ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಶಿಕ್ಷಣ ಅಗತ್ಯ

ಗೌರಿಬಿದನೂರು,ಜೂ.೬-ತಾಲ್ಲೂಕಿನ ಅಲೀಪುರ ಸರ್ಕಾರಿ ಪ್ರೌಢಶಾಲೆಯಲ್ಲಿ ಸೋಮವಾರ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಗಣ್ಯರು ಮತ್ತು ಶಾಲಾ ಶಿಕ್ಷಕರು ಶಾಲಾ ಆವರಣದಲ್ಲಿ ಗಿಡ ನೆಟ್ಟು ನೀರುಣಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ವೇಳೆ ಕ್ಷೇತ್ರ ಸಮನ್ವಯಾಧಿಕಾರಿ ಜಿ.ಗಂಗರೆಡ್ಡಿ ಮಾತನಾಡಿ, ವಿದ್ಯಾರ್ಥಿಗಳು ಕಲಿಕಾ ಹಂತದಲ್ಲಿ ಗುಣಾತ್ಮಕ ಮತ್ತು ಮೌಲ್ಯಾಧಾರಿತ ಶಿಕ್ಷಣವನ್ನು ಕಲಿಯುವ ಜತೆಗೆ ತಮ್ಮ ಬದುಕಿಗೆ ಅವಶ್ಯಕವಿರುವ ಮೌಲ್ಯಗಳನ್ನು ಕಲಿಯಬೇಕಾಗಿದೆ. ಜತೆಗೆ ಪರಿಸರ ಸಂರಕ್ಷಣೆ, ಸ್ವಚ್ಛತೆ ಹಾಗೂ ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆಯ ಬಗ್ಗೆ ಕಾಳಜಿ ವಹಿಸಬೇಕಾಗಿದೆ. ಇದರಿಂದಾಗಿ ಸಮಾಜದಲ್ಲಿ ಪರಿಪೂರ್ಣ ವ್ಯಕ್ತಿಗಳಾಗಿ ಬದುಕಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದರು.
ಬೆಂಗಳೂರಿನ ಕೃತಗ್ಯತಾ ಟ್ರಸ್ಟ್ ನ ಅಧ್ಯಕ್ಷರಾದ ಅರುಣಾ ದಿವಾಕರ್ ಮಾತನಾಡಿ, ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ ಜೀವನದಲ್ಲಿ ಬದುಕುವ ಕೌಶಲ್ಯ ಮತ್ತು ಮೌಲ್ಯಗಳನ್ನು ಕಲಿಯಲು ಸಾಧ್ಯವಾಗುತ್ತದೆ. ಸರ್ಕಾರ ಹಾಗೂ ವಿವಿಧ ಸಂಘಸಂಸ್ಥೆಗಳು ನೀಡುವ ಸಹಕಾರವನ್ನು ಸದ್ಬಳಕೆ ಮಾಡಿಕೊಂಡು ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ತಮ್ಮ ಭವಿಷ್ಯವನ್ನು ಉಜ್ವಲವಾಗಿ ರೂಪಿಸಿಕೊಳ್ಳಬೇಕಾಗಿದೆ. ಇದರಿಂದಾಗಿ ಎಲ್ಲ ಪೋಷಕರಿಗೆ ಬದುಕಿನಲ್ಲಿ ಸಾರ್ಥಕ ಮನೋಭಾವ ಮೂಡುತ್ತದೆ ಎಂದು ಹೇಳಿದರು.

ಇದೇ ವೇಳೆ ವಿಜ್ಞಾನ ಶಿಕ್ಷಕರಾದ ಆರ್.ಯು.ನವೀನ್ ಕುಮಾರ್ ರವರು ರಚಿಸಿರುವ ಪರಿಸರ ಗೀತೆಯನ್ನು ಎಲ್ಲ ವಿದ್ಯಾರ್ಥಿಗಳು ಹಾಡಿದರು. ೨೦೨೨-೨೩ ನೇ ಸಾಲಿನ ಎಸ್ಸೆಸ್ಸೆಲ್ಸಿ ಯಲ್ಲಿ ಹೆಚ್ಚು ಅಂಕಗಳನ್ನು ಪಡೆದಿದ್ದ ಮೇಘನಾ, ರೋಹಿತ್ ರೆಡ್ಡಿ ಮತ್ತು ವನಿತಾ ರವರನ್ನು ಅಭಿನಂಧಿಸಿದರು.
ಕೃತಗ್ಯತಾ ಟ್ರಸ್ಟ್ ವತಿಯಿಂದ ಸುಮಾರು ೨೨ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಕಲಿಕಾ ಪರಿಕರಗಳನ್ನು ವಿತರಣೆ ಮಾಡಿದರು.
ಈ ವೇಳೆ ಗ್ರಾ.ಪಂ ಅಧ್ಯಕ್ಷೆ ಉಮಾದೇವಿ, ಪಿಡಿಒ ಮುನೋಜಿರಾವ್, ಮುಖ್ಯ ಶಿಕ್ಷಕಿ ವನಜಾಕ್ಷಮ್ಮ, ಶಿಕ್ಷಕರಾದ ಆರ್.ಯು.ನವೀನ್ ಕುಮಾರ್, ಸಿ.ಆರ್.ಪಿ ರಂಗನಾಥ್, ಮುಖಂಡರಾದ ದಿವಾಕರ್, ಶ್ರೀನಿಧಿ, ರಾಮಪ್ಪ, ಮನು ಸೇರಿದಂತೆ ಇತರರು ಭಾಗವಹಿಸಿದ್ದರು.