
ಸಂಜೆವಾಣಿ ವಾರ್ತೆ
ಚಿತ್ರದುರ್ಗ.ಸೆ.೧೬; ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಭಾರತೀಯ ಸಂವಿಧಾನದ ಅರಿವು ಹೆಚ್ಚು ಅಗತ್ಯವಿದೆ ಎಂದು ಯೋಜನಾ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಹೇಳಿದರು.ನಗರದ ತರಾಸು ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಭಾರತ ಸಂವಿಧಾನ ಪೀಠಿಕೆಯ ಜಾಗತಿಕ ವಾಚನ, ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.ವಿದ್ಯಾರ್ಥಿಗಳು ಭಾರತದ ಸಂವಿಧಾನವನ್ನು ಸರಿಯಾಗಿ ಅರ್ಥಮಾಡಿಕೊಂಡು, ಹೆಚ್ಚು ತಿಳಿಯುವ ಮೂಲಕ ಸಂವಿಧಾನದ ಬಗ್ಗೆ ಅರಿವು ಹೊಂದಿರಬೇಕು. ಈ ಬಗ್ಗೆ ಹೆಚ್ಚು ಹೆಚ್ಚು ಅಭ್ಯಾಸ ಮಾಡಬೇಕು. ಸಂವಿಧಾನದ ಪೀಠಿಕೆಯನ್ನು ಅರ್ಥೈಸಿಕೊಂಡು, ಪ್ರತಿಯೊಬ್ಬರು ಅನುಸರಿಸಬೇಕು ಎಂದು ತಿಳಿಸಿದರು.ಪ್ರಪಂಚದಲ್ಲಿಯೇ ಅತ್ಯಂತ ದೊಡ್ಡದಾದ ಪ್ರಜಾಪ್ರಭುತ್ವ ಹೊಂದಿದ ಭಾರತ ದೇಶಕ್ಕೆ ಪವಿತ್ರವಾದ ಸಂವಿಧಾನದ ಕೊಟ್ಟಿರುವಂತಹ ಕೀರ್ತಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಸಲ್ಲುತ್ತದೆ. ಸಂವಿಧಾನದ ರಚನೆ ಮಾಡಿರುವಂತಹ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ನಾವೆಲ್ಲರೂ ಸದಾ ಸ್ಮರಿಸಬೇಕು ಎಂದು ಹೇಳಿದರು.ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಮಾತನಾಡಿ, ಪ್ರಜಾಪ್ರಭುತ್ವದಲ್ಲಿ ನಾವು ಜೀವನ ನಡೆಸುತ್ತಿದ್ದೇವೆ. ಪ್ರಜಾಪ್ರಭುತ್ವದಲ್ಲಿ ನಮಗೆ ನೀಡಿರುವ ಹಕ್ಕುಗಳು, ಜವಾಬ್ದಾರಿಗಳನ್ನು ತಿಳಿದುಕೊಳ್ಳಲು ಸಂವಿಧಾನದ ಪೀಠಿಕೆಯನ್ನು ಓದುವ ಮೂಲಕ ಸಂವಿಧಾನದ ಕುರಿತು ಹೆಚ್ಚಿನ ಮಾಹಿತಿ ಪಡೆಯಬೇಕು.ಸಂವಿಧಾನದ ಪೀಠಿಕೆಯ ಸಾರಾಂಶದ ಬಗ್ಗೆ ನಾವೆಲ್ಲರೂ ತಿಳಿದುಕೊಳ್ಳಬೇಕು. ಇದರಿಂದ ನಮ್ಮ ದೇಶ ಪ್ರಜಾಪ್ರಭುತ್ವದಲ್ಲಿ ಉತ್ತುಂಗಕ್ಕೆ ಹೋಗಬಹುದು ಹಾಗೂ ಇಡೀ ವಿಶ್ವಕ್ಕೆ ಮಾದರಿಯಾಗಿ ಇರಬಹುದು. ಹಾಗಾಗಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಬೇಕಿದೆ ಎಂದು ಹೇಳಿದರು.
ಕಾರ್ಯಕ್ರಮದ ಅಂಗವಾಗಿ ಭಾರತ ಸಂವಿಧಾನದ ಪೀಠಿಕೆಯನ್ನು ಸಮಾರಂಭದಲ್ಲಿದ್ದ ಎಲ್ಲರೂ ವಾಚನ ಮಾಡಿ, ಪ್ರತಿಜ್ಞಾ ವಿಧಿ ಸ್ವೀಕರಿಸಿದರು.ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜೆ.ಕುಮಾರಸ್ವಾಮಿ, ತಹಶೀಲ್ದಾರ್ ಡಾ.ನಾಗವೇಣಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಜಗದೀಶ್ ಹೆಬ್ಬಳ್ಳಿ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಓ.ಪರಮೇಶ್ವರಪ್ಪ ಸೇರಿದಂತೆ ಮುಖಂಡರಾದ ತಾಜ್‍ಪೀರ್, ನಿರಂಜನಮೂರ್ತಿ, ಡಿ.ಎನ್.ಮೈಲಾರಪ್ಪ, ರವಿ, ರಾಜಣ್ಣ, ಕುಮಾರಸ್ವಾಮಿ, ಖಾದಿ ರಮೇಶ್ ಸೇರಿದಂತೆ ಮತ್ತಿತರರು ಇದ್ದರು.