಳಿಸಿದರು.
ಪೊಲೀಸ್, ಗೃಹರಕ್ಷಕದಳ, ಆಶಾಗಳು, ಅಂಗನವಾಡಿ ಕಾರ್ಯಕರ್ತೆಯರು, ಪೌರಕಾರ್ಮಿಕರು, ಎನ್‍ಸಿಸಿ, ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಭಾರತ ಸೇವಾದಳ,ಅಬಕಾರಿ,ಅರಣ್ಯ ಇಲಾಖೆ ತಂಡಗಳು ಸೇರಿದಂತೆ ವಿವಿಧ ತಂಡಗಳು ಪರೇಡ್‍ನಲ್ಲಿ ಭಾಗವಹಿಸಲಿವೆ ಎಂದರು.

 ವಿಜಯನಗರದ ಪ್ರತಿ ಮನೆಯ ಮೇಲೂ ತಿರಂಗಾ ಹಾರಾಟ:
ಅಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ಹರ್ ಘರ್ ತಿರಂಗಾ ಅಭಿಯಾನದ ನಿಮಿತ್ತ ಜಿಲ್ಲೆಯ ಪ್ರತಿ ಮನೆಯ ಮೇಲೂ ತಿರಂಗಾ ಧ್ವಜ ಹಾರಾಡಬೇಕು ಎಂದು ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್ ಅವರು ತಿಳಿಸಿದರು.
ಇದಕ್ಕಾಗಿ ಜಿಲ್ಲೆಯಲ್ಲಿ 1.50ಲಕ್ಷ ಭಾರತ ಧ್ವಜಗಳ ಹಾರಾಟದ ಗುರಿಯನ್ನು ಜಿಲ್ಲಾಡಳಿತ ಹಾಕಿಕೊಂಡಿದ್ದು,ಈಗಾಗಲೇ ಜಿಲ್ಲೆಗೆ 20 ಸಾವಿರ ಧ್ವಜಗಳು ಬಂದಿವೆ ಎಂದು ವಿವರಿಸಿದ ಡಿಸಿ ಅನಿರುದ್ಧ ಶ್ರವಣ್ ಅವರು ಪ್ರತಿ ಮನೆಯ ಮೇಲೂ ಧ್ವಜಗಳ ಹಾರಾಡುವ ನಿಟ್ಟಿನಲ್ಲಿ ವಿವಿಧ ಇಲಾಖೆಗಳಿಗೆ ಗುರಿ ಹಂಚಿಕೆ ಮಾಡಲಾಗಿದ್ದು,ಅದರನ್ವಯ ಕಾರ್ಯಪ್ರವೃತ್ತರಾಗಬೇಕು ಎಂದು ಅವರು ಸೂಚನೆ ನೀಡಿದರು.
ಇದೇ 29ರಂದು ಬೆಳಗ್ಗೆ 9ಕ್ಕೆ ಹೊಸಪೇಟೆಯಲ್ಲಿ ನಗರಸಭೆಯ ಮಳಿಗೆಯೊಂದರಲ್ಲಿ ಧ್ವಜ ಮಾರಾಟ ಮಳಿಗೆಯನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಶಶಿಕಲಾ ಜೊಲ್ಲೆ ಅವರು ಉದ್ಘಾಟಿಸಿ ಧ್ವಜ ಖರೀದಿಗೆ ಚಾಲನೆ ನೀಡಲಿದ್ದಾರೆ ಎಂದರು.
ಹರ್‍ಘರ್ ತಿರಂಗಾಗೆ ಸಂಬಂಧಿಸಿದಂತೆ ಕೇಬಲ್,ಚಲನಚಿತ್ರಮಂದಿರಗಳು, ಮುದ್ರಣ,ವಿದ್ಯುನ್ಮಾನ ಮಾಧ್ಯಮ,ಸಾಮಾಜಿಕ ಮಾಧ್ಯಮಗಳ ಮೂಲಕ ವ್ಯಾಪಕ ಪ್ರಚಾರ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಡಿಸಿ ಅನಿರುದ್ಧ ಶ್ರವಣ್ ಅವರು ಸೂಚನೆ ನೀಡಿದರು.

 ಆ.15ರಂದು ಸಂಜೆ ಬೃಹತ್ ಸಾಂಸ್ಕೃತಿಕ ಕಾರ್ಯಕ್ರಮ:
ಅಜಾದಿ ಕಾ ಅಮೃತ್ ಮಹೋತ್ಸವ ಅಂಗವಾಗಿ ಪ್ರವಾಸೋದ್ಯಮ ಇಲಾಖೆ ವತಿಯಿಂದ ಆ.15ರಂದು ಸಂಜೆ ನಗರದ ಕ್ರೀಡಾಂಗಣದಲ್ಲಿ ಬೃಹತ್ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್ ಅವರು ತಿಳಿಸಿದರು.
ಮುಜರಾಯಿ,ಹಜ್ ಮತ್ತು ವಕ್ಫ್ ಸಚಿವರು ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಶಶಿಕಲಾ ಜೊಲ್ಲೆ, ಪ್ರವಾಸೋದ್ಯಮ,ಪರಿಸರ ಹಾಗೂ ಜೀವಿಶಾಸ್ತ್ರ ಸಚಿವರಾದ ಆನಂದಸಿಂಗ್ ಸೇರಿದಂತೆ ಅನೇಕರು ಉಪಸ್ಥಿತರಿರಲಿದ್ದಾರೆ. ದೇಶದ ಸ್ವಾತಂತ್ರ್ಯ ಹೋರಾಟ,ದೇಶಭಕ್ತಿ ಬಿಂಬಿಸುವ ಕಾರ್ಯಕ್ರಮಗಳು ನಡೆಯಲಿದ್ದು, ಇದಕ್ಕಾಗಿ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ವಿಜಯನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ, ಅಪರ ಜಿಲ್ಲಾಧಿಕಾರಿ ಮಹೇಶಬಾಬು, ಸಹಾಯಕ ಆಯುಕ್ತ ಸಿದ್ದರಾಮೇಶ್ವರ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಇದ್ದರು.