ವಿದ್ಯಾರ್ಥಿಗಳಿಗೆ ಸೋಂಕಿನ ಭೀತಿ

ಮೈಸೂರು, ನ.೨೮- ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಅದರಲ್ಲೂ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಲ್ಲಿ ಸೋಂಕು ಹೆಚ್ಚಾಗುತ್ತಿರುವುದು ಪೋಷಕರಲ್ಲೂ ಭೀತಿಗೆ ಕಾರಣವಾಗಿದೆ.
ದಕ್ಷಿಣ ಆಫ್ರಿಕಾದಲ್ಲಿ ಓಮಿಕ್ರಾನ್ ತಳಿ ಪತ್ತೆಯಾಗಿರುವುದು ತೀವ್ರ ಕಳವಳ ಸೃಷ್ಟಿಸಿರುವ ಬೆನ್ನಲ್ಲೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ವಿದ್ಯಾರ್ಥಿಗಳಿಗೆ ಸೋಂಕು ತಗುಲಿರುವುದು ಭೌತಿಕ ತರಗತಿಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ.
ಈಗ ದಾಖಲಾಗುತ್ತಿರುವ ಅಂಕಿ-ಅಂಶಗಳ ಪ್ರಕಾರ ಕಳೆದ ೭ ದಿನಗಳ ಅವಧಿಯಲ್ಲಿ ೧೯ ವರ್ಷಕ್ಕಿಂತ ಕಡಿಮೆ ಇರುವ ವ್ಯಕ್ತಿಗಳಲ್ಲಿ ಸೋಂಕಿನ ಪ್ರಮಾಣ ಹೆಚ್ಚಳವಾಗಿದ್ದು, ಇದು ಶೇ. ೪೬.೪ಕ್ಕೆ ಏರಿಕೆಯಾಗಿವೆ.
ಬೆಂಗಳೂರು ನಗರ ಪಾಲಿಕೆ ವ್ಯಾಪ್ತಿಯಲ್ಲಿ ಕಳೆದ ೭ ದಿನಗಳ ಅವಧಿಯಲ್ಲಿ ಶೇ. ೩೬.೨ ರಷ್ಟು ಪ್ರಕರಣಗಳು ದಾಖಲಾಗಿವೆ. ಇದಕ್ಕೂ ಮುನ್ನ ೧೩೫ ಪ್ರಕರಣಗಳು ದಾಖಲಾಗಿದ್ದವು. ಈಗ ಇದು ೧೮೪ಕ್ಕೆ ಏರಿಕೆಯಾಗಿದೆ.
ಧಾರವಾಡದ ಎಸ್‌ಡಿಎಂ ಕಾಲೇಜು, ಬೆಂಗಳೂರಿನ ಇಂಟರ್ ನ್ಯಾಷನಲ್ ಸ್ಕೂಲ್, ಆನೇಕಲ್ ತಾಲ್ಲೂಕಿನ ಸ್ಫೂರ್ತಿ ನರಸಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿದೆ.
ಈ ಮೂರು ಕಾಲೇಜುಗಳನ್ನು ಬಂದ್ ಮಾಡಲಾಗಿದೆ ಎಂದು ತಾಂತ್ರಿಕ ಸಲಹಾ ಸಮಿತಿಯ ನಿರ್ದೇಶಕ ಡಾ. ಪಿ.ಜಿ ಗಿರೀಶ್ ತಿಳಿಸಿದ್ದಾರೆ. ಈ ಮೂರು ಕಾಲೇಜುಗಳಲ್ಲಿ ಇತರ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ.
ಬಹುತೇಕ ಕಡೆಗಳಲ್ಲಿ ಸಾಮಾಜಿಕ ಅಂತರ, ಮಾಸ್ಕ್ ಮತ್ತು ನ್ಯಾನಿಟೈಸರ್ ಬಳಕೆಯನ್ನು ಪಾಲಿಸದಿರುವುದು ಬೆಳಕಿಗೆ ಬಂದಿದೆ.
ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಅಕಾಲಿಕ ಮಳೆಯಿಂದಾಗಿ ಶೀತ, ಕೆಮ್ಮು, ನೆಗಡಿ, ಜ್ವರದಿಂದ ಬಳಲುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಇಂತಹ ರೋಗ ಲಕ್ಷಣಗಳಿರುವ ಮಕ್ಕಳನ್ನು ಪರೀಕ್ಷೆಗೆ ಒಳಪಡಿಸದಿರುವುದು ಸೋಂಕು ಹೆಚ್ಚಳಕ್ಕೆ ಕಾರಣವಾಗಿದೆ.
ಕರ್ನಾಟಕ ಖಾಸಗಿ ಶಾಲೆಗಳ ಸಂಘದ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಪ್ರತಿಕ್ರಿಯೆ ನೀಡಿ ಶಾಲೆಗಳು ಹಾಗೂ ಕಾಲೇಜುಗಳಲ್ಲಿ ಸೋಂಕು ಹರಡುತ್ತಿದೆ ಎಂಬ ಆರೋಪಗಳನ್ನು ತಳ್ಳಿ ಹಾಕಿದ್ದಾರೆ.
ಸೋಂಕು ಹರಡುತ್ತಿರುವುದನ್ನು ತಡೆಗಟ್ಟಲು ಕಠಿಣ ಕ್ರಮ ಕೈಗೊಳ್ಳಲು ರಾಜ್ಯಸರ್ಕಾರ ಮುಂದಾಗಿದ್ದು, ವಿಮಾನ ನಿಲ್ದಾಣ, ಬಸ್ ನಿಲ್ದಾಣ ಹಾಗೂ ರೈಲು ನಿಲ್ದಾಣಗಳಲ್ಲಿ ವ್ಯಾಪಕ ತಪಾಸಣೆ ಕೈಗೊಳ್ಳಲಾಗಿದೆ.

೬೪ ವಿದ್ಯಾರ್ಥಿಗಳಿಗೆ ಸೋಂಕು
ಒಂದು ವಾರದ ಅವಧಿಯಲ್ಲಿ ಮೈಸೂರಿನ ಕಾವೇರಿ ನರ್ಸಿಂಗ್ ಕಾಲೇಜು ಹಾಗೂ ಸೇಂಟ್ ಜೋಸಫ್ ನರ್ಸಿಂಗ್ ಕಾಲೇಜುಗಳ ೬೪ ವಿದ್ಯಾರ್ಥಿಗಳಿಗೆ ಸೋಂಕು ಕಾಣಿಸಿಕೊಂಡಿದೆ. ಇದು ವಿದ್ಯಾರ್ಥಿಗಳಲ್ಲಿ ಆತಂಕ ಮೂಡಿಸಿದೆ.
ನ. ೧೬ ರಿಂದ ೨೨ರವರೆಗಿನ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ಸೋಂಕು ಕಾಣಿಸಿಕೊಂಡಿರುವುದನ್ನು ಜಿಲ್ಲಾ ಆರೋಗ್ಯಾಧಿಕಾರಿ ಡ. ಕೆ.ಎಚ್ ಪ್ರಸಾದ್ ದೃಢಪಡಿಸಿದ್ದಾರೆ.
ಸೋಂಕು ಇನ್ನಷ್ಟು ಮಂದಿಗೆ ಹರಡುವುದನ್ನು ತಡೆಯಲು ಕಠಿಣ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕರ್ನಾಟಕ-ಕೇರಳ ಗಡಿ ಪ್ರದೇಶದ ಚೆಕ್‌ಪೋಸ್ಟ್‌ನಲ್ಲಿ ಸಿಬ್ಬಂದಿ ನಿಯೋಜಿಸಿ ಗಡಿಯಲ್ಲಿ ಸಂಚರಿಸುವ ಜನರ ಮೇಲೆ ನಿಗಾ ವಹಿಸಲಾಗಿದೆ ಎಂದರು.
ಕರ್ನಾಟಕ-ಕೇರಳ ಗಡಿ ಪ್ರದೇಶ ಹೆಚ್‌ಡಿ ಕೋಟೆ ತಾಲ್ಲೂಕಿನ ಬಾವಲಿ ಚೆಕ್‌ಪೋಸ್ಟ್‌ನಲ್ಲಿ ಜನರ ಮೇಲೆ ನಿಗಾ ವಹಿಸಲು ಸಿಬ್ಬಂದಿ ನಿಯೋಜಿಸಲಾಗಿದೆ.